ವಿದ್ಯಾರ್ಥಿಗಳು ತಮ್ಮ ಬುದ್ಧಿಶಕ್ತಿಯನ್ನು ಬೆಳೆಸಿಕೊಳ್ಳಲು ಅಗತ್ಯವಿರುವ ಎಲ್ಲ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಕಲಿಯಬೇಕು. ಕನ್ನಡ ಭಾಷೆ ಹಾಗೂ ನಾಡಿನ ಸಂಸ್ಕೃತಿಯ ಬಗ್ಗೆ ಭಾಷಾಭಿಮಾನ ಬೆಳೆಸಿಕೊಳ್ಳುವುದು ಅಗತ್ಯ ಎಂದು ಹೇಳಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ. ನಾರಾಯಣ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಉತ್ತಮ ಮೌಲ್ಯಗಳನ್ನು ಬಿತ್ತುವುದರೊಂದಿಗೆ ಸಮಾಜ ಸೇವೆಯ ಮನೋಭಾವ ಹಾಗೂ ಶಿಸ್ತನ್ನು ಮೈಗೂಡಿಸಿಕೊಳ್ಳುವಂತೆ ಮಾಡುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದರು.

ಕನ್ನಡಪ್ರಭ ವಾರ್ತೆ ಅರಕಲಗೂಡು

ವಿದ್ಯಾರ್ಥಿಗಳು ಪಠ್ಯ ಶಿಕ್ಷಣದ ಜೊತೆಗೆ ದೇಶಭಕ್ತಿ ಹಾಗೂ ಜಾನಪದ ಗೀತೆಗಳಂತಹ ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ಸ್ಪರ್ಧಾ ಮನೋಭಾವ ಬೆಳೆಸಿಕೊಳ್ಳಬೇಕು. ಇಂತಹ ಚಟುವಟಿಕೆಗಳು ಜ್ಞಾನ ವೃದ್ಧಿಗೆ ಸಹಕಾರಿಯಾಗುವುದರ ಜೊತೆಗೆ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೂ ನೆರವಾಗುತ್ತವೆ ಎಂದು ಮೈಸೂರು ವಿಭಾಗದ ಸಹಾಯಕ ರಾಜ್ಯ ಆಯುಕ್ತ ಬಿ. ಕೆ. ಬಸವರಾಜು ಹೇಳಿದರು.

ತಾಲೂಕು ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಗೊರೂರಿನ ಎಎಎನ್‌ವಿ ಕಾಲೇಜಿನಲ್ಲಿ ಆಯೋಜಿಸಿದ್ದ 2026–27ನೇ ಸಾಲಿನ ದೇಶಭಕ್ತಿ ಹಾಗೂ ಜಾನಪದ ಗೀತೆ ಗಾಯನ ಸ್ಪರ್ಧೆ ಮತ್ತು ಒಂದು ದಿನದ ತಾಲೂಕು ಪುನಶ್ಚೇತನ ಹಾಗೂ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿ ಜೀವನದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಚಟುವಟಿಕೆಗಳು ಮಹತ್ವದ ಪಾತ್ರ ವಹಿಸುತ್ತವೆ. ಶಿಸ್ತು, ಸೇವಾ ಮನೋಭಾವ, ನಾಯಕತ್ವ ಗುಣ ಹಾಗೂ ದೇಶಪ್ರೇಮ ಬೆಳೆಸಿಕೊಳ್ಳಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದರು.

ಶ್ರೀ ಯೋಗಾ ನರಸಿಂಹಸ್ವಾಮಿ ವಿದ್ಯಾಸಂಸ್ಥೆಯ ಅಧ್ಯಕ್ಷೆ ಗೀತಾಂಜಲಿ ಮೂರ್ತಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಬುದ್ಧಿಶಕ್ತಿಯನ್ನು ಬೆಳೆಸಿಕೊಳ್ಳಲು ಅಗತ್ಯವಿರುವ ಎಲ್ಲ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಕಲಿಯಬೇಕು. ಕನ್ನಡ ಭಾಷೆ ಹಾಗೂ ನಾಡಿನ ಸಂಸ್ಕೃತಿಯ ಬಗ್ಗೆ ಭಾಷಾಭಿಮಾನ ಬೆಳೆಸಿಕೊಳ್ಳುವುದು ಅಗತ್ಯ ಎಂದು ಹೇಳಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ. ನಾರಾಯಣ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಉತ್ತಮ ಮೌಲ್ಯಗಳನ್ನು ಬಿತ್ತುವುದರೊಂದಿಗೆ ಸಮಾಜ ಸೇವೆಯ ಮನೋಭಾವ ಹಾಗೂ ಶಿಸ್ತನ್ನು ಮೈಗೂಡಿಸಿಕೊಳ್ಳುವಂತೆ ಮಾಡುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಎಂ.ಜಿ. ರಾಮನಾಥ್, ಖಜಾಂಚಿ ಎಚ್. ಎನ್. ಶೇಷಾದ್ರಿ, ನಿರ್ದೇಶಕರಾದ ಜಿ. ಜಿ. ಭೋಜರಾಜು, ಹೇಮರಾಜು, ಜಯರಮೇಶ್, ಪ್ರಿಯಾಂಕ, ಸೋಮಶೇಖರ್‌, ಸುಲ್ತಾನ ಬಾನು, ನಯಾಜ್ ಪಾಷಾ, ಸ್ಕೌಟ್ಸ್ ಮತ್ತು ಗೈಡ್ಸ್ ಪದಾಧಿಕಾರಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ದೇಶಭಕ್ತಿ ಹಾಗೂ ಜಾನಪದ ಗೀತೆ ಗಾಯನ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.