ಸಾರಾಂಶ
ಅನುಭವ ಮಂಟಪವನ್ನು ಜಗತ್ತಿನ ಮೊದಲ ಪಾರ್ಲಿಮೆಂಟ್ ಎನ್ನುತ್ತೇವೆ. ಯಾವುದೇ ವೃತ್ತಿ ಮಾಡುವ ವ್ಯಕ್ತಿ ಅನುಭವ ಮಂಟಪಕ್ಕೆ ಬಂದು ತಮ್ಮ ವಿಚಾರ ಮತ್ತು ಶ್ರೇಷ್ಠ ಅನಿಸಿಕೆಗಳನ್ನು ಮುಕ್ತವಾಗಿ ಹಂಚಿಕೊಳ್ಳಲು ಅವಕಾಶ ಮಾಡಿಕೊಟ್ಟಂತಹ ಜಗತ್ತಿನ ಅತ್ಯಂತ ಶ್ರೇಷ್ಠ ವ್ಯಕ್ತಿ ಬಸವಣ್ಣ ಎಂದರೆ ತಪ್ಪಾಗಲಾರದು.
ಕನ್ನಡಪ್ರಭ ವಾರ್ತೆ ನಾಗಮಂಗಲ
ಕಾಯಕಯೋಗಿ ಬಸವಣ್ಣನವರು ಅನುಭವ ಮಂಟಪದ ಮೂಲಕ ಎಲ್ಲಾ ಸಮಾಜವನ್ನು ಒಂದೆಡೆ ಸೇರಿಸಿ ಸಮಾಜವನ್ನು ಬದಲಾವಣೆಯತ್ತ ಕೊಂಡೊಯ್ಯಬೇಕೆಂಬ ಮಹದಾಸೆ ಹೊಂದಿದ್ದರು ಎಂದು ಶಿಕ್ಷಣ ಇಲಾಖೆ ಸಿಆರ್‌ಪಿ ಮನೋಹರ್ ತಿಳಿಸಿದರು.ಪಟ್ಟಣದ ತಾಲೂಕು ಆಡಳಿತ ಸೌಧದ ಒಳಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಭಾಗಿತ್ವದಲ್ಲಿ ಬುಧವಾರ ಆಯೋಜಿಸಿದ್ದ ಜಗಜ್ಯೋತಿ ಬಸವಣ್ಣನವರ 894ನೇ ಜಯಂತ್ಯುತ್ಸವದಲ್ಲಿ ಮಾತನಾಡಿದರು.
12 ನೇ ಶತಮಾನದಲ್ಲಿಯೇ ಜಾತಿ ಪದ್ಧತಿ ಸೇರಿದಂತೆ ಸಾಮಾಜಿಕ ಪಿಡುಗುಗಳ ವಿರುದ್ಧ ಧ್ವನಿ ಎತ್ತಿದ ಬಸವಣ್ಣ. ಸಾವಿರಕ್ಕೂ ಹೆಚ್ಚು ವಚನ ರಚಿಸಿ ಸಮಾಜ ಸುಧಾರಣೆಗಾಗಿ ಪಣತೊಟ್ಟಿದ್ದ ಮಹಾನ್ ದಾರ್ಶನಿಕ ವ್ಯಕ್ತಿ ಎಂದು ಬಣ್ಣಿಸಿದರು.ಅನುಭವ ಮಂಟಪವನ್ನು ಜಗತ್ತಿನ ಮೊದಲ ಪಾರ್ಲಿಮೆಂಟ್ ಎನ್ನುತ್ತೇವೆ. ಯಾವುದೇ ವೃತ್ತಿ ಮಾಡುವ ವ್ಯಕ್ತಿ ಅನುಭವ ಮಂಟಪಕ್ಕೆ ಬಂದು ತಮ್ಮ ವಿಚಾರ ಮತ್ತು ಶ್ರೇಷ್ಠ ಅನಿಸಿಕೆಗಳನ್ನು ಮುಕ್ತವಾಗಿ ಹಂಚಿಕೊಳ್ಳಲು ಅವಕಾಶ ಮಾಡಿಕೊಟ್ಟಂತಹ ಜಗತ್ತಿನ ಅತ್ಯಂತ ಶ್ರೇಷ್ಠ ವ್ಯಕ್ತಿ ಬಸವಣ್ಣ ಎಂದರೆ ತಪ್ಪಾಗಲಾರದು ಎಂದರು.
ಸಾಮಾಜಿಕ ನ್ಯಾಯದ ಹರಿಕಾರರಾಗಿ ಹೆಣ್ಣು ಮಕ್ಕಳಿಗೆ ಪ್ರಾಧಾನ್ಯತೆ ನೀಡಿ ಸಮಾಜದಲ್ಲಿ ಉನ್ನತ ಸ್ಥಾನ ಕಲ್ಪಿಸಿಕೊಟ್ಟಿದ್ದ ಬಸವಣ್ಣ ಕೇವಲ ಧಾರ್ಮಿಕ ಮತ್ತು ಆಧ್ಯಾತ್ಮಿಕ ಪುರುಷ ಅಷ್ಟೇ ಅಲ್ಲ. ಅವರೊಬ್ಬ ಶ್ರೇಷ್ಠ ಕವಿ. ಕನ್ನಡ ಸಾಹಿತ್ಯ ಲೋಕದ ಧೃವತಾರೆ ಎಂದು ರಾಷ್ಟ್ರಕವಿ ಕುವೆಂಪು ಅವರು ಹೇಳಿದ್ದಾರೆ ಎಂದರು.ತಹಸೀಲ್ದಾರ್ ಜಿ.ಆದರ್ಶ ಮಾತನಾಡಿ, 12ನೇ ಶತಮಾನದಲ್ಲಿಯೇ ಬಸವಣ್ಣನವರು ಲಿಂಗ ಸಮಾನತೆಯನ್ನು ಪ್ರತಿಪಾದಿಸಿ ಸ್ತ್ರೀ ಸಮಾನತೆ ಸ್ತ್ರೀ ಸ್ವಾತಂತ್ರ್ಯ ಎಂದರೆ ಏನೆಂಬುದನ್ನು ತಿಳಿಸಿಕೊಟ್ಟಿದ್ದಾರೆ. ಸಮಾಜದಲ್ಲಿ ಬಲವಾಗಿ ಬೇರೂರಿದ್ದ ಮೂಢನಂಬಿಕೆ ಕಂದಾಚಾರ ಹೋಗಲಾಡಿಸುವಲ್ಲಿ ಪ್ರಯತ್ನಪಟ್ಟಿದ್ದರು ಎಂದರು.
ಇದಕ್ಕೂ ಮುನ್ನ ಬಸವಣ್ಣರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಲಾಯಿತು. ಪುರಸಭೆ ಅಧ್ಯಕ್ಷ ಅಲಿ ಅನ್ಸರ್‌ಪಾಷ ಜಯಂತ್ಯುತ್ಸವದಲ್ಲಿ ಅಧ್ಯಕ್ಷತೆ ವಹಿಸಿದ್ದರು. ತಾಪಂ ಇಒ ಸತೀಶ್, ಡಿವೈಎಸ್‌ಪಿ ಬಿ.ಚಲುವರಾಜು, ಕ್ಷೇತ್ರ ಸಮನ್ವಯಾಧಿಕಾರಿ ಕೆ.ರವೀಶ್, ಆರೋಗ್ಯಾಧಿಕಾರಿ ಡಾ.ನಾರಾಯಣ, ಅಕ್ಷರದಾಸೋಹದ ಸಹಾಯಕ ನಿರ್ದೇಶಕ ಮಂಜುನಾಥ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜೆ.ವೈ.ಮಂಜುನಾಥ್, ಅಖಿಲಭಾರತ ವೀರಶೈವ ಲಿಂಗಾಯತ ಸಮಾಜದ ನಗರ ಘಟಕದ ಅಧ್ಯಕ್ಷ ರಾಜಶೇಖರ್, ತಾಲೂಕು ಅಧ್ಯಕ್ಷ ಪರಮೇಶ್, ಅಕ್ಕಮಹಾದೇವಿ ಸಂಘದ ಗೀತಾ, ದಲಿತ ಮುಖಂಡ ಎಂ.ನಾಗರಾಜಯ್ಯ, ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಕೆ.ಎನ್.ಮಧುಸೂಧನ್, ಶಿರಸ್ತೇದಾರ್ ಉಮೇಶ್, ಮುಖಂಡರಾದ ಎನ್.ನಟರಾಜ್, ಸುಭಾಷ್, ಸಿದ್ದಲಿಂಗಸ್ವಾಮಿ ಸೇರಿದಂತೆ ನೂರಾರು ಮಂದಿ ಇದ್ದರು.