ಸಾರಾಂಶ
ಕನ್ನಡಪ್ರಭ ವಾರ್ತೆ, ತುಮಕೂರು
ಜಿಲ್ಲೆಯಲ್ಲಿ ಡೆಂಘೀ ಪ್ರಕರಣಗಳು ಉಲ್ಬಣಗೊಳ್ಳದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆರೋಗ್ಯ ಇಲಾಖೆಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿದ ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ಡೆಂಘೀ ಪ್ರಕರಣಗಳ ಸಂಖ್ಯೆ ಹೆಚ್ಚಾಗುವ ಸಂಭವ ಇರುವುದರಿಂದ ಆರೋಗ್ಯ ಇಲಾಖೆ ಅಧಿಕಾರಿಗಳು ತಳಮಟ್ಟದಲ್ಲಿ ಡೆಂಘೀ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಈಗಾಗಲೇ ಎಲ್ಲಾ ಉಪವಿಭಾಗಾಧಿಕಾರಿಗಳು, ತಾಲೂಕು ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿ, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಡೆಂಘೀ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆಯಾದರೂ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುತ್ತಿಲ್ಲ. ಡೆಂಘೀ ಪ್ರಕರಣಗಳನ್ನು ನಿಯಂತ್ರಿಸಲು ಆರೋಗ್ಯ ಇಲಾಖೆಯೊಂದಿಗೆ ಪಾಲಿಕೆ, ನಗರಸ್ಥಳೀಯ ಸಂಸ್ಥೆಗಳು, ಶಿಕ್ಷಣ ಇಲಾಖೆ ಅಧಿಕಾರಿಗಳು ಸಹಕರಿಸಬೇಕು ಎಂದು ನಿರ್ದೇಶನ ನೀಡಿದರು.ಡೆಂಘೀ ನಿಯಂತ್ರಣಕ್ಕಾಗಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು. ಜನವಸತಿ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಮಳೆ ನೀರು ನಿಲ್ಲದಂತೆ ಕ್ರಮವಹಿಸಬೇಕು ಮಾರ್ಗಸೂಚಿಗಳನ್ನು ನಿರ್ಲಕ್ಷಿಸಿ ಡೆಂಘೀ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳದೆ ಪ್ರಕರಣಗಳ ಸಂಖ್ಯೆ ಹೆಚ್ಚಾದರೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು. ಅಧಿಕಾರಿಗಳು ಸಾರ್ವತ್ರಿಕ ರಜಾ ದಿನಗಳಲ್ಲಿಯೂ ಕೇಂದ್ರಸ್ಥಾನದಲ್ಲಿದ್ದು, ಕರ್ತವ್ಯ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.ಡೆಂಘೀ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ತಾಲೂಕುವಾರು ಮಾಹಿತಿ ಪಡೆದ ಅವರು ಶಾಲಾಯಲ್ಲಿ ಕಡ್ಡಾಯವಾಗಿ ಗೈರು ಹಾಜರಾದ ಮಕ್ಕಳ ರಕ್ತವನ್ನು ಪರೀಕ್ಷೆಗೊಳಪಡಿಸಬೇಕು. ಡೆಂಘೀ ದೃಢಪಟ್ಟ ಮಕ್ಕಳಿದ್ದಲ್ಲಿ ಸೂಕ್ತ ಚಿಕಿತ್ಸೆ ನೀಡಬೇಕು. ಗೈರಾದ ಮಕ್ಕಳ ರಕ್ತ ಪರೀಕ್ಷೆ ಮಾಡುವುದು ಆಯಾ ತಾಲ್ಲೂಕು ಆರೋಗ್ಯಾಧಿಕಾರಿಗಳ ಜವಾಬ್ದಾರಿಯಾಗಿದೆ. ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳು ಸಮನ್ವಯತೆಯಿಂದ ತುರ್ತಾಗಿ ತಾಲೂಕು ಮಟ್ಟದ ಕಾರ್ಯಪಡೆ ಸಭೆ ನಡೆಸಿ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಬಗ್ಗೆ ನಿರ್ಣಯಗಳನ್ನು ಕೈಗೊಂಡು ಅನುಷ್ಟಾನಿಸಬೇಕೆಂದು ತಿಳಿಸಿದರು.