ಸಾರಾಂಶ
ಕನ್ನಡಪ್ರಭ ವಾರ್ತೆ ಭಾಲ್ಕಿ
ಗಡಿ ಭಾಗದಲ್ಲಿ ಡಾ.ಬಸವಲಿಂಗ ಪಟ್ಟದ್ದೇವರು ಸಲ್ಲಿಸುತ್ತಿರುವ ಅವಿರತ ಸಮಾಜ ಸೇವೆ ನಮ್ಮೆಲ್ಲರಿಗೂ ಸ್ಫೂರ್ತಿ ತುಂಬುವಂತಹದ್ದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ನುಡಿದರು.ಪಟ್ಟಣದ ಹಿರೇಮಠ ಸಂಸ್ಥಾನಕ್ಕೆ ಸಚಿವ ಈಶ್ವರ ಖಂಡ್ರೆ ಮತ್ತು ಮಾಜಿ ಸಚಿವ ರಾಜಶೇಖರ ಪಾಟೀಲ್ ಬುಧವಾರ ಭೇಟಿ ನೀಡಿ, ಹಂಪಿ ವಿಶ್ವವಿದ್ಯಾಲಯದ ಪ್ರತಿಷ್ಠಿತ ನಾಡೋಜ ಗೌರವ ಪದವಿ ಪುರಸ್ಕೃತ ಡಾ.ಬಸವಲಿಂಗ ಪಟ್ಟದ್ದೇವರನ್ನು ಅಭಿನಂದಿಸಿ ಮಾತನಾಡಿದರು.
ಪಟ್ಟದ್ದೇವರು ಬಸವಣ್ಣನವರ ವಿಚಾರ ಧಾರೆ ಮೈಗೂಡಿಸಿಕೊಂಡು ರಾಜ್ಯ ಸೇರಿ ನೆರೆಯ ತೆಲಂಗಾಣ, ಮಹಾರಾಷ್ಟ್ರ, ಆಂಧ್ರಪ್ರದೇಶ ರಾಜ್ಯಗಳಲ್ಲಿ ಸಂಚರಿಸಿ ಬಸವತತ್ವದ ಅಗತ್ಯತೆಯನ್ನು ಸಾರುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ತಿಳಿಸಿದರು.ಮಾಜಿ ಸಚಿವ ರಾಜಶೇಖರ ಪಾಟೀಲ್ ಮಾತನಾಡಿ, ಡಾ.ಬಸವಲಿಂಗ ಪಟ್ಟದ್ದೇವರು ಧರ್ಮ ಪ್ರಚಾರ ಪ್ರಸಾರದ ಜತೆಗೆ ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಅದ್ಭುತ ಕೊಡುಗೆ ನೀಡುತ್ತಿದ್ದಾರೆ ಎಂದು ಬಣ್ಣಿಸಿದರು. ಹೆತ್ತವರಿಗೆ ಬೇಡವಾದ ನವಜಾತ ಶಿಶುಗಳನ್ನು ಕರೆತಂದು ಪಾಲನೆ ಪೋಷಣೆ ಮಾಡುತ್ತ ಅನ್ನ, ಆಶ್ರಯ, ಶಿಕ್ಷಣ ನೀಡುವ ಮೂಲಕ ಮಕ್ಕಳ ಪಾಲಿಗೆ ದೇವರಾಗಿದ್ದಾರೆ. ಶ್ರೀಗಳ ನಿಸ್ವಾರ್ಥ ಸೇವೆಯನ್ನು ಗುರುತಿಸಿ ನಾಡೋಜ ಪುರಸ್ಕಾರ ನೀಡಿರುವುದು ಕಲ್ಯಾಣ ಕರ್ನಾಟಕ ಭಾಗ್ಯಕ್ಕೆ ಹೆಮ್ಮೆ ತರಿಸಿದೆ ಎಂದರು.
ಸನ್ಮಾನ ಸ್ವೀಕರಿಸಿದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಮಾತನಾಡಿ, ಡಾ.ಚನ್ನಬಸವ ಪಟ್ಟದ್ದೇವರು ತೋರಿದ ದಾರಿಯಲ್ಲಿ ನಡೆಯುವ ಪ್ರಯತ್ನ ಮಾಡುತ್ತಿದ್ದೇನೆ. ಪ್ರಶಸ್ತಿ, ಪುರಸ್ಕಾರ ಏನೇ ಬಂದರೂ ಭಕ್ತರಿಗೆ ಸಲ್ಲುತ್ತವೆ ಎಂದು ತಿಳಿಸಿದರು.ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ನೇತೃತ್ವ ವಹಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಪಾಟೀಲ್ ಮುಗನೂರ, ತಾಲೂಕು ಅಧ್ಯಕ್ಷ ಹಣಮಂತರಾವ ಚವ್ಹಾಣ್ ಸೇರಿದಂತೆ ಹಲವರು ಇದ್ದರು.