ಸಾರಾಂಶ
ಕಾರವಾರ: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಬಿ ವೃಂದದ ಹುದ್ದೆಗೆ ಡಿ. 29 ನಡೆಯುವ ಮರು ಪರೀಕ್ಷೆಯಲ್ಲಿ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿಯ ಅವ್ಯವಹಾರ ಮತ್ತು ಲೋಪ-ದೋಷಗಳಾಗದಂತೆ ಮುನ್ನೆಚ್ಚರಿಕೆಯಿಂದ ಕಾರ್ಯ ನಿರ್ವಹಿಸುವಂತೆ ನಿಯೋಜನೆಗೊಂಡ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ನಿರ್ದೇಶನ ನೀಡಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಮರು ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯ 4 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 1470 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಪಾರದರ್ಶಕ ಮತ್ತು ಸುವ್ಯವಸ್ಥಿತವಾಗಿ ನಡೆಯುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಮರು ಪರೀಕ್ಷೆ ನಡೆಯುವ ಸಂಬಂಧ ಕರ್ನಾಟಕ ಲೋಕಸೇವಾ ಆಯೋಗವು ಹೊರಡಿಸಿರುವ ಪರೀಕ್ಷಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚನೆ ನೀಡಿದರು.ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಮತ್ತು ಜಾಮರ್ ಅಳವಡಿಸಿ, ಅವು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಬೇಕು. ಎಲ್ಲ ಪರೀಕ್ಷಾ ಕೇಂದ್ರಗಳಿಗೆ ವೈದ್ಯಕೀಯ ಸಿಬ್ಬಂದಿ ನಿಯೋಜಿಸಬೇಕು. ಪರೀಕ್ಷಾ ದಿನದಂದು ವಿದ್ಯುತ್ ವ್ಯತ್ಯಯವಾಗದಂತೆ ಮತ್ತು ಪರೀಕ್ಷಾ ದಿನದಂದು ಬಸ್‌ಗಳ ಸಂಚಾರ ಸಮರ್ಪಕವಾಗಿ ಕಾರ್ಯನಿರ್ವಹಿಸಲು ಕ್ರಮಕೈಗೊಳ್ಳುವಂತೆ ತಿಳಿಸಿದ ಅವರು, ಪ್ರಶ್ನೆಪತ್ರಿಕೆ ಮತ್ತು ಉತ್ತರ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಸಮಯಕ್ಕೆ ತಲುಪಿಸುವ ವಾಹನಗಳಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸುವಂತೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲ ಅಧಿಕಾರಿಗಳು ತಮಗೆ ವಹಿಸಿದ ಕೆಲಸವನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಗೌಪ್ಯತೆಯನ್ನು ಅರಿತು ಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡಬೇಕು ಎಂದರು.ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವೈ.ಕೆ. ಉಮೇಶ, ಡಿಡಿಪಿಐ ಲತಾ ನಾಯಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನೀರಜ್ ಬಿ.ವಿ., ನಗರ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ರಮೇಶ ಹೂಗಾರ, ಶಿಕ್ಷಣಾಧಿಕಾರಿ ನಾಗರಾಜ ಗೌಡ ಇದ್ದರು.