ಸಾರಾಂಶ
ಬೆಂಗಳೂರು : ದೇಶದ ಮಾಜಿ ಉಪಪ್ರಧಾನಿ ಹಸಿರುಕ್ರಾಂತಿ ಹರಿಕಾರ ಬಾಬು ಜಗಜೀವನರಾಮ್ ಅವರು ನೀಡಿದ ಉತ್ತಮ ಆಡಳಿತ ನಮ್ಮೆಲ್ಲರಿಗೂ ಸ್ಫೂರ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬಾಬುಜಗಜೀವನರಾಂ ಅವರ ಪುಣ್ಯಸ್ಮರಣೆ ಅಂಗವಾಗಿ ಭಾನುವಾರ ವಿಧಾನಸೌಧದ ಪಶ್ಚಿಮ ದ್ವಾರದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿ ಮಾತನಾಡಿದರು.
ರಾಷ್ಟ್ರಕಟ್ಟಿದ ಅಪರೂಪದ ನಾಯಕರಲ್ಲಿ ಬಾಬುಜೀ ಕೂಡ ಒಬ್ಬರು. ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಕಾರ್ಮಿಕರ ನಾಯಕರಾಗಿದ್ದವರು. ಸಾಮಾಜಿಕ ನ್ಯಾಯಕ್ಕಾಗಿ ಬಹಳಷ್ಟು ಪ್ರಯತ್ನ, ಹೋರಾಟ ಮಾಡಿದವರು. ಆಧುನಿಕ ಭಾರತದ ನಿರ್ಮಾಣದ ಅಭಿವೃದ್ಧಿಗೆ ಸ್ವಾತಂತ್ರ್ಯ ಭಾರತದಲ್ಲಿ ಅವರು ನಿರ್ವಹಿಸಿದ ಪಾತ್ರವೂ ಪ್ರಮುಖವಾದುದು. ಅಂದಿನ ಕೇಂದ್ರ ಸರ್ಕಾರದಲ್ಲಿ ಅನೇಕ ಕೃಷಿ, ರಕ್ಷಣಾ ಇಲಾಖೆ ಸೇರಿ ಅನೇಕ ಖಾತೆಗಳನ್ನು ನಿಭಾಯಿಸಿ ಉತ್ತಮ ಆಡಳಿತಗಾರರಾಗಿ ಸೇವೆ ಸಲ್ಲಿಸಿದವರು. ಅವರು ಉತ್ತಮ ಆಡಳಿತ ನೀಡಲು ನಮ್ಮೆಲ್ಲರಿಗೂ ಸ್ಫೂರ್ತಿ ಎಂದರು.
ಸ್ವಾತಂತ್ರ್ಯ ಭಾರತದಲ್ಲಿ ಆಹಾರದ ಕೊರತೆ ಇತ್ತು. ನಾವಿನ್ನೂ ಆಗ ಆ ಕ್ಷೇತ್ರದಲ್ಲಿ ಸ್ವಾವಲಂಬಿಗಳಾಗಿರಲಿಲ್ಲ. ಅಂತಹ ಸಂದರ್ಭದಲ್ಲಿ ಕೃಷಿ ಸಚಿವರಾಗಿ ಹರಿಸುಕ್ರಾಂತಿಯನ್ನು ಮಾಡಿದವರು ಬಾಬು ಜಗಜೀವನರಾಮ್. ಅಂತಹ ನಾಯಕರನ್ನು ಸದಾ ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು.
ಈ ವೇಳೆ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಮಾಜಿ ಸಚಿವ ಎಚ್.ಆಂಜನೇಯ, ವಿವಿಧ ಸಂಘಸಂಸ್ಥೆಗಳ ಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.