ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರವಹಿಸಿ: ಗಂಗೂಬಾಯಿ ಮಾನಕರ

| Published : May 19 2024, 01:48 AM IST

ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರವಹಿಸಿ: ಗಂಗೂಬಾಯಿ ಮಾನಕರ
Share this Article
  • FB
  • TW
  • Linkdin
  • Email

ಸಾರಾಂಶ

ಮಳೆಗಾಲದ ಅವಧಿಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಎಲ್ಲ ರೀತಿಯ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದ್ದಾರೆ.

ಕಾರವಾರ: ಪ್ರಸಕ್ತ ಮಳೆಗಾಲದ ಅವಧಿಯಲ್ಲಿ ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಎಲ್ಲ ರೀತಿಯ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳ ಸಮಿತಿಯ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಳೆಗಾಲದಲ್ಲಿ ಕಂಡು ಬರಬಹುದಾದ ಡೆಂಘೀ, ಚಿಕೂನ್‌ಗುನ್ಯಾ, ಮಲೇರಿಯಾ, ಮಿದುಳು ಜ್ವರ ಮತ್ತಿತರ ರೋಗಗಳ ಲಕ್ಷಣಗಳು, ಅವುಗಳ ಹರಡುವಿಕೆ ಹಾಗೂ ನಿಯಂತ್ರಣ ಕುರಿತಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತಂತೆ ಸಾರ್ವಜನಿಕರಿಗೆ ಹೆಚ್ಚಿನ ಜಾಗೃತಿ ಮೂಡಿಸಿ, ಜಿಲ್ಲಾದ್ಯಂತ ವ್ಯಾಪಕ ಅರಿವು ