ಸಾರಾಂಶ
ಸೇವಾ ಭದ್ರತೆಗಾಗಿ ಬಿಬಿಎಂಪಿಯ 772 ಶಿಕ್ಷಕರು ಅನಿರ್ದಿಷ್ಟಾವಧಿ ಧರಣಿ 3ನೇ ದಿನಕ್ಕೆ ಕಾಲಿಸಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಬಿಬಿಎಂಪಿ ಶಾಲೆಗಳನ್ನು ಶಿಕ್ಷಣ ಇಲಾಖೆ ಸುಪರ್ದಿಗೆ ನೀಡುವ ಕ್ರಮ ವಿರೋಧಿಸಿ ಹಾಗೂ ಸೇವಾ ಭದ್ರತೆ ನೀಡುವಂತೆ ಒತ್ತಾಯಿಸಿ ಬಿಬಿಎಂಪಿ ಹೊರಗುತ್ತಿಗೆ ಶಿಕ್ಷಕರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದ್ದು ಮೂರನೇ ದಿನಕ್ಕೆ ಕಾಲಿಟ್ಟಿದೆ.ಕಳೆದೆರಡು ದಿನ ಬಿಬಿಎಂಪಿ ಕೇಂದ್ರ ಕಚೇರಿ ಮತ್ತು ಬನ್ನಪ್ಪ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದ್ದ ಬಿಬಿಎಂಪಿ ಹೊರಗುತ್ತಿಗೆ ಶಿಕ್ಷಕರು ಬುಧವಾರ ಸ್ವಾತಂತ್ರ್ಯ ಉದ್ಯಾನದ ಆವರಣದಲ್ಲಿ ಕರ್ತವ್ಯ ಬಹಿಷ್ಕರಿಸಿ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದರು.
ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಪಾಲಿಕೆ ಶಾಲೆಗಳನ್ನು ಶಿಕ್ಷಣ ಇಲಾಖೆಗೆ ವಹಿಸಲು ನಿರ್ಧರಿಸಿರುವುದರಿಂದ ಬಿಬಿಎಂಪಿ ಶಾಲೆಗಳಿಗೆ ಶಿಕ್ಷಣ ಇಲಾಖೆಯಿಂದಲೇ ಶಿಕ್ಷಕರನ್ನು ನೇಮಿಸಲಾಗುತ್ತದೆ. ಇದರಿಂದ ಬಿಬಿಎಂಪಿ ಶಾಲೆಗಳಲ್ಲಿ ಸದ್ಯ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ 772 ಶಿಕ್ಷಕರು ಕೆಲಸ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದಾರೆ. ಹಾಗಾಗಿ ಬಿಬಿಎಂಪಿ ಶಾಲೆಗಳನ್ನು ಶಿಕ್ಷಣ ಇಲಾಖೆಗೆ ವಹಿಸಬಾರದು, ಒಂದು ವೇಳೆ ವಹಿಸಿದರೂ ಹೊರಗುತ್ತಿಗೆ ಶಿಕ್ಷಕರಿಗೆ ಸೇವಾ ಭದ್ರತೆ ವಹಿಸಬೇಕು ಎಂದು ಶಿಕ್ಷಕರು ಆಗ್ರಹಿಸಿದರು.ಹೊರಗುತ್ತಿಗೆ ಆಧಾರದಲ್ಲಿ ಶಿಕ್ಷಕರನ್ನು ನೇಮಿಸುವ ಸಂಸ್ಥೆಯನ್ನು ರದ್ದು ಮಾಡಬೇಕು, ಹೊರಗುತ್ತಿಗೆ ಶಿಕ್ಷಕರಿಗೆ ಬಿಬಿಎಂಪಿಯಿಂದಲೇ ನೇರವಾಗಿ ವೇತನ ಪಾವತಿಸಬೇಕು. ಮಹಿಳಾ ಶಿಕ್ಷಕಿ-ಉಪನ್ಯಾಸಕರಿಗೆ ಸರ್ಕಾರದಿಂದ ಸಿಗುವಂತೆ ಹೆರಿಗೆ ರಜೆ, ಮಕ್ಕಳ ಅನಾರೋಗ್ಯ ರಜೆ ಸೇರಿದಂತೆ ವೇತನ ಸಹಿತ ರಜೆಗಳನ್ನು ಹೊರಗುತ್ತಿಗೆ ಶಿಕ್ಷಕರಿಗೂ ನೀಡಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಈ ಎಲ್ಲ ಬೇಡಿಕೆಗಳ ಈಡೇರಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.