ಧಾರವಾಡ:

ಜಿಲ್ಲಾಡಳಿತ ಮತ್ತು ಜಿಪಂ ಮೂಲಕ ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳ ಅಂದಾಜು ಪಟ್ಟಿಯಂತೆ ಗುರುತಿಸಿದ ಗ್ರಾಮಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ಮತ್ತು ದನ-ಕರುಗಳಿಗೆ ಮೇವಿನ ಕೊರತೆಯಾಗದಂತೆ ಮುಂಜಾಗ್ರತಾ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್‌ ಆರ್‌ ಹೇಳಿದರು.

ಜಿಲ್ಲಾ ಪಂಚಾಯಿತಿಯಲ್ಲಿ ಶುಕ್ರವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರಸಕ್ತ ಬೇಸಿಗೆ ಕಾಲದ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿರುವ 15 ಗ್ರಾಮಗಳಲ್ಲಿ 17 ಖಾಸಗಿ ಕೊಳವೆ ಬಾವಿ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಸಮೀಕ್ಷೆಯಂತೆ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಏಪ್ರಿಲ್‌ನಲ್ಲಿ 34, ಮೇ ತಿಂಗಳಲ್ಲಿ 26 ಗ್ರಾಮ ಕುಡಿಯುವ ನೀರಿನ ಸಮಸ್ಯೆ ಎಂದು ಗುರುತಿಗಿಸಲಾಗಿದೆ ಎಂದರು. ಈ ವರೆಗೆ ಧಾರವಾಡ ತಾಲೂಕಿನ ಹೊಸಟ್ಟಿ, ಮಂಡಿಹಾಳ, ಬೇಲೂರ, ಮುಗದ, ಮನಗುಂಡಿ, ಮತ್ತು ಹುಬ್ಬಳ್ಳಿ ತಾಲೂಕಿನ ನೂಲ್ವಿ, ಅದರಗುಂಚಿ, ಕುರ್ಡಿಕೆರೆ, ಛಬ್ಬಿ ಹಾಗೂ ಕಲಘಟಗಿ ತಾಲೂಕಿನ ನೆಲ್ಲಹರವಿ ತಾಂಡ, ಬಿ.ಹುಲಿಕಟ್ಟಿ, ದ್ಯಾಮನಕೊಂಡ, ಮುಕ್ಕಲ, ಹಿರೇ ಹುನಸಿಕಟ್ಟಿ, ಕುಡಲಗಿ ಗ್ರಾಮಗಳು ಸೇರಿದಂತೆ ಒಟ್ಟು 15 ಗ್ರಾಮಗಳಿಗೆ ಪ್ರಸ್ತುತ ಖಾಸಗಿ ಕೊಳವೆ ಬಾವಿ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದರು.

ಜಿಲ್ಲೆಯಲ್ಲಿ 2,35,059 ದನ ಮತ್ತು ಎಮ್ಮೆ, 1,49,220 ಕುರಿ ಮತ್ತು ಮೇಕೆಗಳಿವೆ. ಜಿಲ್ಲೆಯಲ್ಲಿ ಪ್ರಸ್ತುತ ವಾರ 2,22,773.81 ಮೆ.ಟನ್ ಮೇವು ಲಭ್ಯವಿದ್ದು, ಅದು ಮುಂದಿನ 32 ವಾರಗಳಿಗೆ ಆಗುವಷ್ಟು ದಾಸ್ತಾನಿದೆ ಎಂದರು.

ಸಭೆಯಲ್ಲಿ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ, ಎಡಿಸಿ ಗೀತಾ ಸಿ.ಡಿ., ಜಿಪಂ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ ಇದ್ದರು.