ಆದಿಚುಂಚನಗಿರಿ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಭೈರವೈಕ್ಯ ಡಾ.ಬಾಲಗಂಗಾಧರನಾಥ ಶ್ರೀಗಳ ಶ್ರೀಗುರು ಭೈರವೈಕ್ಯ ಮಂದಿರದ ಲೋಕಾರ್ಪಣೆ ಹಿನ್ನೆಲೆಯಲ್ಲಿ ಭಾನುವಾರ ನಡೆದ ಕುಂಭಾಭಿಷೇಕ ಮಹೋತ್ಸವದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪಾಲ್ಗೊಂಡು ಕ್ಷೇತ್ರಾಧಿದೇವತೆಗಳಿಗೆ ಪೂಜೆ ಸಲ್ಲಿಸಿ ಶ್ರೀಗಳ ಆಶೀರ್ವಾದ ಪಡೆದುಕೊಂಡರು.
ಕನ್ನಡಪ್ರಭ ವಾರ್ತೆ ನಾಗಮಂಗಲ
ತಾಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಭೈರವೈಕ್ಯ ಡಾ.ಬಾಲಗಂಗಾಧರನಾಥ ಶ್ರೀಗಳ ಶ್ರೀಗುರು ಭೈರವೈಕ್ಯ ಮಂದಿರದ ಲೋಕಾರ್ಪಣೆ ಹಿನ್ನೆಲೆಯಲ್ಲಿ ಭಾನುವಾರ ನಡೆದ ಕುಂಭಾಭಿಷೇಕ ಮಹೋತ್ಸವದಲ್ಲಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಪಾಲ್ಗೊಂಡು ಕ್ಷೇತ್ರಾಧಿದೇವತೆಗಳಿಗೆ ಪೂಜೆ ಸಲ್ಲಿಸಿ ಶ್ರೀಗಳ ಆಶೀರ್ವಾದ ಪಡೆದುಕೊಂಡರು.ಭೈರವೈಕ್ಯ ಡಾ.ಬಾಲಗಂಗಾಧರನಾಥ ಶ್ರೀಗಳ ಮೂಲ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಶ್ರೀಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥಶ್ರೀಗಳ ಸಾನಿಧ್ಯದಲ್ಲಿ ಕಳೆದ ಎರಡು ದಿನಗಳಿಂದ ಹೋಮ ಹವನಾದಿ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆದು ಶ್ರೀಗುರು ಭೈರವೈಕ್ಯ ಮಂದಿರಕ್ಕೆ ಕಳಸ ಪ್ರತಿಷ್ಠಾಪನೆ ಮಾಡಲಾಗಿತ್ತು.
ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥಶ್ರೀಗಳ ಸಾನಿಧ್ಯದಲ್ಲಿ ಭಾನುವಾರ ಬೆಳಗ್ಗೆ ಶ್ರೀಕ್ಷೇತ್ರದ ಶ್ರೀಗುರು ಭೈರವೈಕ್ಯ ಮಂದಿರದಲ್ಲಿ ಜರುಗಿದ ಹೋಮ ಹವನಾದಿ ಧಾರ್ಮಿಕ ಪೂಜಾ ಕೈಂಕರ್ಯದಲ್ಲಿ ಪಾಲ್ಗೊಂಡ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಶ್ರೀಗಳ ಜೊತೆಗೂಡಿ ಕುಂಭಾಭಿಷೇಕ ನೆರವೇರಿಸಿದ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಭಕ್ತರನ್ನುದ್ದೇಶಿಸಿ ಮಾತನಾಡಿದರು. ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಶ್ರೀಗಳು ಆಶೀರ್ವಚನ ನೀಡಿದರು.ಕ್ಷೇತ್ರಕ್ಕೆ ಭೇಟಿ ಕೊಟ್ಟ ಸಚಿವರಿಗೆ ಡಾ.ನಿರ್ಮಲಾನಂದನಾಥಶ್ರೀಗಳು ಶಾಲು ಏಲಕ್ಕಿ ಹಾರ ಹಾಕಿ ಭೈರವೈಕ್ಯಶ್ರೀಗಳ ಭಾವಚಿತ್ರ ಹಾಗೂ ನೆನಪಿನ ಕಾಣಿಕೆ ಕೊಟ್ಟು ಆಶೀರ್ವದಿಸಿದರು.
ಮೋದಿ ಭೇಟಿ ಹಿನ್ನೆಲೆ ಸ್ಥಳ ಪರಿಶೀಲಿಸಿದ ಎಚ್ಡಿಕೆ:ಶ್ರೀ ಕ್ಷೇತದಲ್ಲಿ ಶ್ರೀಗುರು ಭೈರವೈಕ್ಯ ಮಂದಿರವನ್ನು ಉದ್ಘಾಟಿಸಲು ಏ.15ರಂದು ಪ್ರಧಾನಿ ನರೇಂದ್ರ ಮೋದಿ ಅವರು ಏ.15ರ ಬುಧವಾರ ಬೆಳಗ್ಗೆ 11 ಗಂಟೆಗೆ ಶ್ರೀಮಠಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಡಾ.ನಿರ್ಮಲಾನಂದನಾಥ ಶ್ರೀಗಳೊಂದಿಗೆ ಕೆಲ ಕಾಲ ಚರ್ಚೆ ನಡೆಸಿದ ಸಚಿವರು ಅಂದು ವೇದಿಕೆ ಸಮಾರಂಭ ನಡೆಯುವ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದುಕೊಂಡರು.
ಈ ವೇಳೆ ಶ್ರೀಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಪಾಂಡವಪುರ ತಾಲೂಕಿನ ಬೇಬಿ ಮಠದ ಶ್ರೀ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ, ಕುಂಬಳಗೂಡು ಶಾಖಾ ಮಠದ ಪ್ರಕಾಶನಾಥ ಸ್ವಾಮೀಜಿ, ಮೈಸೂರು ಹಾಗೂ ಸ್ವರ್ಗಾಶ್ರಮ ಹಾಲ್ತಿ ಶಾಖಾ ಮಠದ ಸೋಮೇಶ್ವರನಾಥ ಸ್ವಾಮೀಜಿ, ಹಾಸನ ಶಾಖಾ ಮಠದ ಶಂಭೂನಾಥ ಸ್ವಾಮೀಜಿ, ಶ್ರೀಮಠದ ಚೈತನ್ಯನಾಥ ಸ್ವಾಮೀಜಿ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಮಾಜಿ ಶಾಸಕ ಸುರೇಶ್‌ಗೌಡ, ಸಮಾಜ ಸೇವಕ ಜವರನಹಳ್ಳಿ ಗೌರೀಶ್, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ನೆಲ್ಲಿಗೆರೆ ಬಾಲು ಸೇರಿದಂತೆ ಹಲವರು ಇದ್ದರು.