ಸ್ವಯಂ ಸೇವಕರು ಹಾಗೂ ಆಶಾ ಕಾರ್ಯಕರ್ತರನ್ನು ಬಳಸಿಕೊಂಡು ಮನೆ-ಮನೆ ಸಮೀಕ್ಷೆ ಕೈಗೊಂಡು ವಾರಕ್ಕೊಮ್ಮೆ ಡ್ರಮ್, ಬ್ಯಾರೆಲ್, ಮಣ್ಣಿನ ಮಡಿಕೆಯಲ್ಲಿ ಸಂಗ್ರಹಿಸಿದ ನೀರನ್ನು ಸ್ವಚ್ಛಗೊಳಿಸಿ ಒಣಗಿಸುವ ಮೂಲಕ ಒಣದಿನ ಆಚರಣೆ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ತೀವ್ರತರ ಜ್ವರ, ವಿಪರೀತ ತಲೆನೋವು, ಕಣ್ಣಿನ ಹಿಂಭಾಗದಲ್ಲಿ ನೋವು, ಮಾಂಸಖಂಡ ಮತ್ತು ಕೀಲುಗಳಲ್ಲಿ ನೋವು, ವಾಕರಿಕೆ, ವಾಂತಿ, ಮೈಮೇಲೆ ಚಿಕ್ಕ-ಚಿಕ್ಕ ಗುಳ್ಳೆಯ ಲಕ್ಷಣಗಳು ಕಂಡು ಬಂದಲ್ಲಿ ವೈದ್ಯರನ್ನು ಸಂಪರ್ಕಿಸಬೇಕೆಂಬ ಸಲಹೆ ಎಲ್ಲರಿಗೂ ತಲುಪಬೇಕೆಂದು ತಾಕೀತು ಮಾಡಿದರು. ಇತ್ತೀಚೆಗೆ ಡೆಂಘೀ ಜ್ವರದಿಂದ ಮೃತಪಟ್ಟ ಗುಣಶ್ರೀ ಅವರ ಸಾವಿಗೆ ಯಾರು ಜವಾಬ್ದಾರಿ? ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣದಿಂದ ಸಾವುನೋವು ಸಂಭವಿಸಿದರೆ ಡೆಂಘೀ ನಿಯಂತ್ರಣ ಕಾರ್ಯದಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆಂದು ಭಾವಿಸಲಾಗುತ್ತದೆ ಎಂದು ತಿಳಿಸಿದರು.
ಯಾವುದೇ ಜನವಸತಿ ಪ್ರದೇಶದಲ್ಲಿ ೧ಕ್ಕಿಂದ ಹೆಚ್ಚು ಡೆಂಘೀ ಪ್ರಕರಣ ವರದಿಯಾದರೆ ಆ ಪ್ರದೇಶವನ್ನು ‘ಹಾಟ್-ಸ್ಪಾಟ್’ಎಂದು ಗುರುತಿಸಬೇಕೆಂದು ಜಿಲ್ಲಾಧಿಕಾರಿ ಸೂಚಿಸಿದಾಗ ಮಾಹಿತಿ ನೀಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಡಿ.ಎನ್. ಮಂಜುನಾಥ್ ಜಿಲ್ಲೆಯಲ್ಲಿ 1 ಪ್ರದೇಶವನ್ನು ಹಾಟ್-ಸ್ಪಾಟ್ ಎಂದು ಗುರುತಿಸಲಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 123 ಸಕ್ರಿಯ ಡೆಂಘೀ ಪ್ರಕರಣಗಳಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ 11 ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 6 ಮಂದಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜನವರಿಯಿಂದ ಈವರೆಗೂ 419 ಪ್ರಕರಣಗಳಲ್ಲಿ ಡೆಂಘೀ ದೃಢಪಟ್ಟಿದ್ದು, ಜಿಲ್ಲಾದ್ಯಂತ ಪರಿಣಾಮಕಾರಿಯಾದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿರುವುದರಿಂದ ಪ್ರಕರಣಗಳ ಸಂಖ್ಯೆ ಉಲ್ಭಣವಾಗುತ್ತಿಲ್ಲವೆಂದು ಮಾಹಿತಿ ನೀಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಅಸ್ಗರ್ ಬೇಗ್, ಮಲೇರಿಯಾ ಅಧಿಕಾರಿ ಡಾ. ಚಂದ್ರಶೇಖರ್, ಪಾಲಿಕೆ ಆರೋಗ್ಯಾಧಿಕಾರಿ ವೀರೇಶ್ ಕಲ್ಮಟ್, ತಹಶೀಲ್ದಾರ್ ಎಂ. ಸಿದ್ದೇಶ್, ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.ಕೋಟ್ ... ಜಿಲ್ಲೆಯಲ್ಲಿ ಡೆಂಘೀ ನಿಯಂತ್ರಣದಲ್ಲಿ ಉದಾಸೀನ ತೋರುವ ಅಧಿಕಾರಿಗಳ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಲು ಉಸ್ತುವಾರಿ ಸಚಿವರು ಸೂಚಿಸಿದ್ದು, ಅದರನ್ವಯ ಬೇಜವಾಬ್ದಾರಿ ತೋರುವ ಅಧಿಕಾರಿಗಳು ಗಂಭೀರ ಪರಿಣಾಮವನ್ನು ಎದುರಿಸಬೇಕಾಗುತ್ತದೆ. -ಶುಭ ಕಲ್ಯಾಣ್, ಜಿಲ್ಲಾಧಿಕಾರಿ