ಮಳೆಗಾಲದಲ್ಲಿ ಅವಘಡ ಆಗದಂತೆ ಎಚ್ಚರ ವಹಿಸಿ: ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ

| Published : May 11 2025, 01:29 AM IST

ಮಳೆಗಾಲದಲ್ಲಿ ಅವಘಡ ಆಗದಂತೆ ಎಚ್ಚರ ವಹಿಸಿ: ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಪಂ ವ್ಯಾಪ್ತಿಯಲ್ಲಿ ಚರಂಡಿಗಳನ್ನು ಸ್ವಚ್ಛಗೊಳಿಸಿ ಮಳೆ ನೀರು ಸರಾಗವಾಗಿ ಹರಿಯುವಂತೆ ನೋಡಿಕೊಳ್ಳಬೇಕು.

ಕಾರವಾರ: ಮುಂಬರುವ ಮಳೆಗಾಲದಲ್ಲಿ ಜಿಲ್ಲೆಯ ಯಾವುದೇ ಭಾಗದಲ್ಲಿ ಅವಘಡಗಳು ಸಂಭವಿಸದಂತೆ ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಯಾವುದೇ ಜೀವಹಾನಿಯಾಗದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಪಂ ವ್ಯಾಪ್ತಿಯಲ್ಲಿ ಚರಂಡಿಗಳನ್ನು ಸ್ವಚ್ಛಗೊಳಿಸಿ ಮಳೆ ನೀರು ಸರಾಗವಾಗಿ ಹರಿಯುವಂತೆ ನೋಡಿಕೊಳ್ಳಬೇಕು. ಹೊಸದಾಗಿ ನಿರ್ಮಾಣ ಹಂತದಲ್ಲಿರುವ ಚರಂಡಿ ಕಾಮಗಾರಿಗಳನ್ನು ಆದಷ್ಟು ಶೀಘ್ರದಲ್ಲಿ ಮುಕ್ತಾಯಗೊಳಿಸಬೇಕು, ಚರಂಡಿ ಹೂಳಿನ ಸಮಸ್ಯೆಯಿಂದ ಜನವಸತಿ ಪ್ರದೇಶಗಳಲ್ಲಿ ಹಾಗೂ ಸಂಬಂಧಪಟ್ಟ ವ್ಯಾಪ್ತಿಯಲ್ಲಿ ನೆರೆ ಪರಿಸ್ಥಿತಿ ಉಂಟಾಗದಂತೆ ಮುನ್ನೆಚ್ಚರ ವಹಿಸಿ ಎಂದರು.

ಶಾಲೆ, ಅಂಗನವಾಡಿ ಮತ್ತು ರಸ್ತೆ ಬದಿಯಲ್ಲಿರುವ ಅಪಾಯಕಾರಿಗಳನ್ನು ಗುರುತಿಸಿ ಅವುಗಳನ್ನು ಅಲ್ಲಿಂದ ತೆರವುಗೊಳಿಸಬೇಕು. ಮಾಲ್ಕಿ ಜಮೀನಿನಲ್ಲಿರುವ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಯ ಮೂಲಕ ಆ ಸ್ಥಳಗಳ ಮಾಲೀಕರಿಗೆ ಅನುಮತಿ ನೀಡುವಂತೆ ತಿಳಿಸಿದ ಅವರು, ಸಿಡಿಲಿನಿಂದ ಆಕಸ್ಮಿಕ ಸಾವುಗಳಾಗುವುದನ್ನು ತಪ್ಪಿಸಲು, ಸಿಡಿಲಿನಿಂದ ರಕ್ಷಣೆ ಪಡೆಯುವ ಕ್ರಮಗಳ ಕುರಿತಂತೆ ವ್ಯಾಪಕವಾಗಿ ಜಾಗೃತಿ ಮೂಡಿಸುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಈಗಾಗಲೇ 439 ಗುಡ್ಡ ಕುಸಿತ ಪ್ರದೇಶಗಳನ್ನು ಗುರುತಿಸಲಾಗಿದೆ. ತುರ್ತು ಸಂದರ್ಭದಲ್ಲಿ ಇಲ್ಲಿನ ಸಾರ್ವಜನಿಕರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಬಗ್ಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು. ಗುಡ್ಡ ಕುಸಿತ ಕುರಿತಂತೆ ಮುನ್ನೆಚ್ಚರಿಕೆ ನೀಡಲು ನೇಮಿಸಲಾಗಿದ್ದು, ಇವರಿಗೆ ಈಗಾಗಲೇ ಜಿಎಸ್ಐ ಅಧಿಕಾರಿಗಳು ತರಬೇತಿಯನ್ನು ನೀಡಿದ್ದು, ಅವರಿಗೆ ಮೇ ಕೊನೆಯ ವಾರದಲ್ಲಿ ಮತ್ತೊಂದು ಸುತ್ತಿನ ತರಬೇತಿ ನೀಡಲಾಗುವುದು ಎಂದರು.

