ಸಾರಾಂಶ
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಅವರ 117ನೇ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಿತು. ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಮಾತನಾಡಿದರು.
ಕನ್ನಡಪ್ರಭ ವಾರ್ತೆ ಮಣಿಪಾಲ
ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಂ ಅವರ ಹೋರಾಟ ಹಾಗೂ ಜೀವನದ ಮೌಲ್ಯಗಳು ಪ್ರತಿಯೊಬ್ಬರಿಗೂ ಆದರ್ಶವಾಗಬೇಕು. ಅವುಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಇಂತಹ ಮಹಾನ್ ವ್ಯಕ್ತಿಗಳಿಗೆ ಗೌರವ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದರು.ಅವರು ಶುಕ್ರವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ನಡೆದ ಡಾ.ಬಾಬು ಜಗಜೀವನರಾಂ ಅವರ 117ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಬಾಬಾ ಸಾಹೇಬ ಅಂಬೇಡ್ಕರ್ ಅವರ ಸಮಕಾಲೀನರಾದ ಡಾ.ಬಾಬು ಜಗಜೀವನರಾಂ ಅವರು, ಕೇಂದ್ರದಲ್ಲಿ ಬಹುತೇಕ ಎಲ್ಲ ಇಲಾಖೆಗಳ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು. ಕಾರ್ಮಿಕರ ಅಭಿವೃದ್ಧಿಗೆ ಅನೇಕ ಸುಧಾರಣೆಗಳನ್ನು ಮಾಡಿದ್ದರು. ಭಾರತದಲ್ಲಿ ಆಹಾರದ ಕೊರತೆ ಉಂಟಾದ ಸಂದರ್ಭದಲ್ಲಿ ಸುಧಾರಿತ ತಳಿಗಳು, ರಸಗೊಬ್ಬರಗಳನ್ನು ಬಳಸಿಕೊಳ್ಳುವುದರ ಮೂಲಕ ಆಹಾರ ಉತ್ಪಾದನೆಯನ್ನು ಹೆಚ್ಚಿಸಿ ಹಸಿರು ಕ್ರಾಂತಿಗೆ ಕೊಡುಗೆ ನೀಡಿದ್ದರು ಎಂದರು.ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಂದಿಗೂ ಮರೆಯಲಾರದ ವ್ಯಕ್ತಿತ್ವ ಬಾಬು ಜಗಜೀವನ ರಾಂ ಅವರದ್ದು. ಸಮ ಸಮಾಜ ನಿರ್ಮಾಣದ ಕನಸು ಕಂಡಿದ್ದ ಇವರು, ಎಲ್ಲಾ ವರ್ಗದ ಜನಾಂಗದ ನಡುವೆ ಸಮಾನತೆ ತರಲು ಶ್ರಮಿಸಿದ್ದರು ಎಂದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ಎಎಸ್ಪಿ ಸಿದ್ಧಲಿಂಗಪ್ಪ ಟಿ., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.