ಕನ್ನಡಪ್ರಭ ವಾರ್ತೆ ಅಥಣಿ

ಬೇಸಿಗೆಯ ಬಿಸಿಲು ಹೆಚ್ಚಾಗುತ್ತಿದ್ದು ಗ್ರಾಮೀಣ ಪ್ರದೇಶಗಳಲ್ಲಿ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಮುಂಜಾಗ್ರತೆ ವಹಿಸಬೇಕು ಎಂದು ಶಾಸಕ ಲಕ್ಷ್ಮಣ ಸವದಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಟ್ಟಣದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಪ್ರತಿವರ್ಷಕ್ಕಿಂತ ಈ ವರ್ಷ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ತಾಲೂಕ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು ಒಗ್ಗಟ್ಟಿನಿಂದ ಕೆಲಸ ಮಾಡುವ ಜೊತೆಗೆ ಜನಸಾಮಾನ್ಯರಿಗೆ ಮತ್ತು ರೈತರಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ನಿಗಾ ವಹಿಸಬೇಕು. ಈಗ ಕೃಷ್ಣಾ ನದಿಯಲ್ಲಿ 3.75 ಟಿಎಂಸಿ ನೀರು ಸಂಗ್ರಹವಿದ್ದು, ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ. ಏಪ್ರಿಲ್ ಕೊನೆ ವಾರದಲ್ಲಿ ಅಥವಾ ಮೇ ತಿಂಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಸಾಧ್ಯತೆ ಇದೆ. ಗ್ರಾಮಮಟ್ಟದ ಅಧಿಕಾರಿಗಳು ನೀರಿನ ಮೂಲಗಳನ್ನು ಈಗಿನಿಂದಲೇ ಗುರುತಿಸಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಅಗತ್ಯವಿರುವ ಗ್ರಾಮಗಳಲ್ಲಿ ಮತ್ತು ತೋಟದ ವಸತಿ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಂಡರೆ ಪಿಡಿಒಗಳು ತಕ್ಷಣ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡುವ ವ್ಯವಸ್ಥೆ ಮಾಡಬೇಕು. ಗ್ರಾಮ ಪಂಚಾಯತಿಗಳಲ್ಲಿ ಈಗ ಆಡಳಿತ ವ್ಯವಸ್ಥೆ ಇಲ್ಲ ಎಂದು ಯಾವ ಅಧಿಕಾರಿಗಳು ಬೇಜವಾಬ್ದಾರಿಯಿಂದ ಕೆಲಸ ಮಾಡಬಾರದು. ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಗ್ರಾಮಗಳ ಮತ್ತು ವಸತಿ ತೋಟಗಳ ಬಗ್ಗೆ ಈಗಾಗಲೇ ತಮಗೆ ಮಾಹಿತಿ ಇರುತ್ತದೆ. ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಆಗದಂತೆ ಈಗಿನಿಂದಲೇ ಎಚ್ಚರಿಕೆ ವಹಿಸಬೇಕು. ನಿರ್ಲಕ್ಷ ತೋರಿದ ಮತ್ತು ಬೇಜವಾಬ್ದಾರಿ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ನೀರು ಕಲುಷಿತವಾಗದಂತೆ ನೋಡಿಕೊಳ್ಳಿ

ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಬಹುಗ್ರಾಮ ಸಂಯುಕ್ತ ಕುಡಿಯುವ ನೀರಿನ ಯೋಜನೆಯ ಘಟಕಗಳಲ್ಲಿ ನೀರಿನ ಮಾದರಿ ಪರೀಕ್ಷೆ ಕೈಕೊಳ್ಳಬೇಕು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆ ಮಾಡುವ ಮೊದಲು ಟ್ಯಾಂಕರ್‌ಗಳನ್ನ ಸ್ವಚ್ಛಗೊಳಿಸಬೇಕು. ಜನರಿಗೆ ರೋಗಗಳು ಹರಡದಂತೆ, ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರಿಕೆ ವಹಿಸಬೇಕೆಂದು ಶಾಸಕ ಲಕ್ಷ್ಮಣ ಸವದಿ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಈ ಸಂದರ್ಭದಲ್ಲಿ ತಾಲೂಕು ತಹಸೀಲ್ದಾರ್ ಸಿದರಾಯ ಬೋಸಗಿ, ತಾಪಂ ಇಒ ಶಿವಾನಂದ ಕಲ್ಲಾಪುರ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿ ರವೀಂದ್ರ ಮುರುಗಾಲಿ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಕಂದಾಯ ಅಧಿಕಾರಿಗಳು, ಪಿಡಿಓಗಳು ಉಪಸ್ಥಿತರಿದ್ದರು.