ಸಾರಾಂಶ
ಕನ್ನಡಪ್ರಭ ವಾರ್ತೆ ಬೆಂಗಳೂರು
ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ಬಿಬಿಎಂಪಿ ವ್ಯಾಪ್ತಿಯ ಶಾಲೆಗಳ ವಿದ್ಯಾರ್ಥಿಗಳ ಶಿಕ್ಷಣದ ಜವಾಬ್ದಾರಿಯನ್ನು ಶಿಕ್ಷಣ ಇಲಾಖೆ ಸುಪರ್ದಿಗೆ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.ಶುಕ್ರವಾರ ಸಮಗ್ರ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ.
ಸಭೆಯ ನಂತರ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯ ಶಾಲೆಗಳನ್ನು ಶಿಕ್ಷಣ ಇಲಾಖೆ ಸುಪರ್ದಿಗೆ ನೀಡಲು ತೀರ್ಮಾನಿಸಲಾಗಿದೆ. ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಸರಿಸಮನಾಗಿ ಗುಣಮಟ್ಟದ ಶಿಕ್ಷಣ ನೀಡಬೇಕು ಎಂಬ ಉದ್ದೇಶದಿಂದ ಬಿಬಿಎಂಪಿ ಶಾಲೆಗಳ ಜವಾಬ್ದಾರಿಯನ್ನು ಶಿಕ್ಷಣ ಇಲಾಖೆಗೆ ವಹಿಸಲು ನಿರ್ಧರಿಸಿದ್ದೇವೆ ಎಂದು ಹೇಳಿದರು.ಬಿಬಿಎಂಪಿ ಶಾಲೆಗಳ ಮೂಲಸೌಕರ್ಯಗಳ ಉನ್ನತೀಕರಣ ಹಾಗೂ ಅವುಗಳ ನಿರ್ವಹಣೆಯನ್ನು ಬಿಬಿಎಂಪಿಯಿಂದ ಮಾಡಲಾಗುವುದು. ಶಾಲೆಯ ಜಾಗ, ಕಟ್ಟಡ ನಿರ್ವಹಣೆ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯವನ್ನು ಪಾಲಿಕೆಯೇ ನಿರ್ವಹಿಸಲಿದೆ. ಆದರೆ, ಗುಣಮಟ್ಟದ ಶಿಕ್ಷಣ ನೀಡುವ ಜವಾಬ್ದಾರಿಯನ್ನು ಶಿಕ್ಷಣ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದರು.23 ಸಾವಿರ ವಿದ್ಯಾರ್ಥಿಗಳಿಗೆ ಶಿಕ್ಷಣ: ಪ್ರಸ್ತುತ ಬಿಬಿಎಂಪಿ ನಿರ್ವಹಣೆಯಲ್ಲಿ 142 ನರ್ಸರಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, 17 ಪಿಯು ಕಾಲೇಜುಗಳಿವೆ. ಅವುಗಳಲ್ಲಿ 23 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಆದರೆ, ವಿದ್ಯಾರ್ಥಿಗಳ ಸಂಖ್ಯೆಗೆ ತಕ್ಕಂತೆ ಶಿಕ್ಷಕರಿಲ್ಲ. ಹೀಗಾಗಿ ಪ್ರತಿವರ್ಷ ಫಲಿತಾಂಶದಲ್ಲಿ ಬಿಬಿಎಂಪಿ ಶಾಲೆಗಳು ಹಿಂದೆ ಬೀಳುತ್ತಿವೆ. ಆದ್ದರಿಂದ ಈ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡುವುದರ ಜೊತೆಗೆ ಫಲಿತಾಂಶದಲ್ಲೂ ಗಣನೀಯವಾಗಿ ಏರಿಕೆ ತರುವ ಉದ್ದೇಶದಿಂದ ಬಿಬಿಎಂಪಿ ಶಾಲೆಗಳ ಶಿಕ್ಷಣದ ಜವಾಬ್ದಾರಿಯನ್ನು ಶಿಕ್ಷಣ ಇಲಾಖೆಗೆ ವಹಿಸಲಾಗಿದೆ. ಆದರೆ, ಈ ಶಾಲೆಗಳ ನಿರ್ವಹಣೆ ಜವಾಬ್ದಾರಿ ಪಾಲಿಕೆಯಲ್ಲಿಯೇ ಉಳಿಯಲಿದೆ.