ಸಾರಾಂಶ
ಕುಶಾಲನಗರ ಪಟ್ಟಣ ಮತ್ತು ಹೊರವಲಯಗಳಲ್ಲಿ ಭಾರಿ ಪ್ರಮಾಣದ ಮಳೆ ಸುರಿದ ಹಿನ್ನೆಲೆಯಲ್ಲಿ ಉಂಟಾಗಿರುವ ಮಳೆ ಹಾನಿ ಪ್ರದೇಶಗಳಿಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಮಾತನಾಡಿದ ಅವರು, ಮಳೆಗಾಲದಲ್ಲಿ ಕುಶಾಲನಗರದ ತಗ್ಗು ಪ್ರದೇಶದ ಬಡಾವಣೆಗಳಿಗೆ ನೀರು ನುಗ್ಗದಂತೆ ಅತ್ಯಾಧುನಿಕ ತಂತ್ರಜ್ಞಾನದ ಕಾಮಗಾರಿಯೊಂದಿಗೆ ತಡೆಗೋಡೆ ನಿರ್ಮಿಸಲಾಗುತ್ತಿದೆ ಎಂದರು.
ಕನ್ನಡಪ್ರಭ ವಾರ್ತೆ ಕುಶಾಲನಗರ
ಮಳೆಗಾಲದಲ್ಲಿ ಕುಶಾಲನಗರದ ತಗ್ಗು ಪ್ರದೇಶದ ಬಡಾವಣೆಗಳಿಗೆ ನೀರು ನುಗ್ಗದಂತೆ ಅತ್ಯಾಧುನಿಕ ತಂತ್ರಜ್ಞಾನದ ಕಾಮಗಾರಿಯೊಂದಿಗೆ ತಡೆಗೋಡೆ ನಿರ್ಮಿಸಲಾಗುತ್ತಿದೆ ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ತಿಳಿಸಿದ್ದಾರೆ.ಕಳೆದ ಎರಡು ದಿನಗಳ ಹಿಂದೆ ಕುಶಾಲನಗರ ಪಟ್ಟಣ ಮತ್ತು ಹೊರವಲಯಗಳಲ್ಲಿ ಭಾರಿ ಪ್ರಮಾಣದ ಮಳೆ ಸುರಿದ ಹಿನ್ನೆಲೆಯಲ್ಲಿ ಉಂಟಾಗಿರುವ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಕುಶಾಲನಗರದ ಸಾಯಿ ಬಡಾವಣೆ, ಕುವೆಂಪು ಬಡಾವಣೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ತಡೆಗೋಡೆ ಕಾಮಗಾರಿ ಬಗ್ಗೆ ಪರಿಶೀಲನೆ ನಡೆಸಿದ ಶಾಸಕರು ಆದಷ್ಟು ಬೇಗನೆ ಕಾಮಗಾರಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಸಾಯಿ ಬಡಾವಣೆಯಲ್ಲಿ ಶಾಶ್ವತವಾಗಿ ಪ್ರವಾಹ ತಪ್ಪಿಸಲು ಅತ್ಯಾಧುನಿಕ ತಂತ್ರಜ್ಞಾನದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಹೇಳಿದರು. ರಾಜ ಕಾಲುವೆ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಕುಶಾಲನಗರ ಹೊರವಲಯದ ಗುಮ್ಮನಕೊಲ್ಲಿ ವ್ಯಾಪ್ತಿಯ ಬಡಾವಣೆಗಳಿಗೆ ಮತ್ತು ಕೂಡ್ಲೂರು ವ್ಯಾಪ್ತಿಯಲ್ಲಿ ತಡೆಗೋಡೆ ಕುಸಿತದಿಂದ ಉಂಟಾಗಿರುವ ಹಾನಿ ಬಗ್ಗೆ ಪರಿಶೀಲನೆ ನಡೆಸಿ, ನಷ್ಟಕ್ಕೆ ಒಳಗಾದ ಮನೆ ಮಾಲೀಕರಿಗೆ ಸಾಂತ್ವನ ಹೇಳಿದ ಶಾಸಕರು ಚುನಾವಣೆ ನೀತಿ ಸಂಹಿತೆ ತೆರವುಗೊಂಡ ಬೆನ್ನಲ್ಲೇ ಸಮಸ್ಯೆ ಪರಿಹಾರಕ್ಕೆ ಮತ್ತು ಕಾಮಗಾರಿ ಕೈಗೆತ್ತಿಕೊಳ್ಳುವ ಬಗ್ಗೆ ಭರವಸೆ ವ್ಯಕ್ತಪಡಿಸಿದರು.ನಿಯಮಪಾಲನೆ ಸೂಚನೆ:
ಕುಶಾಲನಗರ ಮತ್ತು ಹೊರವಲಯಗಳಲ್ಲಿ ನೂತನ ಬಡಾವಣೆ ನಿರ್ಮಾಣ ಸಂದರ್ಭ ಅಧಿಕಾರಿಗಳು ಸ್ಥಳ ಪರಿಶೀಲಿಸಿ ನಿಯಮಾನುಸಾರ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕೈಗೊಳ್ಳಬೇಕು. ಈ ಸಂಬಂಧ ಮುಂದಿನ ತಿಂಗಳಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿ ಸೂಕ್ತ ಸಲಹೆ ನೀಡಲಾಗುವುದು ಎಂದು ಹೇಳಿದರು.ಜಿ.ಪಂ. ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ, ಮಾಜಿ ಸದಸ್ಯ ವಿ.ಪಿ.ಶಶಿಧರ್, ,ಪುರಸಭೆ ಸದಸ್ಯ ಪ್ರಮೋದ್ ಮುತ್ತಪ್ಪ, ಹರೀಶ್ ಮತ್ತು ಬಡಾವಣೆಗಳ ನಿವಾಸಿಗಳು, ಸಂಬಂಧಿಸಿದ ಅಧಿಕಾರಿಗಳು ಇದ್ದರು.