ಪ್ರವಾಸಿಗರ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನಗಳಲ್ಲಿನ ಸಫಾರಿ ಮತ್ತು ಪರಿಸರ ಪ್ರವಾಸೋದ್ಯಮ ಚಟುವಟಿಕೆಗಳನ್ನು ಪುನರಾರಂಭಿಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು:
ಪ್ರವಾಸಿಗರ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನಗಳಲ್ಲಿನ ಸಫಾರಿ ಮತ್ತು ಪರಿಸರ ಪ್ರವಾಸೋದ್ಯಮ ಚಟುವಟಿಕೆಗಳನ್ನು ಪುನರಾರಂಭಿಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಹಾಗೆಯೇ ಮೇಕೆದಾಟು ಯೋಜನೆಗೆ ಸಣ್ಣಪುಟ್ಟ ನೆಪಗಳನ್ನು ಮುಂದಿಟ್ಟು ಸುಪ್ರೀಂಕೋರ್ಟ್‌ನಲ್ಲಿ ತಕರಾರು ಮಾಡಲು ತಮಿಳುನಾಡು ಪ್ರಯತ್ನಿಸುತ್ತಿದೆ. ಈ ತಾಂತ್ರಿಕ ಸಮಸ್ಯೆಗಳು ಇವೆಯಾ ಎಂದು ಪರಿಶೀಲಿಸಿ ಪರಿಣಾಮಕಾರಿಯಾಗಿ ಬಗೆಹರಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ವಿಧಾನಸೌಧದಲ್ಲಿ ಮಂಗಳವಾರ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ ಸಭೆಯಲ್ಲಿ ಅವರು ಈ ನಿರ್ದೇಶನ ನೀಡಲಾಗಿದೆ.ಬಿಎಂಐಸಿ ಕಾರಿಡಾರ್‌ನಿಂದ ಸಮಸ್ಯೆ:
ಬಂಡೀಪುರ ಮತ್ತು ನಾಗರಹೊಳೆ ಪರಿಸರ ಪ್ರವಾಸೋದ್ಯಮ ಹಾಗೂ ಸಫಾರಿ ಪ್ರದೇಶಗಳಲ್ಲಿ ಹುಲಿಗಳು ಮತ್ತು ಚಿರತೆಗಳ ಸಾಂದ್ರತೆಯು ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಿರುವ ಪ್ರದೇಶಗಳಿಗಿಂತ ಅಧಿಕವಾಗಿದೆ. ಬಿಎಂಐಸಿ ಕಾರಿಡಾರ್ ನಿರ್ಮಾಣದಿಂದ ಆನೆ, ಹುಲಿ ಹಾಗೂ ಚಿರತೆಗಳ ಸಾಂಪ್ರದಾಯಿಕ ಸಂಚಾರ ಮಾರ್ಗಗಳಿಗೆ ಅಡ್ಡಿಯಾಗಿದೆ. ಇದರ ಪರಿಣಾಮ ವನ್ಯಜೀವಿಗಳು ಅರಣ್ಯ ಪ್ರದೇಶಗಳಿಂದ ಹೊರಬಂದು ಚನ್ನಪಟ್ಟಣ ಹಾಗೂ ರಾಮನಗರ ಭಾಗಗಳತ್ತ ಚಲಿಸುತ್ತಿದ್ದು, ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಾಗಲು ಇದೂ ಪ್ರಮುಖ ಕಾರಣ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.ಅಲ್ಲದೆ, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ನಿರ್ಮಾಣಕ್ಕೆ ಅನುಮತಿ ನೀಡುವ ಸಂದರ್ಭದಲ್ಲಿ ವನ್ಯಜೀವಿಗಳ ಸುರಕ್ಷಿತ ಸಂಚಾರಕ್ಕಾಗಿ ಅಗತ್ಯ ಅಂಡರ್‌ಪಾಸ್, ಓವರ್‌ಪಾಸ್ ಹಾಗೂ ವನ್ಯಜೀವಿ ಕಾರಿಡಾರ್‌ಗಳನ್ನು ನಿರ್ಮಿಸುವ ಷರತ್ತು ವಿಧಿಸಲಾಗಿತ್ತು. ಆದರೆ ರಸ್ತೆ ನಿರ್ಮಾಣದ ವೇಳೆ ಈ ಷರತ್ತುಗಳನ್ನು ಸಮರ್ಪಕವಾಗಿ ಪಾಲಿಸಿಲ್ಲ ಎಂಬುದನ್ನು ಅಧಿಕಾರಿಗಳು ಮಾಹಿತಿ ನೀಡಿದರು. ಮಾಹಿತಿ ಪಡೆದ ಮುಖ್ಯಮಂತ್ರಿ ಅವರು, ಪ್ರವಾಸಿಗರ ಸುರಕ್ಷತೆಗೆ ಯಾವುದೇ ಧಕ್ಕೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಹಾಗೂ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಸಫಾರಿ ಚಟುವಟಿಕೆಗಳನ್ನು ಆರಂಭಿಸಲು ಸೂಚಿಸಿದರು.