ಸಾರಾಂಶ
ಕನ್ನಡಪ್ರಭ ವಾರ್ತೆ ಕುಶಾಲನಗರ ಕುಶಾಲನಗರ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾಮಗಾರಿಗೆ ತರಲಾದ ಶಿಲಾ ಕಲ್ಲುಗಳನ್ನು ದೇವಾಲಯ ಆಡಳಿತ ಮಂಡಳಿ ಮತ್ತು ಜೀರ್ಣೋದ್ಧಾರ ಸಮಿತಿಯ ಪ್ರಮುಖರು ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ಬರಮಾಡಿಕೊಂಡರು. ಕಾರ್ಕಳದಿಂದ ಎರಡು ಲಾರಿಗಳ ಮೂಲಕ ತಂದ ಶಿಲಾ ಕಲ್ಲುಗಳನ್ನು ಕುಶಾಲನಗರ ಬೈಚನಹಳ್ಳಿ ಶ್ರೀ ಮಾರಿಯಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಬರಮಾಡಿಕೊಳ್ಳಲಾಯಿತು. ನಂತರ ಮೆರವಣಿಗೆಯಲ್ಲಿ ಬಂದು ಪಟ್ಟಣದ ಶ್ರೀ ಮಹಾ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸುವುದರೊಂದಿಗೆ ಅಯ್ಯಪ್ಪ ಸ್ವಾಮಿ ದೇವಾಲಯ ಆವರಣಕ್ಕೆ ತರಲಾಯಿತು. ಅರ್ಚಕರಾದ ಸೋಮಶೇಖರ ಭಟ್ ಅವರು ಶಿಲೆಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷರಾದ ಬಿ ಪಿ ಗಣಪತಿ, ಅಂದಾಜು 2.5 ಕೋಟಿ ರು. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿ ಈಗಾಗಲೇ ಆರಂಭಗೊಂಡಿದೆ. ದಾನಿಗಳ ಮತ್ತು ಭಕ್ತಾದಿಗಳ ಸಹಕಾರದೊಂದಿಗೆ ಇನ್ನೆರಡು ವರ್ಷಗಳ ಅವಧಿಯಲ್ಲಿ ದೇವಾಲಯ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭ ಜೀರ್ಣೋದ್ಧಾರ ಸಮಿತಿ ಸಂಚಾಲಕರಾದ ವಿ ಎಸ್ ಆನಂದಕುಮಾರ್ ಮತ್ತು ಸಮಿತಿಯ ಪದಾಧಿಕಾರಿಗಳು ಪ್ರಮುಖರು ಭಕ್ತಾದಿಗಳು ಇದ್ದರು.