ಏಪ್ರಿಲ್‌ 30ರಂದು ಬಸವ ಜಯಂತಿ ಅದ್ಧೂರಿ ಆಚರಣೆ

| Published : Apr 20 2025, 01:46 AM IST

ಸಾರಾಂಶ

ಬಸವ ಸಮಿತಿ ಅಧ್ಯಕ್ಷ ಡಾ. ಅರವಿಂದ ಜತ್ತಿ ಅವರು ಬಸವೇಶ್ವರ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದು ಬಸವೇಶ್ವರ ಭಾವಚಿತ್ರ ಮೆರವಣಿಗೆ ನಡೆಯಲಿದೆ.

ಕೊಪ್ಪಳ:

ಬಸವ ಜಯಂತಿಯನ್ನು ಏ.30ರಂದು ಎಲ್ಲರೂ ಸೇರಿ ಅದ್ಧೂರಿಯಾಗಿ ಆಚರಿಸೋಣ ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಸವ ಜಯಂತಿ ಅಂಗವಾಗಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂದು ಬೆಳಗ್ಗೆ 8 ಗಂಟೆಗೆ ಅಂಬಿಗರ ಚೌಡಯ್ಯ ಉದ್ಯಾನವನದಲ್ಲಿರುವ ಬಸವೇಶ್ವರ ಪುತ್ಥಳಿಗೆ ಹಾಗೂ 9 ಗಂಟೆಗೆ ಗಂಜ್ ಸರ್ಕಲ್‌ನಲ್ಲಿರುವ ಬಸವೇಶ್ವರ ಮೂರ್ತಿಗೆ ಮಾಲಾರ್ಪಣೆ ಮಾಡಲಾಗುವುದು. ಸಂಜೆ 4 ಗಂಟೆಗೆ ಗಡಿಯಾರ ಕಂಬದ ಬಳಿ ಇರುವ ಮಹೇಶ್ವರ ದೇವಸ್ಥಾನದಿಂದ ಗವಿಮಠದ ವರೆಗೆ ಬಸವೇಶ್ವರ ಭಾವಚಿತ್ರದ ಮೆರವಣಿಗೆ ನಡೆಯಲಿದೆ ಎಂದರು.

ವೇದಿಕೆ ಕಾರ್ಯಕ್ರಮ ಸಂಜೆ 6 ಗಂಟೆಗೆ ಗವಿಮಠದ ತೇರು ಮೈದಾನದಲ್ಲಿ ನಡೆಯಲಿದೆ. ಬಸವ ಸಮಿತಿ ಅಧ್ಯಕ್ಷ ಡಾ. ಅರವಿಂದ ಜತ್ತಿ ಅವರು ಬಸವೇಶ್ವರ ಕುರಿತು ವಿಶೇಷ ಉಪನ್ಯಾಸ ನೀಡುವರು ಎಂದ ಅವರು, ರಥದ ಸಿಂಗಾರ ಅದ್ಭುತವಾಗಿ ಮಾಡಬೇಕು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಸೇರಿದಂತೆ ಇತರೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ತಮಗೆ ವಹಿಸಿದ ಕೆಲಸವನ್ನು ಜವಾಬ್ದಾರಿಯಿಂದ ಹಾಗೂ ಅಚ್ಚುಕಟ್ಟಾಗಿ ನಿಭಾಯಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಬಸವ ಸಮಾಜದ ಜಿಲ್ಲಾಧ್ಯಕ್ಷ ಬಸವರಾಜ ಬಳ್ಳೊಳಿ, ಲಿಂಗಾಯತ ಧರ್ಮ ಮಹಾಸಭಾ ರಾಜ್ಯಾಧ್ಯಕ್ಷ ಈಶಣ್ಣ ಕೊರನಳ್ಳಿ, ಶಾಂತಣ್ಣ ಓಜನಳ್ಳಿ, ಈಶ್ವರಪ್ಪ ತೋಟಪ್ಪ ದಿನ್ನಿ, ನಗರಸಭೆ ಪೌರಾಯುಕ್ತ ಗಣಪತಿ ಪಾಟೀಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಕೃಷ್ಣಮೂರ್ತಿ ದೇಸಾಯಿ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕಿ ಪುಷ್ಪಲತಾ ಎಸ್. ಉಪಸ್ಥಿತರಿದ್ದರು.