ನವಜಾತ ಶಿಶು ಹತ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ

| Published : Jun 21 2024, 01:03 AM IST

ನವಜಾತ ಶಿಶು ಹತ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಸ್ಕ್ಯಾನಿಂಗ್‌ ಕೇಂದ್ರಗಳಿಗೆ ಭೇಟಿ, ವಾರದೊಳಗೆ ವರದಿ ಸಲ್ಲಿಸಬೇಕು ಎಂದು ಶಶಿಧರ ಕೋಸಂಬೆ ಕಟ್ಟುನಿಟ್ಟಿನ ಸೂಚನೆ

ಕನ್ನಡಪ್ರಭ ವಾರ್ತೆ ವಿಜಯಪುರ

ಜಿಲ್ಲೆಯಲ್ಲಿ ಪ್ರಸವಪೂರ್ವ ಲಿಂಗ ಪತ್ತೆ ಮತ್ತು ನವಜಾತ ಶಿಶುಗಳ ಹತ್ಯೆಯಂತಹ ಕೃತ್ಯಗಳು ನಡೆಯದಂತೆ ನೋಡಿಕೊಳ್ಳಲು ಎಲ್ಲ ಅಗತ್ಯ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಬೇಕು. ಎಲ್ಲ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಸಂಬಂಧಿಸಿದ ಅಧಿಕಾರಿಗಳು ಭೇಟಿ ನೀಡಿ ಆ ಕೇಂದ್ರಗಳಲ್ಲಿ ಅಳವಡಿಸಿರುವ ಸಿಸಿಟಿವಿ, ಅಗತ್ಯ ದಾಖಲೆಗಳನ್ನು ಪರಿಶೀಲಿಸಿ ಒಂದು ವಾರದೊಳಗೆ ವರದಿ ಸಲ್ಲಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಸೂಚಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ, ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ವಿವಿಧ ಇಲಾಖೆಗಳ ವತಿಯಿಂದ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಮಕ್ಕಳ ಪಾಲನಾ ಸಂಸ್ಥೆ, ಸ್ವಯಂ ಸೇವಾ ಸಂಸ್ಥೆ ಮುಖ್ಯಸ್ಥರೊಂದಿಗೆ ನಡೆದ ಮಕ್ಕಳ ರಕ್ಷಣಾ ವ್ಯವಸ್ಥೆ ಕುರಿತ ಭಾಗಿದಾರರೊಂದಿಗಿನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹೆರಿಗೆ ಸಂದರ್ಭದಲ್ಲಿ ತಾಯಿ ಮತ್ತು ಮಗುವಿನ ಮರಣ ಶೂನ್ಯಕ್ಕೆ ತರಲು ಅಗತ್ಯ ಕ್ರಮ ವಹಿಸುವಂತೆ ಸೂಚಿಸಿದರು. ಇದಕ್ಕೆ ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ ಪ್ರತಿಕ್ರಿಯಿಸಿ, ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಗೆ ದಾಖಲಾಗುವ ಪ್ರಮಾಣ ಹೆಚ್ಚಿದ್ದು, ಆಸ್ಪತ್ರೆಯಲ್ಲಿರುವ ಪ್ರಸೂತಿ ತಜ್ಞ ವೈದ್ಯರು ಉತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ ಜಿಲ್ಲಾಸ್ಪತ್ರೆಯನ್ನು ಅತ್ಯುತ್ತಮ ಆಸ್ಪತ್ರೆಯಾಗಿ ಗುರುತಿಸಿದ್ದಾರೆ. ಈ ಕಾರಣದಿಂದ ಜಿಲ್ಲಾಸ್ಪತ್ರೆ ಕುರಿತು ಪ್ರಶಂಸೆ ವ್ಯಕ್ತವಾಗಿದೆ ಎಂದು ಹೇಳಿದರು.

ಮಕ್ಕಳ ಶಾಲಾ ವಾಹನಗಳಿಗೆ ಅನುಮತಿ ನೀಡುವ ಮೊದಲು ಶಾಲಾ ದಾಖಲಾತಿಗಳನ್ನು ಪರಿಶೀಲಿಸಿ ಸಂಬಂಧಿಸಿದ ಅಧಿಕಾರಿಗಳು ಅನುಮತಿ ನೀಡಬೇಕು. ಮಕ್ಕಳನ್ನು ಕರೆದೊಯ್ಯುವ ಶಾಲಾ ವಾಹನಗಳು ನೋಂದಣಿಯಾದ ಹಾಗೂ ನೋಂದಣಿಯಾಗದ ವಾಹನಗಳ ಕುರಿತು ಮೂರು ತಿಂಗಳ ಕಾಲಾವಕಾಶದಲ್ಲಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.

