ಸಾರಾಂಶ
ಸಂಡೂರು: ಸೂರ್ಯ ಚಂದ್ರರಿರುವುದು ಎಷ್ಟು ಸತ್ಯವೋ ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಗೆಲುವು ಅಷ್ಟೇ ಖಚಿತ. ಈ ಗೆಲುವು ಐತಿಹಾಸಿಕ ಗೆಲುವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅಭಿಪ್ರಾಯಪಟ್ಟರು. ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಶುಕ್ರವಾರ ನಾಮಪತ್ರ ಸಲ್ಲಿಸುವ ಮುಂಚೆ ಹಮ್ಮಿಕೊಂಡಿದ್ದ ಬೃಹತ್ ಮೆರವಣಿಗೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷವಾಗುತ್ತಾ ಬರುತ್ತಿದೆ. ಯಾವುದೇ ಅಭಿವೃದ್ಧಿಯಾಗಿಲ್ಲ. ಅಭಿವೃದ್ಧಿ ಶೂನ್ಯವಾಗಿದೆ. ಸಂಡೂರಿನ ಬಸ್ ನಿಲ್ದಾಣದ ಸ್ಥಿತಿ ನೋಡಿದರೆ ಅಭಿವೃದ್ಧಿ ಎಷ್ಟಾಗಿದೆ ಎಂಬುವುದು ತಿಳಿಯುತ್ತದೆ. ಅವರ ಪಾಪದ ಕೊಡ ತುಂಬಿದೆ ಎಂದು ಟೀಕಿಸಿದರು.ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಲೂಟಿ ಮಾಡಿ, ಆ ಹಣವನ್ನು ಲೋಕಸಭಾ ಚುನಾವಣೆಗೆ ಬಳಸಿ, ಶ್ರೀರಾಮುಲು ಅವರನ್ನು ಸೋಲಿಸಿದರು. ಈಗಾಗಲೇ ನಾವು ಸಂಸದ ಈ.ತುಕಾರಾಂ ಸದಸ್ಯತ್ವ ರದ್ದುಗೊಳಿಸಲು ಕೋರಿ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ್ದೇವೆ. ಸದಸ್ಯತ್ವ ರದ್ದತಿಯ ನಂತರ ಶ್ರೀರಾಮುಲು ಸದಸ್ಯರಾಗಲಿದ್ದಾರೆ ಎಂದರು.
ಬಿಜೆಪಿ, ಜೆಡಿಎಸ್ ಮುಖಂಡರು, ಕಾರ್ಯಕರ್ತರು ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುವೆವು. ಕೆ.ಎಸ್. ದಿವಾಕರ್ ಅವರನ್ನು ಅಭಿನಂದಿಸುವೆ. ಅವರು ತ್ಯಾಗ ಮಾಡಿದ್ದಾರೆ. ಅವರಿಗೆ ಮುಂದಿನ ದಿನಗಳಲ್ಲಿ ಶಕ್ತಿ ತುಂಬುವ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು.ಶಾಸಕ ಗಾಲಿ ಜನಾರ್ದನ ರೆಡ್ಡಿ ಮಾತನಾಡಿ, ಕ್ಷೇತ್ರದಲ್ಲಿ ಜನತೆ ಬದಲಾವಣೆ ಬಯಸಿದ್ದಾರೆ. ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿ ಆಗಿದ್ದಾಗ ಸುಮಾರು ₹೨೫೦ ಕೋಟಿ ಅನುದಾನದಲ್ಲಿ ಸಂಡೂರು-ಕೂಡ್ಲಿಗಿ-ಹೊಸಪೇಟೆ, ತೋರಣಗಲ್ಲು ಹಾಗೂ ಶ್ರೀಕುಮಾರಸ್ವಾಮಿ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಯಿತು. ಕ್ಷೇತ್ರ ಹಿಂದೆ ಹೇಗಿತ್ತೋ ಈಗಲೂ ಹಾಗೆಯೇ ಇದೆ. ಹತ್ತಿರದಲ್ಲಿಯೇ ತುಂಗಭದ್ರಾ ನದಿ ಹಾಗೂ ನಾರಿಹಳ್ಳ ಜಲಾಶಯವಿದ್ದರೂ, ಜನತೆಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲಾಗುತ್ತಿಲ್ಲ. ಹಲವು ದಶಕಗಳಿಂದ ರೈತರು ಉಳುಮೆ ಮಾಡುತ್ತಿರುವ ಜಮೀನುಗಳನ್ನು ಖರಾಬು ಎಂದು ಗುರುತಿಸಿ, ಅವುಗಳನ್ನು ವಶಕ್ಕೆ ಪಡೆಯುವ ಕಾರ್ಯ ನಡೆದಿದೆ. ಇದಕ್ಕೆ ಅವಕಾಶ ನೀಡುವುದಿಲ್ಲ ಎಂದರು.
ಬಿಜೆಪಿ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದೆ. ನಂತರದಲ್ಲಿ ಕ್ಷೇತ್ರದಲ್ಲಿ ಪ್ರತಿ ಜಿಪಂ ಕ್ಷೇತ್ರದಲ್ಲಿ ೩೦ ಬೆಡ್ ಆಸ್ಪತ್ರೆ, ಮನೆಮನೆಗೆ ಶುದ್ಧ ಕುಡಿಯುವ ನೀರು ಪೂರೈಸಲಾಗುವುದು. ಜನತೆಗೆ ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದರು.ಮಾಜಿ ಸಚಿವ ಶ್ರೀರಾಮುಲು ಮಾತನಾಡಿದರು.
ಶಾಸಕ ಸುನಿಲ್‌ಕುಮಾರ್, ಮಾಜಿ ಸಂಸದರಾದ ಭಗವಂತ ಖೂಬ, ಅನಿಲ್ ಲಾಡ್, ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ, ಮಾಜಿ ಶಾಸಕ ಚಂದ್ರಾನಾಯ್ಕ್, ಜಿ. ಸೋಮಶೇಖರರೆಡ್ಡಿ, ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೋಕ, ಉಪಾಧ್ಯಕ್ಷ ಜಿ.ಟಿ. ಪಂಪಾಪತಿ, ಸಂಡೂರು ಮಂಡಲ ಅಧ್ಯಕ್ಷ ನಾನಾ ಸಾಹೇಬ್ ನಿಕ್ಕಂ, ಮುಖಂಡರಾದ ಕೆ.ಎಸ್. ದಿವಾಕರ್ ಸೇರಿದಂತೆ ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.