ದಶಕಗಳಿಂದ ಸರ್ಕಾರಿ ಬಗರ್‌ಹುಕುಂ ಕೃಷಿ ಭೂಮಿಯಲ್ಲಿ ಸಾಗುವಳಿ ಮಾಡಿಕೊಂಡು ಜೀವನ ನಡೆಸುತ್ತಿರುವ ರೈತರಿಗೆ ಶಾಶ್ವತ ಭದ್ರತೆ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಶೀಘ್ರದಲ್ಲೇ ಕಾಯಂ ಹಕ್ಕುಪತ್ರ ವಿತರಣೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ಶಾಸಕ ಹಾಗೂ ರಾಜ್ಯ ಗೃಹ ನಿರ್ಮಾಣ ಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ ತಿಳಿಸಿದ್ದಾರೆ.

ಕನ್ನಡಪ್ರಭವಾರ್ತೆ ಅರಸೀಕೆರೆ

ದಶಕಗಳಿಂದ ಸರ್ಕಾರಿ ಬಗರ್‌ಹುಕುಂ ಕೃಷಿ ಭೂಮಿಯಲ್ಲಿ ಸಾಗುವಳಿ ಮಾಡಿಕೊಂಡು ಜೀವನ ನಡೆಸುತ್ತಿರುವ ರೈತರಿಗೆ ಶಾಶ್ವತ ಭದ್ರತೆ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಶೀಘ್ರದಲ್ಲೇ ಕಾಯಂ ಹಕ್ಕುಪತ್ರ ವಿತರಣೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ಶಾಸಕ ಹಾಗೂ ರಾಜ್ಯ ಗೃಹ ನಿರ್ಮಾಣ ಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ ತಿಳಿಸಿದ್ದಾರೆ. ಕಾಮಸಮುದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಯೋಜಿಸಿದ್ದ ಜನ ಸಂಪರ್ಕ ಸಭೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೀರ್ಘಕಾಲದಿಂದ ಸರ್ಕಾರದ ಭೂಮಿಯಲ್ಲಿ ಕೃಷಿ ಮಾಡುತ್ತಾ ಬಂದಿರುವ ರೈತರಿಗೆ ನ್ಯಾಯ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದರು. ಈ ಸಂಬಂಧ ಕಂದಾಯ ಸಚಿವ ಕೃಷ್ಣ ಬೈರೇಗೌಡರು ವಿಶೇಷ ಆಸಕ್ತಿ ವಹಿಸಿದ್ದು, ಪ್ರಕ್ರಿಯೆಯನ್ನು ಸುಗಮಗೊಳಿಸಲು ವಿಶೇಷ ಸಾಫ್ಟ್‌ವೇರ್ ಅಭಿವೃದ್ಧಿಪಡಿಸಲಾಗುತ್ತಿದೆ. ಇದರ ಮೂಲಕ ಬಗರ್ ಹುಕುಂ ಸಾಗುವಳಿ ರೈತರಿಗೆ ಶೀಘ್ರದಲ್ಲೇ ಹಕ್ಕುಪತ್ರ ದೊರೆಯಲಿದೆ ಎಂದು ಭರವಸೆ ನೀಡಿದರು.

ಇದಕ್ಕೂ ಮುನ್ನವೇ ತಾಲೂಕಿನ ಫಲಾನುಭವಿಗಳ ಪಟ್ಟಿ ಸಿದ್ಧಗೊಂಡಿದ್ದು, ಪ್ರತಿಯೊಂದು ಗ್ರಾಮಕ್ಕೂ ತಾವು ಸ್ವತಃ ಭೇಟಿ ನೀಡಿ ರೈತರಿಗೆ ಹಕ್ಕುಪತ್ರ ವಿತರಿಸುವುದಾಗಿ ಘೋಷಿಸಿದರು.ತಾಲೂಕು ದಂಡಾಧಿಕಾರಿ ಸಂತೋಷ್ ಕುಮಾರ್ ಮಾತನಾಡಿ, ಕಳೆದ 15 ದಿನಗಳಿಂದ ನಡೆಯುತ್ತಿರುವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನ ಸಂಪರ್ಕ ಸಭೆಗಳು ಗ್ರಾಮೀಣ ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸಿ ಪರಿಹಾರ ನೀಡುವಲ್ಲಿ ಪರಿಣಾಮಕಾರಿಯಾಗಿವೆ ಎಂದರು. ಕುಡಿಯುವ ನೀರಿನ ಸಮಸ್ಯೆ, ಪಿಂಚಣಿ ಹಾಗೂ ಸಾಮಾಜಿಕ ಭದ್ರತಾ ಯೋಜನೆಗಳ ಅನುದಾನ ವಿಳಂಬ ಸೇರಿದಂತೆ ಹಲವು ಸಮಸ್ಯೆಗಳು ಈ ಸಭೆಗಳ ಮೂಲಕ ಬಗೆಹರಿಯುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷೆ ರೇಖಾ ಆರಾಧ್ಯ, ಗ್ರಾಮೀಣ ಕುಡಿಯುವ ನೀರು ಸರಬರಾಜು ಅಧೀಕ್ಷಕ ಇಂಜಿನಿಯರ್ ಎ.ವೀರಪ್ಪ, ಕಾರ್ಯಪಾಲಕ ಇಂಜಿನಿಯರ್ ನವ್ಯಶ್ರೀ, ಗ್ರಾಮೀಣ ವೃತ್ತ ಪೊಲೀಸ್ ನಿರೀಕ್ಷಕ ಅರುಣ್ ಕುಮಾರ್, ಮುಖಂಡರಾದ ಪಡುವನಹಳ್ಳಿ ಶಿವಣ್ಣ, ರಾಜಶೇಖರ, ತುಂಬಾಪುರ ನವೀನ್, ಕಾಮಸಮುದ್ರ ರವಿ, ರೇಣುಕಪ್ಪ, ಮಹಲಿಂಗಪ್ಪ, ಯರಿಗೇನಹಳ್ಳಿ ಸಿದ್ದಪ್ಪ, ನಾನಾನಾಯ್ಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.