ಮಕ್ಕಳಿಗೆ ಬಿಸಿಯೂಟ ಒದಗಿಸುವಾಗ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಉತ್ತಮ ಪೌಷ್ಟಿಕಾಂಶವುಳ್ಳ ಗುಣಮಟ್ಟದ ಆಹಾರ ಒದಗಿಸುವ ಮೂಲಕ ಮಕ್ಕಳ ಆರೋಗ್ಯದ ಸುರಕ್ಷತೆಗೆ ಆದ್ಯತೆ ನೀಡುವಂತೆ ಸೂಚಿಸಿದ ಅವರು, ಅಂಗನವಾಡಿ ಸುತ್ತಲಿನ ಪರಿಸರ ಸ್ವಚ್ಛವಾಗಿರಬೇಕು. ಅಂಗನವಾಡಿಗಳಲ್ಲಿ ನೀಡುವ ಆಹಾರ ಕುರಿತು ಮೇಲಾಧಿಕಾರಿಗಳು ನಿರಂತರವಾಗಿ ಪರಿಶೀಲನೆ ನಡೆಸುವ ಮೂಲಕ ಗುಣಮಟ್ಟ ಹಾಗೂ ಪೌಷ್ಟಿಕಾಂಶವುಳ್ಳ ಆಹಾರ ಒದಗಿಸುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಮಕ್ಕಳ ಶಿಕ್ಷಣಕ್ಕೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಶಾಲಾ ಸಮಯಕ್ಕನುಗುಣವಾಗಿ ನಿಗದಿತ ವೇಳೆಯಲ್ಲಿ ಸೂಕ್ತ ಬಸ್‌ಗಳು ಸಂಚರಿಸುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಹಿಂದುಳಿದ ವರ್ಗಗಳ ಹಾಗೂ ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಸತಿ ನಿಲಯಗಳಿಗೆ ನಿಯಮಿತವಾಗಿ ಭೇಟಿ ನೀಡಿ, ಮಕ್ಕಳಿಗೆ ಕಲ್ಪಿಸಲಾಗುತ್ತಿರುವ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿ ಖಚಿತಪಡಿಸಿಕೊಳ್ಳಬೇಕು. ತಿಂಗಳಿಗೆ ಒಂದು ಬಾರಿ ಸಭೆ ಏರ್ಪಡಿಸಿ ಮಕ್ಕಳ ಕುಂದು-ಕೊರತೆಗಳನ್ನು ಆಲಿಸಿ ಪರಿಹಾರ ಕಲ್ಪಿಸಬೇಕು ಎಂದು ಹೇಳಿದರು.

ಗ್ರಾಪಂ ಮಟ್ಟದಲ್ಲಿ ಗ್ರಾಮ ಸಲಹಾ ಸಮಿತಿ ರಚಿಸಿಕೊಂಡು ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಕಾರ್ಯನಿರ್ವಹಿಸಬೇಕು. ಮಕ್ಕಳ ಸಹಾಯವಾಣಿ ಸಂಖ್ಯೆ ೧೦೯೮, ಪೊಲೀಸ್ ಸಹಾಯವಾಣಿ ಫಲಕಗಳನ್ನು ನಮೂದಿಸಬೇಕು. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಸಂಬಂಧಿಸಿದ ಎಲ್ಲ ಅಧಿಕಾರಿಗಳು ಸಮನ್ವಯತೆ ಸಾಧಿಸಿಕೊಂಡು ಬಾಲಕಾರ್ಮಿಕ ಪದ್ಧತಿ ಕುರಿತು ಸೂಕ್ತ ಜಾಗೃತಿ ಮೂಡಿಸಬೇಕು. ಬಾಲ್ಯವಿವಾಹ ತಡೆಗೆ ಕ್ರಮ ವಹಿಸಬೇಕು. ಪೋಕ್ಸೋ ಪ್ರಕರಣಗಳು ಜರುಗದಂತೆ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು. ಆಯಾ ತಾಲೂಕಿನ ತಹಶೀಲ್ದಾರ ಅವರ ನೇತೃತ್ವದಲ್ಲಿ ಮೂರು ತಿಂಗಳಿಗೊಮ್ಮೆ ಮಕ್ಕಳ ರಕ್ಷಣಾ ಘಟಕ ಸಭೆ ನಡೆಸಬೇಕು ಎಂದು ಸಲಹೆ ನೀಡಿದರು.

ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಮಾತನಾಡಿ, ಜಿಲ್ಲೆಯಲ್ಲಿರುವ ಶಾಲಾ ಕೊಠಡಿಗಳ ಸುಸ್ಥಿತಿ ಕುರಿತು ಪರಿಶೀಲನೆ ನಡೆಸಬೇಕು. ತಮ್ಮ ತಾಲೂಕು ವ್ಯಾಪ್ತಿಯ ಶಾಲೆಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆಗಾಗ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಮಳೆಗಾಲ ಇರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಲ್ಲ ಅಗತ್ಯ ಕ್ರಮ ವಹಿಸಬೇಕು. ಯಾವುದೇ ಸಮಸ್ಯೆ ಬಾರದಂತೆ ನೋಡಿಕೊಳ್ಳಬೇಕು. ಯಾವುದೇ ಸಮಸ್ಯೆ ಬಂದಲ್ಲಿ ಸಂಬಂಧಿಸಿದ ಬಿಇಒ ಹಾಗೂ ಮುಖ್ಯೋಪಾಧ್ಯಾಯರನ್ನೇ ಹೊಣೆಗಾರರನ್ನಾಗಿಸಲಾಗುವುದು ಎಂದು ಎಚ್ಚರಿಸಿದರು.

ಸಭೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ಅಂಬಲಿ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಡಿವೈಎಸ್‌ಪಿ ಬಸವರಾಜ ಯಲಿಗಾರ, ಜಿಪಂ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲೀಕ ಮಾನವರ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎಸ್.ಜಿ.ಕುಲಕರ್ಣಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾಕ್ಷಿ ಜಾನಕಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.