ಸಾರಾಂಶ
ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ವೈ.ಎಂ.ಕರುಬಯ್ಯ ಕಾರ್ಯಕ್ರಮ ಉದ್ಘಾಟಿಸಿದರು.
ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮಕ್ಕಳು ಹೆಚ್ಚಾಗಿ ತೊಡಗಿಸಿಕೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯದ ಸಮತೋಲನತೆಯನ್ನು ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ವೈ.ಎಂ.ಕರುಬಯ್ಯ ಹೇಳಿದರು.ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಆಯೋಜಿಸಲಾದ 2023-24ನೇ ಸಾಲಿನ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ವಿದ್ಯಾರ್ಥಿಗಳು ಸೋಲು ಗೆಲುವುಗಳನ್ನು ಸಮಚಿತ್ತದಿಂದ ಸ್ವೀಕರಿಸಿ ಪರಸ್ಪರ ಸಹಕಾರ ಮನೋಭಾವದಿಂದ ಕ್ರೀಡೆ ಸೇರಿಂದಂತೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕೆಂದರು.
ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಲತಾ ವಹಿಸಿ, ವಿದ್ಯಾರ್ಥಿಗಳು ತರಗತಿಯಲ್ಲಿ ಪಠ್ಯವಿಷಯಕ್ಕೆ ಕೊಡುವಷ್ಟು ಪ್ರಾಮ್ಯುತೆಯನ್ನು ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ನೀಡಬೇಕು. ವಿದ್ಯಾರ್ಥಿಗಳು ತಮ್ಮಲ್ಲಿರುವ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸಲು ಇಂತಹ ಕಾರ್ಯಕ್ರಮಗಳು ವೇದಿಕೆ ಒದಗಿಸುತ್ತವೆ ಎಂದರು.ಕಾಲೇಜು ಅಭಿವೃದ್ಧಿ ಸಮಿತಿಯ ಖಜಾಂಜಿ ಆರ್.ರಮೇಶ್ ಪಿಳ್ಳೈ ಕ್ರೀಡಾಕೂಟ ಉದ್ಘಾಟಿಸಿ, ಶುಭಕೋರಿದರು.ನಂತರ ವಿದ್ಯಾರ್ಥಿಗಳಿಗೆ ಕ್ರೀಡಾ ಸ್ಪರ್ಧೆ ನಡೆಯಿತು. ಕಾಲೇಜು ಉಪನ್ಯಾಸಕ ಅಭಿಷೇಕ್, ಕ್ರೀಡೆಗೆ ಸಂಬಂಧಿಸಿದ ನೀತಿ ನಿಯಮಗಳನ್ನು ಸೂಚಿಸಿದರಲ್ಲದೆ, ಕ್ರೀಡಾ ಸ್ಪರ್ಧೆಗಳ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು.