ಬಸವಣ್ಣನವರು ಪ್ರತಿಪಾದಿಸಿದ ಸಮಾನತೆ, ಕಾಯಕ, ದಾಸೋಹ ಹಾಗೂ ವಿಶ್ವಭಾತೃತ್ವದ ತತ್ವಗಳು ಇಂದಿಗೂ ಜಗತ್ತಿಗೆ ದಾರಿದೀಪವಾಗಿವೆ. ಅವರ ವೈಚಾರಿಕತೆಗೆ ಶಿಲಾರೂಪ ನೀಡುವ ಮೂಲಕ ಗುತ್ತಲ ಕಲ್ಮಠವು ದೇಶಕ್ಕೆ ಮಾದರಿಯಾಗಿದೆ ಎಂದು ತುಮಕೂರಿನ ಸಿದ್ಧಗಂಗಾ ಮಠದ ಕಿರಿಯಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ ಹೇಳಿದರು.
ಹಾವೇರಿ: ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಮಹಿಳೆಯರಿಗೆ ಉಚಿತ ಶೌಚಾಲಯ ವ್ಯವಸ್ಥೆ ಕಲ್ಪಿಸುವುದರ ಜತೆಗೆ, ಶೌಚಾಲಯ ಬಳಕೆಯ ಹೆಸರಿನಲ್ಲಿ ಪ್ರಯಾಣಿಕರಿಂದ ಹಣ ವಸೂಲಿ ಮಾಡುವುದನ್ನು ತಕ್ಷಣ ನಿಲ್ಲಿಸಬೇಕೆಂದು ಆಗ್ರಹಿಸಿ ಡಿವೈಎಫ್ಐ ಜಿಲ್ಲಾ ಸಮಿತಿ ನೇತೃತ್ವದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಬಸ್ ನಿಲ್ದಾಣದ ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ನಿಯಂತ್ರಣಾಧಿಕಾರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಡಿವೈಎಫ್ಐ ಮುಖಂಡ ಬಸವರಾಜ ಪೂಜಾರ, ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ಶೌಚಾಲಯದಂತಹ ಕನಿಷ್ಠ ಮೂಲಭೂತ ಸೌಲಭ್ಯ ಪಡೆಯುವುದಕ್ಕೂ ಮಹಿಳೆಯರು ಹಣ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವುದು ಸರಿಯಲ್ಲ. ಪ್ರತಿನಿತ್ಯ ಸಾವಿರಾರು ಮಹಿಳೆಯರು, ವಿದ್ಯಾರ್ಥಿನಿಯರು ಬಸ್ ನಿಲ್ದಾಣಕ್ಕೆ ಆಗಮಿಸುತ್ತಾರೆ. ಅವರ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಸಾರಿಗೆ ಇಲಾಖೆ ಉಚಿತ ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕು. ಶೌಚಾಲಯ ಬಳಕೆಯ ಹೆಸರಿನಲ್ಲಿ ನಡೆಯುತ್ತಿರುವ ಹಣ ವಸೂಲಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.ಡಿವೈಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್. ಮಾತನಾಡಿ, ಬಸ್ ನಿಲ್ದಾಣದಲ್ಲಿ ಶೌಚಾಲಯಗಳ ಸಮರ್ಪಕ ನಿರ್ವಹಣೆ ಇಲ್ಲದಿರುವುದು ಪ್ರಯಾಣಿಕರಿಗೆ ತೊಂದರೆಯಾಗಿದೆ. ಮಹಿಳೆಯರು ಅನಿವಾರ್ಯವಾಗಿ ಶೌಚಾಲಯ ಬಳಸುವ ಸಂದರ್ಭದಲ್ಲಿ ಹಣ ನೀಡಬೇಕಾದ ಅನಿವಾರ್ಯತೆ ಎದುರಿಸುತ್ತಿದ್ದಾರೆ. ಶೌಚಾಲಯಗಳನ್ನು ಸ್ವಚ್ಛವಾಗಿಡುವುದರ ಜತೆಗೆ ಮಹಿಳೆಯರಿಗೆ ಅಗತ್ಯವಿರುವ ಮೂಲಸೌಕರ್ಯ ಒದಗಿಸುವುದು ಸಂಬಂಧಪಟ್ಟ ಅಧಿಕಾರಿಗಳ ಜವಾಬ್ದಾರಿಯಾಗಿದೆ. ನಿಯಮಬಾಹಿರವಾಗಿ ಹಣ ವಸೂಲಿ ಮಾಡುತ್ತಿದ್ದರೆ ಸಂಬಂಧಪಟ್ಟ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಎಸ್ಎಫ್ಐ ಜಿಲ್ಲಾಧ್ಯಕ್ಷ ಅರುಣಕುಮಾರ ನಗವತ, ಜಿಲ್ಲಾ ಕಾರ್ಯದರ್ಶಿ ಚೈತ್ರಾ ಕೊರವರ, ಮುಖಂಡರಾದ ಶಂಭುಲಿಂಗ ಸವದತ್ತಿ, ಪರಶುರಾಮ ಎಸ್., ಕಾಂತೇಶ ಹಳ್ಳೇರ, ಲೋಕೇಶ ಕೆಂಚಣ್ಣನವರ, ಶರಣಪ್ಪ ಮಲ್ಲಕ್ಕನವರ ಸೇರಿದಂತೆ ವಿದ್ಯಾರ್ಥಿ-ಯುವಜನರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.