ಶಾಲಾ ಕಾಲೇಜು ಆವರಣದಲ್ಲಿ ತಂಬಾಕು ಮಾರಾಟ ನಿಷೇಧ

| Published : Dec 13 2024, 12:47 AM IST

ಸಾರಾಂಶ

ಮಂಡ್ಯ ಜಿಲ್ಲೆಯ ಅಂಗನವಾಡಿ, ಶಾಲಾ, ಕಾಲೇಜು, ಸಾರ್ವಜನಿಕ ಆವರಣದ ಬಳಿ 100 ಮೀಟರ್ ಅಂತರದ ಒಳಗೆ ತಂಬಾಕು ಮಾರಾಟ ಮಾಡುವ ಅಂಗಡಿಗಳು ಇದ್ದರೆ ಅವರ ವಿರುದ್ಧ ಸೂಕ್ತ ಕ್ರಮ ವಹಿಸಬೇಕು. ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮ ಗಳ ಬಗ್ಗೆ ಅರಿವು ಮೂಡಿಸಿ ಇದರ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಮಾಡಿ ಜಿಲ್ಲೆಯನ್ನು ತಂಬಾಕು ಮುಕ್ತ ವಲಯವನ್ನಾಗಿ ಮಾಡಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯ

ಜಿಲ್ಲೆಯ ಶಾಲಾ ಕಾಲೇಜುಗಳ ಆವರಣದಿಂದ 100 ಮೀಟರ್ ವ್ಯಾಪ್ತಿಯ ಅಂಗಡಿಗಳಲ್ಲಿ ತಂಬಾಕು ಮಾರಾಟ ಮಾಡಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ.ಬಿ.ಸಿ ಶಿವಾನಂದಮೂರ್ತಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿ, ಜಿಲ್ಲೆಯ ಅಂಗನವಾಡಿ, ಶಾಲಾ, ಕಾಲೇಜು, ಸಾರ್ವಜನಿಕ ಆವರಣದ ಬಳಿ 100 ಮೀಟರ್ ಅಂತರದ ಒಳಗೆ ತಂಬಾಕು ಮಾರಾಟ ಮಾಡುವ ಅಂಗಡಿಗಳು ಇದ್ದರೆ ಅವರ ವಿರುದ್ಧ ಸೂಕ್ತ ಕ್ರಮ ವಹಿಸಬೇಕು ಎಂದು ಪೋಲಿಸ್ ಇಲಾಖೆ ಹಾಗೂ ನಗರಸಭೆಗೆ ಇಲಾಖೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೆಲವು ಶಾಲಾ ಕಾಲೇಜು ಆವರಣದ ಸುತ್ತಮುತ್ತ ತಂಬಾಕು ಮಾರಾಟ ಮಾಡುತ್ತಿದ್ದಾರೆ ಎಂಬ ದೂರುಗಳು ಕೇಳಿಬರುತ್ತಿದೆ. ಶಾಲೆ ಪ್ರಾಂಶುಪಾಲರು ಹಾಗೂ ಶಿಕ್ಷಕರು ತಮ್ಮ ಶಾಲೆ ಸುತ್ತಮುತ್ತಲು 100 ಮೀಟರ್ ವ್ಯಾಪ್ತಿ ತಂಬಾಕು ಮಾರಾಟವಾಗುತ್ತಿಲ್ಲ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎಂದರು.

ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮ ಗಳ ಬಗ್ಗೆ ಅರಿವು ಮೂಡಿಸಿ ಇದರ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಮಾಡಿ ಜಿಲ್ಲೆಯನ್ನು ತಂಬಾಕು ಮುಕ್ತ ವಲಯವನ್ನಾಗಿ ಮಾಡಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಂಬಾಕು ಮುಕ್ತ ಯುವ ಅಭಿಯಾನ 2.0 ನಡೆಸಿದ ಸಾಧನೆಯ ಕುರಿತು ವಿವರಿಸಲಾಯಿತು. ತಂಬಾಕು ಮುಕ್ತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವಂತೆ ಅಪರ ಜಿಲ್ಲಾಧಿಕಾರಿಗಳಿಗೆ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದರು.

ಡಿ.16ರಂದು ಮಾಪ್ ಅಪ್ ದಿನದಂದು ಎಲ್ಲಾ ಮಕ್ಕಳಿಗೆ ಉಚಿತವಾಗಿ ಆಲ್‌ಬೆಂಡಾಜೋಲ್ ಮಾತ್ರೆಯನ್ನು ವಿತರಿಸಲಾಗುವುದು. ಜಿಲ್ಲೆಯ ಎಲ್ಲಾ ಮಕ್ಕಳು ಮತ್ತು ಪೋಷಕರು ಕಾರ್ಯಕ್ರಮದ ಸದುಪಯೋಗ ಪಡೆದು ಯಶಸ್ವಿಗೊಳಿಸಬೇಕು ಎಂದರು.

ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ/ಸರ್ಕಾರಿ ಅನುದಾನಿತ, ಖಾಸಗಿ ಶಾಲೆ-ಕಾಲೇಜು ಹಾಗೂ ಪದವಿ- ತಾಂತ್ರಿಕ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ/ಶಾಲೆಯಿಂದ ಹೊರಗುಳಿದಿರುವ ಮಕ್ಕಳಿಗೆ (1-19 ವರ್ಷದ ಮಕ್ಕಳಿಗೆ) ಉಚಿತವಾಗಿ ಆಲ್‌ಬೆಂಡಾಜೋಲ್ ಮಾತ್ರೆಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ನೀಡಲಾಗುವುದು ಎಂದರು.

ರಾಷ್ಟ್ರೀಯ ಜಂತುಹುಳು ನಿವಾರಣೆ ದಿನದಂದು ಜಿಲ್ಲೆಯಲ್ಲಿ 1 ರಿಂದ 5 ವರ್ಷದ 108747, 6 ರಿಂದ 19 ವರ್ಷದ 317656 ಒಟ್ಟು ಜಿಲ್ಲೆಯಲ್ಲಿ 1 ರಿಂದ 19 ವರ್ಷದ 426404 ಮಕ್ಕಳು ಜಿಲ್ಲಾ ಮಟ್ಟದಲ್ಲಿ ಗುರಿ ಸಾಧಿಸಲಾಗಿದೆ ಎಂದರು.

ಸಭೆಯಲ್ಲಿ ಡಿಎಚ್‌ಒ ಡಾ.ಮೋಹನ್, ಎಎಸ್ಪಿ ಗಂಗಾಧರಸ್ವಾಮಿ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಕೆ.ಪಿ.ಅಶ್ವಥ್, ಕುಟುಂಬ ಕಲ್ಯಾಣಾಧಿಕಾರಿ ಡಾ.ಬೆಟ್ಟಸ್ವಾಮಿ, ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಸೋಮಶೇಖರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕುಮಾರ, ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಕಾಂತರಾಜ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.