ಹಳ್ಳಿಗಳಲ್ಲಿ ಕುಡಿವ ನೀರು ಸಮಸ್ಯೆ ಬಾಧಿಸದಂತೆ ಎಚ್ಚರ ವಹಿಸಿ

| Published : Apr 20 2025, 02:04 AM IST

ಸಾರಾಂಶ

ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕುಡಿವ ನೀರು ಪೂರೈಕೆ ಸಂಬಂಧದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಪಂ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ್ ಮಾತನಾಡಿದರು.

ಜಿಪಂ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಪಂ ಸಿಇಒ ಎಸ್.ಜೆ.ಸೋಮಶೇಖರ್ ಸೂಚನೆಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮವಹಿಸಬೇಕು ಹಾಗೂ ಸ್ವಚ್ಛ ಭಾರತ ಮಿಷನ್ (ಗ್ರಾಮೀಣ) ಯೋಜನೆಯ ಬೂದು ನೀರು ಮತ್ತು ಮಲತ್ಯಾಜ್ಯ ಸಂಸ್ಕರಣಾ ಘಟಕ, ಸಮಗ್ರ ಘನತ್ಯಾಜ್ಯ ನಿರ್ವಹಣಾ ಘಟಕದ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ ಸೋಮಶೇಖರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಅನುಷ್ಠಾನಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮತ್ತು ಬೇಸಿಗೆಯಲ್ಲಿ ಕುಡಿಯುವ ನೀರು ತೊಂದರೆ ಇರುವ ಗ್ರಾಮಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕುಡಿಯುವ ನೀರು ಸಮಸ್ಯೆ ತೀವ್ರವಾಗಿರುವ ಗ್ರಾಮಗಳಲ್ಲಿ ಖಾಸಗಿ ಬೋರ್ ವೆಲ್ ಮಾಲೀಕರಿಂದ ಬಾಡಿಗೆ ಪಡೆದುಕೊಂಡು ಕುಡಿಯುವ ನೀರು ಪೂರೈಕೆ ಮಾಡಬೇಕು. ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಎಲ್ಲ ತಾಲೂಕು ಪಂಚಾಯಿತಿಗಳಲ್ಲಿ ಸಹಾಯವಾಣಿ ತೆರೆಯುವಂತೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಓವರ್ ಹೆಡ್ ಟ್ಯಾಂಕ್‍ಗಳ ಸ್ವಚ್ಛಗೊಳಿಸಿ, ಕ್ಲೋರಿನೇಷನ್ ಮಾಡಬೇಕು. ಈ ಕುರಿತು ಆರೋಗ್ಯ ಇಲಾಖೆ ಅಧಿಕಾರಿಗಳು ಮೇಲ್ವಿಚಾರಣೆ ನಡೆಸಬೇಕು. ಜವನಗೊಂಡನಹಳ್ಳಿ ಮತ್ತು ಹರ್ತಿಕೋಟೆ ಕುಡಿಯುವ ನೀರು ಯೋಜನೆಗಳ ಬಾಕಿ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ, ಟ್ರಯಲ್ ರನ್ ಮಾಡಬೇಕು. ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಗಳು ಸಭೆಗಳನ್ನು ಆಯೋಜಿಸಿ, ನಡಾವಳಿ ಜಿಲ್ಲಾ ಪಂಚಾಯಿತಿಗೆ ಸಲ್ಲಿಸಬೇಕು ಎಂದು ತಾಕೀತು ಮಾಡಿದರು.

ಜಿಲ್ಲೆಯ ಹಿರಿಯೂರು ತಾಲೂಕಿನ ವಿವಿ ಪುರ ಗ್ರಾಮ ಪಂಚಾಯಿತಿಯಲ್ಲಿ ಮಲತ್ಯಾಜ್ಯ ಸಂಸ್ಕರಣಾ ಘಟಕ ಪೂರ್ಣಗೊಂಡಿದ್ದು, ಟ್ರಯಲ್ ರನ್ ಮಾಡಬೇಕು. ಚಳ್ಳಕೆರೆ ತಾಲೂಕಿನ ನಗರಂಗೆರೆ, ಮೊಳಕಾಲ್ಮುರು ತಾಲೂಕಿನ ರಾಂಪುರ, ಹೊಳಲ್ಕೆರೆ ತಾಲೂಕಿನ ಗುಂಡೇರಿ, ಚಿತ್ರದುರ್ಗ ತಾಲೂಕಿನ ದ್ಯಾಮವ್ವನಹಳ್ಳಿ, ಹೊಸದುರ್ಗ ತಾಲೂಕಿನ ಬೆಲಗೂರು ಗ್ರಾಮ ಪಂಚಾಯಿತಿಗಳಲ್ಲಿ ಮಲತ್ಯಾಜ್ಯ ಸಂಸ್ಕರಣಾ ಘಟಕ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕಿ ಸಿ.ಎಸ್.ಗಾಯಿತ್ರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ಬಸನಗೌಡ ಪಾಟೀಲ್, ಜಿಲ್ಲಾ ಪಂಚಾಯಿತಿ ಸಹಾಯಕ ಯೋಜನಾಧಿಕಾರಿ ಡಿ.ಎಸ್.ಸುಮಾ, ಜಲಜೀವನ್ ಮಿಷನ್ ಯೋಜನೆಯ ಯೋಜನಾ ವ್ಯವಸ್ಥಾಪಕ ಮಂಜುನಾಥ ಎಸ್ ನಾಡರ್, ಐಇಸಿ ಸಮಾಲೋಚಕ ಬಿ.ಸಿ.ನಾಗರಾಜ್, ಹೆಚ್‍ಆರ್ ಡಿ ಸಮಾಲೋಚಕ ವಿನಯ್ ಕುಮಾರ್, ಎಸ್.ಹೆಚ್ ಸಮಾಲೋಚಕ ಪ್ರಮೀಳಾ, ಎಂಐಎಸ್ ಸಮಾಲೋಚಕರಾದ ಶಶಿಧರ್ ಮತ್ತು ಸ್ನೇಹನ್ ಹಾಗೂ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸತೀಶ್, ರವಿಕುಮಾರ್, ವಿಶ್ವನಾಥ್, ಸುನೀಲ್ ಇದ್ದರು.