ಕ್ಷಯ ರೋಗದ ಕುರಿತು ಜಾಗೃತರಾಗಿ, ಚಿಕಿತ್ಸೆ ಪಡೆದುಕೊಳ್ಳಿ: ಸಿಇಒ ರಾಹುಲ್‌

| Published : Mar 26 2024, 01:06 AM IST

ಕ್ಷಯ ರೋಗದ ಕುರಿತು ಜಾಗೃತರಾಗಿ, ಚಿಕಿತ್ಸೆ ಪಡೆದುಕೊಳ್ಳಿ: ಸಿಇಒ ರಾಹುಲ್‌
Share this Article
  • FB
  • TW
  • Linkdin
  • Email

ಸಾರಾಂಶ

ರಾಯಚೂರಿನ ಡಿಎಚ್ಒ ಕಚೇರಿ ಆವರಣದಲ್ಲಿ ವಿಶ್ವ ಕ್ಷಯ ರೋಗ ದಿನಾಚರಣೆಯ ಜನ ಜಾಗೃತಿ ಜಾಥಾಕ್ಕೆ ಜಿಪಂ ಸಿಇಒ ಪಾಂಡ್ವೆ ರಾಹುಲ್ ತುಕಾರಾಮ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ರಾಯಚೂರುಜಿಲ್ಲೆಯಲ್ಲಿ ಕ್ಷಯ ರೋಗ ನಿಯಂತ್ರಣಕ್ಕೆ ಸರ್ಕಾರದಿಂದ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಜನರು ಕ್ಷಯ ರೋಗದ ಲಕ್ಷಣಗಳು ಕಂಡುಬಂದಲ್ಲಿ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆದುಕೊಂಡಲ್ಲಿ ಕ್ಷಯ ರೋಗವನ್ನು ನಿಯಂತ್ರಿಸಬಹುದಾಗಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಪಾಂಡ್ವೆ ರಾಹುಲ್ ತುಕಾರಾಮ ಹೇಳಿದರು.

ಸ್ಥಳೀಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಕ್ಷಯ ರೋಗ ನಿರ್ಮೂಲನಾ ಕಾರ್ಯಕ್ರಮ, ರಿಮ್ಸ್ ವೈದ್ಯಕೀಯ ಕಾಲೇಜು, ರಿಮ್ಸ್ ನರ್ಸಿಂಗ್ ಕಾಲೇಜು, ಜಿಲ್ಲಾ ತರಬೇತಿ ಕೇಂದ್ರ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಕ್ಷಯ ರೋಗ ದಿನಾಚರಣೆ ಅಂಗವಾಗಿ ಜನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೊಇರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ದೇಶದಲ್ಲಿ 1962ರಲ್ಲಿ ಕ್ಷಯ ರೋಗ ನಿಯಂತ್ರಣಕ್ಕೆ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಸರ್ಕಾರದಿಂದ ಆರಂಭಿಸಲಾಯಿತು. ಅಂದಿನಿಂದ ಕ್ಷಯ ರೋಗ ನಿರ್ಮೂಲನೆಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನಿಯಮಿತವಾಗಿ ಕೆಮ್ಮು ಸೇರಿದಂತೆ ಇನ್ನಿತರ ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ ಸಾರ್ವಜನಿಕರು ಹತ್ತಿರದ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಳ್ಳಬೇಕು. ಕ್ಷಯ ರೋಗಕ್ಕೆ ಭಯಪಡುವಂತಿಲ್ಲ. ಜಾಗೃತರಾಗಬೇಕು ಎಂದು ತಿಳಿಸಿದರು.

ಆರೋಗ್ಯ ಇಲಾಖೆಯಿಂದ ಕ್ಷಯ ರೋಗದ ಕುರಿತು ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಹಾಗೂ ರೋಗ ನಿಯಂತ್ರಣಕ್ಕೆ ಬೇಕಾದ ಮುಂಜಾಗೃತಾ ಕ್ರಮಗಳ ಕುರಿತು ಮಾಹಿತಿ ತಿಳಿಸಬೇಕು. ಜಿಲ್ಲೆಯಲ್ಲಿ ಕ್ಷಯ ರೋಗದಿಂದ ಸಾವನಪ್ಪುವವರ ಪ್ರಮಾಣ ಶೇ.6 ರಷ್ಟಿದ್ದು, ಜನರಲ್ಲಿ ರೋಗದ ನಿಯಂತ್ರಣದ ಕುರಿತು ಜಾಗೃತಿ ಮೂಡಿಸಿದ್ದಲ್ಲಿ ಮತ್ತು ಜನರು ಚಿಕಿತ್ಸೆಗೆ ಮುಂದಾದಲ್ಲಿ ಈ ಪ್ರಮಾಣವನ್ನು ಶೇ.2ಕ್ಕೆ ತರಬಹುದಾಗಿದೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಡಬೇಕು ಎಂದು ತಿಳಿಸಿದರು.

ಇದೇ ವೇಳೆ ಜಿಲ್ಲಾ ಸ್ವೀಪ್ ಸಮಿತಿಯಿಂದ ಮತದಾರರ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು, ರಿಮ್ಸ್ ನಿರ್ದೇಶಕ ಡಾ.ರಮೇಶ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವಿಜಯಶಂಕರ, ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ.ಶಾಕೀರ ಮೊಯಿನುದ್ದಿನ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಶಿವಕುಮಾರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಗಣೇಶ, ಜಿಲ್ಲಾ ಸ್ವೀಪ್ ಸಮಿತಿಯ ನೋಡೆಲ್ ಅಧಿಕಾರಿ ಡಾ. ಬಿ.ವೈ ವಾಲ್ಮೀಕಿ, ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ಇದ್ದರು.