ಬ್ಯಾಂಕುಗಳು ಮಾನವೀಯತೆ, ಸಾಮಾಜಿಕ ಹೊಣೆಗಾರಿಕೆ ಹಾಗೂ ಜನಪರ ಚಿಂತನೆಯೊಂದಿಗೆ ಕಾರ್ಯನಿರ್ವಹಿಸಬೇಕು. ಲಾಭವೇ ಮುಖ್ಯ ಎಂಬ ಮನೋಭಾವವನ್ನು ಬಿಟ್ಟು, ಬ್ಯಾಂಕುಗಳು ಸ್ಥಾಪನೆಯಾದ ಮೂಲ ಉದ್ದೇಶವನ್ನು ಮೊದಲು ಈಡೇರಿಸಬೇಕು.

ಗದಗ: ಬ್ಯಾಂಕುಗಳು ಕೇವಲ ಹಣಕಾಸು ಸಂಸ್ಥೆಗಳಲ್ಲ, ಸಮಾಜದ ಆರ್ಥಿಕ ಚಲನೆಗೆ ದಿಕ್ಕು ತೋರಿಸುವ ಪ್ರಮುಖ ಸಂಸ್ಥೆಗಳಾಗಿವೆ. ಬ್ಯಾಂಕುಗಳಲ್ಲಿ ಇರುವ ಹಣ ಸಂಪೂರ್ಣವಾಗಿ ಸಾರ್ವಜನಿಕರದ್ದೇ ಆಗಿದ್ದು, ಆ ಹಣವನ್ನು ಸ್ಥಳೀಯವಾಗಿ ಸದ್ಬಳಕೆ ಮಾಡುವ ಮೂಲಕ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಸಹಕಾರ ನೀಡಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಬ್ಯಾಂಕುಗಳ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯ ಆರ್ಥಿಕ ಅಭಿವೃದ್ಧಿಗೆ ಬ್ಯಾಂಕುಗಳು ಪ್ರಮುಖ ಪಾತ್ರ ವಹಿಸಬೇಕು. ಸರ್ಕಾರದ ಜನಪರ ಯೋಜನೆಗಳ ಲಾಭ ಪ್ರತಿಯೊಬ್ಬ ಅರ್ಹ ವ್ಯಕ್ತಿಗೂ ತಲುಪುವಂತೆ ಬ್ಯಾಂಕುಗಳು ಕಾರ್ಯನಿರ್ವಹಿಸಬೇಕು ಎಂದರು.ಬ್ಯಾಂಕುಗಳು ಮಾನವೀಯತೆ, ಸಾಮಾಜಿಕ ಹೊಣೆಗಾರಿಕೆ ಹಾಗೂ ಜನಪರ ಚಿಂತನೆಯೊಂದಿಗೆ ಕಾರ್ಯನಿರ್ವಹಿಸಬೇಕು. ಲಾಭವೇ ಮುಖ್ಯ ಎಂಬ ಮನೋಭಾವವನ್ನು ಬಿಟ್ಟು, ಬ್ಯಾಂಕುಗಳು ಸ್ಥಾಪನೆಯಾದ ಮೂಲ ಉದ್ದೇಶವನ್ನು ಮೊದಲು ಈಡೇರಿಸಬೇಕು. ಜಿಲ್ಲೆಯಲ್ಲಿ ಸಂಗ್ರಹವಾಗುವ ಬ್ಯಾಂಕ್ ಹಣವನ್ನು ಅದೇ ಪ್ರದೇಶದ ಅಭಿವೃದ್ಧಿಗೆ ಬಳಸಬೇಕು. ಇದರಿಂದ ಉದ್ಯೋಗ ಸೃಷ್ಟಿ, ವ್ಯಾಪಾರ ವೃದ್ಧಿ ಹಾಗೂ ಗ್ರಾಮೀಣ ಆರ್ಥಿಕ ಬಲವರ್ಧನೆ ಸಾಧ್ಯವಾಗುತ್ತದೆ. ಈ ಮೂಲಕ ಪ್ರಾದೇಶಿಕ ಅಸಮತೋಲನವನ್ನು ನಿವಾರಿಸಬಹುದು ಎಂದರು.ರೈತರು, ಮಹಿಳೆಯರು, ಯುವ ಉದ್ಯಮಿಗಳು ಹಾಗೂ ಸಣ್ಣ ವ್ಯಾಪಾರಿಗಳಿಗೆ ಬ್ಯಾಂಕ್ ಸಾಲ ಸುಲಭವಾಗಿ ದೊರಕುವಂತೆ ಬೃಹತ್ ಮಟ್ಟದಲ್ಲಿ ಸಾಲ ಮೇಳಗಳನ್ನು ಆಯೋಜಿಸಬೇಕು. ಸಾಲ ಅರ್ಜಿಗಳ ಪ್ರಕ್ರಿಯೆ ಸರಳವಾಗಿರಬೇಕು. ಅರ್ಹ ಫಲಾನುಭವಿಗಳಿಗೆ ಯಾವುದೇ ಅನಗತ್ಯ ಅಡೆತಡೆ ಆಗಬಾರದು ಎಂದು ಸೂಚಿಸಿದರು.ಲೀಡ್ ಬ್ಯಾಂಕ್ ಮ್ಯಾನೇಜರ್ ಸಂತೋಷ ಎಂ.ವಿ. ಮಾತನಾಡಿ, ಜಿಲ್ಲೆಯಲ್ಲಿ 2025ರ ಡಿ. 31ರ ವರೆಗೆ ಲೀಡ್ ಬ್ಯಾಂಕ್ ನ 183 ಶಾಖೆಗಳು ಕಾರ್ಯನಿರ್ವಹಿಸುತ್ತಿವೆ. 2025ರ ಸೆಪ್ಟೆಂಬರವರೆಗೆ ಜಿಲ್ಲೆಯ ಸಾಲ ಠೇವಿ ಅನುಪಾತ 102.18% ರಷ್ಟಾಗಿದೆ. ಎಲ್ಲ ಬ್ಯಾಂಕಿನ ನಿಯಂತ್ರಣಾಧಿಕಾರಿಗಳು ಸಾಲ ಠೇವಣಿ ಅನುಪಾತವನ್ನು ಸುಧಾರಿಸಲು ಶಾಖೆಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ನಬಾರ್ಡ ಎಜಿಎಂ ಮಯೂರ ಕಾಂಬ್ಳೆ, ಆರ್‌ಬಿಐ ಎಜಿಎಂ ಸೂರಜ ಎಸ್., ಎಸ್‌ಬಿಐ ರಿಜನಲ್ ಮ್ಯಾನೇಜರ್ ನಾಗ ಸುಬ್ಬಾರೆಡ್ಡಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಬ್ಯಾಂಕ್ ಅಧಿಕಾರಿಗಳು ಇದ್ದರು.ಸಾಲ ವಿತರಣೆ ವೇಗಗೊಳಿಸಲು ಸೂಚನೆ