ಎಲ್ಲ ಗ್ರಾಪಂಗಳಲ್ಲಿ ವಿಪತ್ತು ನಿರ್ವಹಣಾ ಯೋಜನೆಯನ್ನು ತಯಾರಿಸಲಾಗಿದ್ದು, ತುರ್ತು ಸಂದರ್ಭದಲ್ಲಿ ಅಗತ್ಯವಿರುವ ಮಾನವ ಸಂಪನ್ಮೂಲ, ಸಂಪರ್ಕ ಸಂಖ್ಯೆಗಳು, ಯಂತ್ರೋಪಕರಣಗಳು, ಸುರಕ್ಷಿತ ಸ್ಥಳಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಸಿದ್ದವಾಗಿಟ್ಟುಕೊಂಡು ಯಾವುದೇ ಸಂದರ್ಭದಲ್ಲಿ ಯಾವುದೇ ರೀತಿಯ ವಿಪತ್ತು ಎದುರಾದಲ್ಲಿ ಅದನ್ನು ಎದುರಿಸಲು ಸಂಪೂರ್ಣ ಸನ್ನದ್ಧರಾಗಿರಬೇಕು ಎಂದರು.

ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಅನಧಿಕೃತವಾಗಿ ಕಾರ್ಯ ನಿರ್ವಹಿಸುತ್ತಿರುವ ಅಂಗಡಿಗಳನ್ನು ತೆರವುಗೊಳಿಸುವ ಕುರಿತಂತೆ ಅವರಿಗೆ ಈಗಾಗಲೇ ಸಾಕಷ್ಟು ಕಾಲಾವಕಾಶವನ್ನು ನೀಡಿದ್ದು, ಇವುಗಳನ್ನು ಮಳೆಗಾಲ ಆರಂಭವಾಗುವುದರ ಒಳಗೆ ತೆರವುಗೊಳಿಸುವಂತೆ ಸಂಬಂದಪಟ್ಟ ತಹಸೀಲ್ದಾರ್ ಗಳಿಗೆ ಸೂಚಿಸಿದರು.

ಪ್ರಸ್ತುತ ನೀರಿನ ಕೊರತೆ ಕಂಡು ಬರುವ ಗ್ರಾಮಗಳಲ್ಲಿನ ಕೆರೆಗಳಲ್ಲಿ ಹೂಳು ತೆಗೆಯುವ ಕಾರ್ಯವನ್ನು ಕೈಗೊಂಡು ಆ ಕೆರೆಗಳಲ್ಲಿ ನೀರು ಸಂಗ್ರಹವಾಗುವಂತೆ ನೋಡಿಕೊಳ್ಳಬೇಕು, ನಗರಾಭಿವೃದ್ಧಿ ಕೋಶದಿಂದ ಕೆರೆ ಅಭಿವೃದ್ಧಿ ಕಾಮಗಾರಿಗಳನ್ನು ಸಕಾಲದಲ್ಲಿ ಮುಕ್ತಾಯಗೊಳಿಸುವಂತೆ ತಿಳಿಸಿದರು.

ಮಳೆಗಾಲದಲ್ಲಿ ನೇವಲ್ ಬೇಸ್ ವ್ಯಾಪ್ತಿಯ ಗ್ರಾಮಗಳಲ್ಲಿ ನೆರೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ಇಲ್ಲಿನ ಚರಂಡಿ ಗಳಲ್ಲಿ ಡ್ರೆಜ್ಜಿಂಗ್ ಕಾರ್ಯ ಕೈಗೊಂಡು ಮಳೆ ನೀರು ಹರಿದು ಹೋಗುವಂತೆ ನೋಡಿಕೊಳ್ಳಿ ಎಂದು ಕಾರವಾರ ತಹಸೀಲ್ದಾರ್‌ಗೆ ಸೂಚಿಸಿದರು.

ಜಿಪಂ ಸಿಇಒ ಈಶ್ವರ ಕಾಂದೂ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪ ವಿಭಾಗಾಧಿಕಾರಿ ಕನಿಷ್ಕ, ನಗರಾಭಿವೃಧ್ದಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್ ಮತ್ತಿತರರು ಇದ್ದರು.