ಸಾರಾಂಶ
ಕನ್ನಡಪ್ರಭ ವಾರ್ತೆ ಮದ್ದೂರು
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬನ್ನಹಳ್ಳಿ ಏತ ನೀರಾವರಿ ಯೋಜನೆ ಕಾಮಗಾರಿ ಶೀಘ್ರವಾಗಿ ಪೂರ್ಣಗೊಳ್ಳುವ ಮೂಲಕ ಈ ಭಾಗದ ಕೃಷಿಕರ ಬಹುದಿನಗಳ ಕನಸು ಈಡೇರಲಿದೆ ಎಂದು ಶಾಸಕ ಕೆ.ಎಂ.ಉದಯ್ ಮಂಗಳವಾರ ಹೇಳಿದರು.ಕ್ಷೇತ್ರ ವ್ಯಾಪ್ತಿಯ ಕೆ.ಬೆಳ್ಳೂರು ಗ್ರಾಮದಲ್ಲಿ ಶಾಸಕರ ಪ್ರದೇಶ ಅಭಿವೃದ್ಧಿ ಯೋಜನೆಯಡಿ 7 ಲಕ್ಷ ರು. ವೆಚ್ಚದಲ್ಲಿ ತಂಗುದಾಣ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ಜನಪ್ರತಿನಿಧಿಗಳ ನಿರ್ಲಕ್ಷದಿಂದ ಬನ್ನಹಳ್ಳಿ ಏತ ನೀರಾವರಿ ಯೋಜನೆ ಹಳ್ಳ ಹಿಡಿದಿತ್ತು. ಇದರಿಂದ ರೈತರ ಕೃಷಿ ಚಟುವಟಿಕೆಗೆ ತೊಂದರೆ ಉಂಟಾಗಿ ಬೆಳೆ ಬೆಳೆಯಲಾಗದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಯೋಜನೆಗೆ ಪುನಶ್ಚೇತನ ನೀಡಲು ನಿರ್ಧರಿಸಲಾಗಿದೆ. ಮುಂದಿನ ದಿನಗಳಲ್ಲಿ ಕೆರೆಕಟ್ಟೆಗಳಿಗೆ ನೀರು ತುಂಬಿಸುವುದರಿಂದ ಕೊಳವೆಬಾವಿಗಳಲ್ಲಿ ಅಂತರ್ಜಲ ವೃದ್ಧಿಯಾಗಿ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದು ಅಭಿಪ್ರಾಯಪಟ್ಟರು.ಜನಪ್ರತಿನಿಧಿಗಳು ಮತ್ತು ರಾಜಕೀಯ ಮುಖಂಡರು ಗ್ರಾಮಗಳ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಕಲಹಗಳನ್ನು ಬಿಟ್ಟು ಅಭಿವೃದ್ಧಿಗೆ ಪಕ್ಷಾತೀತವಾಗಿ ಒಗ್ಗೂಡಬೇಕು. ಇದರಿಂದ ಹೆಚ್ಚಿನ ಅಭಿವೃದ್ಧಿ ಸಾಧ್ಯ ಎಂದರು.ಕೊಕ್ಕರೆ ಬೆಳ್ಳೂರು ಗ್ರಾಮದ ಪಕ್ಷಿಧಾಮ ಪ್ರವಾಸಿ ತಾಣವಾಗಿ ಅಭಿವೃದ್ಧಿ: ಕೆ.ಎಂ.ಉದಯ್
ಮದ್ದೂರು:ದೇಶ ವಿದೇಶಗಳಿಂದ ವಲಸೆ ಬರುವ ಕೊಕ್ಕರೆ ಬೆಳ್ಳೂರು ಗ್ರಾಮದ ಪಕ್ಷಿಧಾಮವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಮಂಗಳವಾರ ಹೇಳಿದರು.
ಕೆ.ಬೆಳ್ಳೂರು ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಪ್ರಾರಂಭಿಸಲಾಗಿರುವ ಪಶು ಚಿಕಿತ್ಸಾ ಘಟಕ ಉದ್ಘಾಟಿಸಿ ಮಾತನಾಡಿ, ದೇಶ-ವಿದೇಶಗಳಿಂದ ಕೊಕ್ಕರೆಗಳು ವಲಸೆ ಬರುತ್ತಿರುವುದರಿಂದ ಇಲ್ಲಿನ ಪಕ್ಷಿಧಾಮವನ್ನು ಮುಂದಿನ ದಿನಗಳಲ್ಲಿ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸುವ ಬಗ್ಗೆ ರೂಪರೇಷೆಗಳನ್ನು ಸಿದ್ಧಪಡಿಸುವಂತೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದರು.ಪಕ್ಷಿಧಾಮಕ್ಕೆ ವಲಸೆ ಬರುವ ಪಕ್ಷಿಗಳ ಆರೋಗ್ಯಕ್ಕೆ ಯಾವುದೇ ರೀತಿಯ ತೊಂದರೆ ಉಂಟಾದಲ್ಲಿ ಚಿಕಿತ್ಸೆಗಾಗಿ ಪಟ್ಟಣ ಪ್ರದೇಶದ ಪಶು ಆಸ್ಪತ್ರೆಗೆ ಚಿಕಿತ್ಸೆಗೆ ಹೋಗಬೇಕಾದ ಅವಶ್ಯಕತೆ ಇತ್ತು. ಈಗ ಸ್ಥಳೀಯವಾಗಿ ಚಿಕಿತ್ಸೆ ಕೇಂದ್ರ ಪ್ರಾರಂಭಿಸಿರುವುದರಿಂದ ಹೆಚ್ಚಿನ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.
ಪಕ್ಷಿಧಾಮದಲ್ಲಿ ನೀರು ಮತ್ತು ಆಹಾರಕ್ಕೆ ತೊಂದರೆ ಇದೆ ಎನ್ನುವುದು ಗೊತ್ತಾಗಿದೆ. ಸ್ಥಳದಲ್ಲಿ ಮೂಲ ಸೌಲಭ್ಯ ಕಲ್ಪಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸುವ ಜೊತೆಗೆ ಕೊಕ್ಕರೆ ಬೆಳ್ಳೂರು ಪಕ್ಷಿಧಾಮವನ್ನು ಪ್ರವಾಸಿಗರ ಆಕರ್ಷಣೀಯ ಕೇಂದ್ರವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.ಇದೇ ವೇಳೆ ಮೂವರು ಕುರಿಗಾಹಿಗಳಿಗೆ ಸಾಂಕೇತಿಕವಾಗಿ ಗುರುತಿನ ಚೀಟಿ ವಿತರಣೆ ಮಾಡಲಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಚೆಲುವರಾಜು, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಮನ್ಮುಲ್ ನಿರ್ದೇಶಕ ಹರೀಶ್ ಬಾಬು, ಕೆ.ಬೆಳ್ಳೂರು ಗ್ರಾಪಂ ಅಧ್ಯಕ್ಷ ಕೆಂಪರಾಜು, ಸದಸ್ಯರಾದ ಸಿದ್ದಪ್ಪಾಜಿ, ಶಿವಲಿಂಗಯ್ಯ, ಪರಿಶಿಷ್ಟ ಜಾತಿ ತಾಲೂಕು ಘಟಕದ ಅಧ್ಯಕ್ಷ ಮಹದೇವು, ಪಶು ಇಲಾಖೆ ಸಹಾಯಕ ನಿರ್ದೇಶಕ ಗೋವಿಂದ ಮತ್ತಿತರರು ಇದ್ದರು.