ಕನ್ನಡಪ್ರಭ ವಾರ್ತೆ ವಿಜಯಪುರ
ಮಹಿಳೆಯರು ಸ್ತ್ರೀ ಶಕ್ತಿ ಮತ್ತು ಸ್ವಸಹಾಯ ಸಂಘಗಳಲ್ಲಿ ಕ್ರಿಯಾಶೀಲರಾಗಿ ಆರ್ಥಿಕ ಸಬಲೀಕರಣ ಹೊಂದಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಿಶು ಅಭಿವೃದ್ಧಿ ಯೋಜನೆ, ಸರ್ಕಾರೇತರ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಹಿಳಾ ಸಬಲೀಕರಣಕ್ಕಾಗಿ ಸರ್ಕಾರ ಸಾಕಷ್ಟು ಯೋಜನೆ ಜಾರಿಗೊಳಿಸಿದೆ. ಅನೇಕ ಯೋಜನೆಗಳ ಅನುಷ್ಟಾನದ ಮೂಲಕ ಮಹಿಳೆಯರನ್ನು ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಸಬಲರನ್ನಾಗಿಸುವ ಮೂಲಕ ಅವರನ್ನು ಸಬಲೀಕರಣಗೊಳಿಸಲಾಗುತ್ತಿದೆ. ಮಹಿಳೆಯರು ಇಂದು ಎಲ್ಲ ರಂಗಗಳಲ್ಲೂ ದಾಪುಗಾಲನ್ನಿಟ್ಟಿರುವುದು ಸಂತಸದ ಸಂಗತಿ ಎಂದರು.ಸಾಮಾಜಿಕ ಪಿಡುಗಾಗಿರುವ ಬಾಲ್ಯವಿವಾಹ, ವರದಕ್ಷಿಣೆ, ಪ್ರಸವ ಪೂರ್ವ ಲಿಂಗ ಪತ್ತೆ ಹಾಗೂ ಹತ್ಯೆ, ಕೌಟುಂಬಿಕ ಹಿಂಸೆಯಂತಹ ಸಮಸ್ಯೆಗಳನ್ನು ತೊಡೆದು ಹಾಕಲು ಸಾಕಷ್ಟು ಕಾಯ್ದೆ ಕಾನೂನು ಜಾರಿಯಲ್ಲಿದ್ದು, ಸಂಬಂಧಿಸಿದ ಇಲಾಖೆಗಳು ಈ ನಿಟ್ಟಿನಲ್ಲಿ ಕೈ ಜೋಡಿಸುವ ಮೂಲಕ ಈ ಪಿಡುಗುಗಳ ನಿರ್ಮೂಲನೆ ಹಾಗೂ ಕಡಿವಾಣಕ್ಕೆ ಕಟಿಬದ್ಧರಾಗಿ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
ಮಹಿಳೆಯರು ಇಂದು ಬಾಹ್ಯಾಕಾಶ ಸಾಧನೆ ಮಾಡಿದ್ದಾರೆ. ಫ್ಲೈಟ್ ಓಡಿಸುತ್ತಿದ್ದಾರೆ. ಸೈನ್ಯದಲ್ಲಿ ಉನ್ನತ ಹುದ್ದೆಯಲ್ಲಿದ್ದಾರೆ. ಮಹಿಳಾ ಕ್ರಿಕೆಟ್‌ನಲ್ಲಿ ನಮ್ಮದೇಶದ ಮಹಿಳೆಯರು ತೋರಿರುವ ಸಾಧನೆ ಅಪಾರವಾಗಿದೆ. ಸಾಮಾಜಿಕ ಸ್ಥಳದಲ್ಲಿ ಮಹಿಳೆ ಸ್ವಾವಲಂಬಿಯಾಗಿ ತನ್ನ ಕುಟುಂಬವನ್ನು ಸಮರ್ಪಕವಾಗಿ ನಿಭಾಯಿಸುವ ದೃಷ್ಟಿಯಿಂದ ಹಲವಾರು ಯೋಜನೆಗಳನ್ನು ಸರ್ಕಾರ ಅನುಷ್ಠಾನಕ್ಕೆ ತಂದಿದೆ. ಹಲವು ಸಾಮಾಜಿಕ ಸಮಸ್ಯೆಗಳಿಗೆ ಕಾಯ್ದೆ ಕಾನೂನುಗಳ ಕ್ರಮ ಕೈಗೊಳ್ಳಲಾಗುವುದು ಎಂದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದಲೂ ಅನೇಕ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಪೋಕ್ಸೊ ಪ್ರಕರಣ ಜರುಗದಂತೆ,ಬಾಲ್ಯ ವಿವಾಹ ತಡೆಗಟ್ಟಲಾಗುತ್ತಿದೆ. ಜೊತೆಗೆ ಪೋಷಣ ಅಭಿಯಾನ, ಬೇಟಿ ಬಚಾವೋ ಬೇಟಿ ಪಡಾವೋ ಸೇರಿದಂತೆ ಅನೇಕ ಕಾಯ್ದೆ, ಯೋಜನೆ ಮಹಿಳೆಯರ ಅಭ್ಯುದಯಕ್ಕಾಗಿವೆ. ಮಹಿಳೆಯರು ಅವುಗಳ ಸದುಪಯೋಗ ಮಾಡಿಕೊಳ್ಳಬೇಕು ಎಂದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಕೆ.ಚವ್ಹಾಣ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿ, ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮಹಿಳಾ ಸಬಲೀಕರಣ ಹಾಗೂ ಸ್ವಾವಲಂಬನೆಯ ಬದುಕು ನಡೆಸಲು ಬಹಳ ಅನುಕೂಲಕರವಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ನಮ್ಮ ಜಿಲ್ಲೆಯಲ್ಲಿ ಶೇ.98 ರಷ್ಟು ಲಾಭವನ್ನು ಪಡೆದುಕೊಂಡಿದ್ದರಿಂದ ರಾಜ್ಯದಲ್ಲಿ 6ನೇ ಸ್ಥಾನದಲ್ಲಿದ್ದೇವೆ. ಬೇಟಿ ಬಚಾವೊ ಬೇಟಿ ಪಡಾವೊ ಯೋಜನೆಯು ರಾಜ್ಯದ ಹೆಣ್ಣು ಮಕ್ಕಳಗಳಿಗೆ ಬಹಳ ದೊಡ್ಡ ಮಟ್ಟದಲ್ಲಿ ಅನುಕೂಲವಾಗಿದೆ ಎಂದರು. ಇದೇ ವೇಳೆ ಬಾಲ್ಯ ವಿವಾಹ ದಂತಹ ಅನೇಕ ಸಾಮಾಜಿಕ ಸೇವೆ, ಮಕ್ಕಳ ಹಕ್ಕುಗಳ ರಕ್ಷಣೆ ಸೇರಿದಂತೆ ಸಾಮಾಜಿಕ ಕಳಕಳಿಯ ಕಾರ್ಯ ನಿರ್ವಹಿಸಿರುವ ಮಹಿಳಾ ಮೇಲ್ವಿಚಾರಕರು, ಇಲಾಖೆಯ ಅಧಿಕಾರಿಗಳನ್ನು ಹಾಗೂ ಗ್ರಾಮೀಣ ಭಾಗದಲ್ಲಿ ಮಕ್ಕಳ ಶ್ರೇಯೋಭಿವೃದ್ಧಿಗೆ ಕಾರ್ಯ ನಿರ್ವಹಿಸಿರುವ ವಿವಿಧ ಸರ್ಕಾರೇತರ ಸಂಘ-ಸಂಸ್ಥೆಗಳ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು.ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ನಿರ್ಮಲಾ ಸುರಪುರ, ಸಿಡಿಪಿಒಗಳಾದ ಬಸವರಾಜ ಜಿಗಳೂರ, ಗೀತಾ ಗುತ್ತರಗಿಮಠ, ವಿವಿಧ ತಾಲೂಕುಗಳ ಸಿಡಿಪಿಒಗಳು, ಅಂಗನವಾಡಿ ಮೇಲ್ವಿಚಾರಕರು, ಕಾರ್ಯಕರ್ತರು, ಸಹಾಯಕಿಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.