ರೈತರು, ಮಹಿಳಾ ಸ್ವಸಹಾಯ ಸಂಘಗಳು ಹಾಗೂ ಸಣ್ಣ ವ್ಯಾಪಾರಿಗಳಿಗೆ ಸಾಲ ಮಂಜೂರಾತಿಯಲ್ಲಿ ಯಾವುದೇ ವಿಳಂಬವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಅವರು ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಧಾನಮಂತ್ರಿ ಜನಧನ, ಮುದ್ರಾ, ಸ್ವನಿಧಿ, ಕಿಸಾನ್ ಕ್ರೆಡಿಟ್ ಕಾರ್ಡ್ ಸೇರಿದಂತೆ ಎಲ್ಲ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಲಾಭ ಅರ್ಹ ಫಲಾನುಭವಿಗಳಿಗೆ ತಲುಪಬೇಕು.

ಬ್ಯಾಂಕುಗಳು ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳಲ್ಲಿ ಶಾಖೆಗಳ ಮೂಲಕ ಜನಸಂಪರ್ಕ ಹೆಚ್ಚಿಸಿ ಹಣಕಾಸು ಒಳಗೊಳ್ಳುವಿಕೆಗೆ ಒತ್ತು ನೀಡಬೇಕು. ವಿವಿಧ ರೀತಿಯ ವಾರ್ಷಿಕ ಸಾಲ ಗುರಿಗಳನ್ನು ನಿಗದಿತ ಅವಧಿಯೊಳಗೆ ಸಾಧಿಸುವಂತೆ ಸೂಚಿಸಿದರು.

ಸಾಲ ಅರ್ಜಿಗಳನ್ನು ತಿರಸ್ಕರಿಸುವ ಸಂದರ್ಭದಲ್ಲಿ ಫಲಾನುಭವಿಗಳಿಗೆ ಸ್ಪಷ್ಟ ಕಾರಣ ತಿಳಿಸಿ ಮರುಅರ್ಜಿಗೆ ಅವಕಾಶ ಕಲ್ಪಿಸಬೇಕು. ಬ್ಯಾಂಕುಗಳು ಮತ್ತು ಜಿಲ್ಲಾ ಆಡಳಿತದ ನಡುವೆ ಸಮನ್ವಯದಿಂದ ಕಾರ್ಯನಿರ್ವಹಿಸಿ ಸಮಸ್ಯೆಗಳಿಗೆ ತ್ವರಿತ ಪರಿಹಾರ ನೀಡಬೇಕು. ಮುಂದಿನ ಸಭೆಯಲ್ಲಿ ಪ್ರಗತಿ ವರದಿ ಸಲ್ಲಿಸುವಂತೆ ಹಾಗೂ ಕಾರ್ಯಕ್ಷಮತೆ ತೃಪ್ತಿಕರವಾಗದಿದ್ದರೆ ಸಂಬಂಧಿಸಿದ ಬ್ಯಾಂಕುಗಳಿಗೆ ಸೂಚನೆ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು.