ಸಾರಾಂಶ
ಚಿಕ್ಕಮಗಳೂರು, ಅಕ್ಷಯ ತೃತೀಯ ದಿನವಾದ ಏ.30 ರಂದು ಬಾಲ್ಯ ವಿವಾಹಗಳು ನಡೆಯುವ ಸಾಧ್ಯತೆ ಇರುವುದರಿಂದ ಬಾಲ್ಯ ವಿವಾಹ ನಿಷೇಧಕ್ಕೆ ಸಂಬಂಧಿಸಿದಂತೆ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಏ.26 ರೊಳಗೆ ಸಭೆ ಆಯೋಜಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಸೂಚಿಸಿದರು.
ಜಿಲ್ಲಾ-ತಾಲೂಕುಮಟ್ಟದ ಅಧಿಕಾರಿಗಳ ಜೊತೆ ನಡೆದ ವೀಡಿಯೋ ಸಂವಾದದಲ್ಲಿ ಜಿಲ್ಲಾಧಿಕಾರಿ ಮೀನಾ
ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರುಅಕ್ಷಯ ತೃತೀಯ ದಿನವಾದ ಏ.30 ರಂದು ಬಾಲ್ಯ ವಿವಾಹಗಳು ನಡೆಯುವ ಸಾಧ್ಯತೆ ಇರುವುದರಿಂದ ಬಾಲ್ಯ ವಿವಾಹ ನಿಷೇಧಕ್ಕೆ ಸಂಬಂಧಿಸಿದಂತೆ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಏ.26 ರೊಳಗೆ ಸಭೆ ಆಯೋಜಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದ ಕೆಸ್ವಾನ್‌ನಲ್ಲಿ ಶನಿವಾರ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಜೊತೆ ನಡೆಸಿದ ವೀಡಿಯೋ ಸಂವಾದದಲ್ಲಿ ಅವರು ಮಾತನಾಡಿದರು. ಜಿಲ್ಲೆಯ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಮಕ್ಕಳ ರಕ್ಷಣಾ ಸಮಿತಿ ಬಗ್ಗೆ ಪರಿಶೀಲನೆ ಮಾಡುವುದು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಬಾಲ್ಯ ವಿವಾಹ ನಿಷೇಧದ ಬಗ್ಗೆ ಅರಿವು ಕಾರ್ಯಕ್ರಮ ಹಾಗೂ ಐಇಸಿ ಚಟುವಟಿಕೆಗಳನ್ನು ಕಡ್ಡಾಯವಾಗಿ ಮಾಡಿಸುವುದು, ಪೊಲೀಸ್ ಠಾಣೆಗಳಲ್ಲಿ ತೆರೆದ ಮನೆ ಕಾರ್ಯ ಕ್ರಮಗಳನ್ನು ಹೆಚ್ಚಿಸುವಂತೆ ಸೂಚನೆ ನೀಡಿದರು.
ಎಲ್ಲಾ ಪ್ರಾಥಮಿಕ, ಪ್ರೌಢ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ವಾರ್ಷಿಕವಾಗಿ 2 ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವುದು ಕಡ್ಡಾಯ. ಗ್ರಾಮ ಪಂಚಾಯಿತಿಯಲ್ಲಿ ಮಕ್ಕಳ ಕಾವಲು ಸಮಿತಿಯನ್ನು ಮಾಸಿಕವಾಗಿ ಆಯೋಜಿಸಿ ತಾಲೂಕು ಕಾರ್ಯ ನಿರ್ವಹಣಾಧಿಕಾರಿಗಳ ಮುಖೇನ ಹಾಗೂ ತಾಲೂಕು ಮಟ್ಟದ ಮಹಿಳೆಯರು ಮತ್ತು ಮಕ್ಕಳ ಕಾವಲು ಸಮಿತಿಗಳನ್ನು ಆಯೋಜಿಸಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಮುಖಾಂತರ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ಕಡ್ಡಾಯವಾಗಿ ವರದಿ ಸಲ್ಲಿಸಬೇಕು ಎಂದು ಹೇಳಿದರು. ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ಸಮುದಾಯಗಳಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿ ಜಾಗೃತಿ ಮೂಡಿಸಲು ತಿಳಿಸಿದ ಅವರು, ಎಸ್.ಎಚ್.ಜಿ. (ಮಹಿಳಾ ಸ್ವಸಹಾಯ ಗುಂಪುಗಳು) ಮುಖಾಂತರ ಹೆಚ್ಚು ಅರಿವು ಕಾರ್ಯಕ್ರಮ ಏರ್ಪಡಿಸಬೇಕು ಎಂದು ಸೂಚಿಸಿದರು. ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಹಾಂತೇಶ್ ಭಜಂತ್ರಿ, ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು ಹಾಗೂ ಜಿಲ್ಲೆ, ತಾಲೂಕಿನ ತಹಸೀಲ್ದಾರರು, ತಾಪಂ ಕಾರ್ಯ ನಿರ್ವಹಣಾಧಿಕಾರಿಗಳು, ಪೊಲೀಸ್ ವೃತ್ತ ನಿರೀಕ್ಷಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಜರಿದ್ದರು. 19 ಕೆಸಿಕೆಎಂ 4ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಕಚೇರಿ ಆವರಣದ ಕೆಸ್ವಾನ್‌ನಲ್ಲಿ ಶನಿವಾರ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಜೊತೆ ಡಿಸಿ ಮೀನಾ ನಾಗರಾಜ್ ವೀಡಿಯೋ ಸಂವಾದ ನಡೆಸಿದರು.