ಸಾರಾಂಶ
ವಿಶ್ವಹಿಂದೂ ಪರಿಷತ್, ಬಜರಂಗದಳ ಪುತ್ತೂರು ಜಿಲ್ಲಾ ವತಿಯಿಂದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಬಿ.ಸಿ.ರೋಡಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಹೆದ್ದಾರಿಯನ್ನು ಬಂದ್ ಮಾಡಿದ ಹಿಂದೂ ಕಾರ್ಯಕರ್ತರನ್ನು ಬಂಟ್ವಾಳ ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿದರು.
ಕನ್ನಡಪ್ರಭ ವಾರ್ತೆ ಬಂಟ್ವಾಳ
ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ, ವಿಶ್ವಹಿಂದೂ ಪರಿಷತ್, ಬಜರಂಗದಳ ಪುತ್ತೂರು ಜಿಲ್ಲಾ ವತಿಯಿಂದ ಬಿ.ಸಿ.ರೋಡಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಈ ಸಂದರ್ಭ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಿದ ಹಿಂದೂ ಕಾರ್ಯಕರ್ತರನ್ನು ಬಂಟ್ವಾಳ ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿದರು.ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಬಂಟ್ವಾಳ ಪ್ರಖಂಡದ ಅಧ್ಯಕ್ಷ, ನ್ಯಾಯವಾದಿ ಪ್ರಸಾದ್ ಕುಮಾರ್ ರೈ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನಿರಂತರವಾಗಿ ಹಿಂದೂ ವಿರೋಧಿ ನೀತಿಯನ್ನು ಅನುಸರಿಸಿ ಅಶಾಂತಿಯನ್ನು ಸೃಷ್ಟಿ ಮಾಡುತ್ತಿದೆ. ಜೊತೆಗೆ ಬಿಜೆಪಿ ಸರ್ಕಾರ ಜಾರಿಗೆ ತಂದ ಗೋತ್ಯೆ ನಿಷೇಧ ಕಾಯ್ದೆಯನ್ನು ಹಿಂದಕ್ಕೆ ಪಡೆದು ನಿರಂತರವಾಗಿ ಗಲಭೆ ನಡೆಯಲು ಕಾರಣವಾಗಿದೆ ಎಂದರು.ಮಂಗಳೂರಿನಲ್ಲಿ ಇತ್ತೀಚಿಗೆ ನಡೆದ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿಗಳನ್ನು ಕಾಂಗ್ರೆಸ್ ನಾಯಕರೋರ್ವರು ಬ್ರದರ್ಸ್ ಎಂದು ಹೇಳಿಕೊಂಡ ಪರಿಣಾಮವಾಗಿ ಅವರು ಇಂದು ಮತ್ತೆ ಬೆಂಗಳೂರು ನಗರದಲ್ಲಿ ಬಾಂಬ್ ಬ್ಲಾಸ್ಟ್ ಮಾಡಿದರು. ವಿಧಾನಸೌಧದೊಳಗೆ ಪಾಕಿಸ್ತಾನಕ್ಕೆ ಜೈಕಾರ ಹಾಕಿದರು. ಸರ್ಕಾರದರೀ ಧೋರಣೆ ಸಾರ್ವಜನಿಕರನ್ನು ತಲೆತಗ್ಗಿಸುವಂತೆ ಮಾಡಿದೆ ಎಂದರು.
ವಿಶ್ವ ಹಿಂದೂ ಪರಿಷತ್ ಜಿಲ್ಲಾ ಅಧ್ಯಕ್ಷ ಡಾ.ಪ್ರಸನ್ನ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಒತ್ತಡಕ್ಕೆ ಮಣಿದು ಪೊಲೀಸರು ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಹೇಳಿದರು.ಜಿಲ್ಲಾ ಸಂಚಾಲಕ ಭರತ್ ಕುಮ್ಡೇಲು ಮಾತನಾಡಿದರು.ಈ ಸಂದರ್ಭ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯಾ, ಸಹಸಂಚಾಲಕರಾದ ಗುರುರಾಜ್ ಬಂಟ್ವಾಳ, ಸಂತೋಷ್ ಸರಪಾಡಿ, ಶಿವ ಪ್ರಸಾದ ತುಂಬೆ, ಬಿಜೆಪಿ ಪ್ರಮುಖರಾದ ಎ.ಗೋವಿಂದ ಪ್ರಭು, ಕಿಶೋರ್ ಕುಮಾರ್ ಬೊಟ್ಯಾಡಿ, ದೇವದಾಸ್ ಶೆಟ್ಟಿ, ರಾಮ್ ದಾಸ ಬಂಟ್ವಾಳ, ಚೆನ್ನಪ್ಪ ಆರ್. ಕೋಟ್ಯಾನ್, ದಿನೇಶ್ ಅಮ್ಟೂರು ಮತ್ತಿತರರು ಹಾಜರಿದ್ದರು.