ಸಾರಾಂಶ
ಬೆಳಗಾವಿ : ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿ ಅನುಮಾನಾಸ್ಪದ ಸಾವು ಪ್ರಕರಣ ಸಂಬಂಧ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ವರದಿ ಕೇಳಿದ್ದಾರೆ.
ಹುಕ್ಕೇರಿ ತಾಲೂಕಿನ ಗೌಡವಾಡ ಗ್ರಾಮದ ವೈಶಾಲಿ ಕೊಟಬಾಗಿ (20) ಬಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಎದೆ ನೋವಿನಿಂದ ಬಳಲುತ್ತಿದ್ದರೂ ವೈದ್ಯರು ಸಮರ್ಪಕವಾಗಿ ಚಿಕಿತ್ಸೆ ನೀಡಲಿಲ್ಲ. ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ವೈಶಾಲಿ ಕುಟುಂಬಸ್ಥರು ಆರೋಪಿಸಿ, ಬಿಮ್ಸ್ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿ ತಪ್ಪಿತಸ್ಥ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಪ್ರಕರಣದ ಬಗ್ಗೆ ಆರೋಗ್ಯ ಸಚಿವರು ವರದಿ ಕೇಳಿದ್ದು, ಬಿಮ್ಸ್ ನಿರ್ದೇಶಕರು ಆರೋಗ್ಯ ಇಲಾಖೆ ಕಾರ್ಯದರ್ಶಿಗೆ ಪ್ರಾಥಮಿಕ ವರದಿ ಸಲ್ಲಿಸಿದ್ದಾರೆ. ಧಮನಿ ಬ್ಲಾಕ್ ಆಗಿ ಬಾಣಂತಿ ಸಾವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಲಾಗಿದೆ.
ಹುಕ್ಕೇರಿ ತಾಲೂಕು ಆಸ್ಪತ್ರೆಯಿಂದ ಶಿಫಾರಸು ಆಗಿದ್ದ ಹೈರಿಸ್ಕ್ ಕೇಸ್ ಇದಾಗಿತ್ತು. ಸಿಜೇರಿಯನ್ ಮೂಲಕ ಹೆರಿಗೆ ಮಾಡಲಾಗಿತ್ತು. ಹೇರಿಗೆ ಬಳಿಕ ಆರೋಗ್ಯ ಸಹಜವಾಗಿಯೇ ಇತ್ತು. ಮರುದಿನ ಬೆಳಗ್ಗೆ 10 ಗಂಟೆಗೆ ಎದೆನೋವು ಕಾಣಿಸಿಕೊಂಡಿತ್ತು. ಮಧ್ಯಾಹ್ನ 12.30 ಗಂಟೆಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬಾಣಂತಿ ಶವದ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ವರದಿ ಬರಬೇಕಿದೆ. ಪ್ರಕರಣದ ಬಗ್ಗೆ ಇಲಾಖೆ ಕಾರ್ಯದರ್ಶಿಗೆ ವರದಿ ಸಲ್ಲಿಸಲಾಗಿದೆ ಎಂದು ಬಿಮ್ಸ್ ನಿರ್ದೇಶಕ ಡಾ.ಅಶೋಕ ಶೆಟ್ಟಿ ಕನ್ನಡಪ್ರಭಕ್ಕೆ ತಿಳಿಸಿದ್ದಾರೆ.