ಸಾರಾಂಶ
ಕನ್ನಡಪ್ರಭ ವಾರ್ತೆ ಬೆಂಗಳೂರು
ಮಹಿಳಾ ದೌರ್ಜನ್ಯದ ವಿಷಯದಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಗುರುವಾರ ಪಕ್ಷದ ಕಚೇರಿಯಲ್ಲಿ ಆಯೋಜಿಸಿದ್ದ ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಜನರು ಈ ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ. ಇದು ಜನವಿರೋಧಿ ಸರ್ಕಾರ ಎಂದು ಟೀಕಿಸಿದರು. ವಿಪಕ್ಷವಾಗಿದ್ದಾಗ ಹೋರಾಟಗಳು ಅನಿವಾರ್ಯ. ಚುನಾವಣೆ ಬಂದಾಗ ಮಾತ್ರ ಹೋರಾಟ ಮಾಡಿದರೆ ಅದು ಜನತೆಗೆ ಮಾಡಿದ ಅವಮಾನ ಮತ್ತು ಅನ್ಯಾಯ. ರಾಜ್ಯದ ಚುಕ್ಕಾಣಿ ಹಿಡಿದ ಸರ್ಕಾರ ಜನವಿರೋಧಿ ನೀತಿಗಳನ್ನು ಅನುಸರಿಸುತ್ತದೋ ಆಗ ರಾಜ್ಯದ ಜನರ ಪರವಾಗಿ ಹೋರಾಡುವುದು ನಮ್ಮ ಕರ್ತವ್ಯ ಎಂದರು.ಈ ದುಷ್ಟ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಹಿಳೆಯರ ಮೇಲೆ ನಿರಂತರವಾಗಿ ದೌರ್ಜನ್ಯ ಹೆಚ್ಚಾಗಿದೆ. ರಾಜ್ಯದಲ್ಲಿ ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣದ ವಿರುದ್ಧ ಹೋರಾಟಗಳು ನಡೆದಿವೆ. ಮಹಿಳಾ ದೌರ್ಜನ್ಯ ನಿರಂತರವಾಗಿ ನಡೆಯುತ್ತಿದೆ. ಮಹಿಳೆಯರ ಮೇಲಿನ ದೌರ್ಜನ್ಯದ ಸಂದರ್ಭದಲ್ಲಿ ಮುಖ್ಯಮಂತ್ರಿ, ಗೃಹ ಸಚಿವ, ಸಚಿವರ ನಡವಳಿಕೆ ಪ್ರಮುಖವಾಗುತ್ತದೆ ಎಂದು ವಿಶ್ಲೇಷಿಸಿದರು.ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಕೆ.ಮಂಜುಳ ಮಾತನಾಡಿ, ಮಹಿಳೆಯರ ಮೇಲೆ ದೌರ್ಜನ್ಯ ನಡೆದಾಗ ನಿರ್ದಾಕ್ಷಿಣ್ಯ ಕ್ರಮ ಅಗತ್ಯ. ಆಗ ದುಷ್ಟರು, ದುರುಳರು, ಕ್ರಿಮಿಗಳು ಮನೆ ಸೇರಿಕೊಳ್ಳುತ್ತಾರೆ ಎಂದು ತಿಳಿಸಿದರು.
ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರು ಮತ್ತು ಮಹಿಳಾ ಮೋರ್ಚಾ ರಾಜ್ಯ ಉಸ್ತುವಾರಿ ಶ್ರೀಮತಿ ಸೋನಲ್ ಬೆನ್ ಪಟೇಲ್, ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಡಾ.ಶೋಭಾ, ಮಹಿಳಾ ಮೋರ್ಚಾ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.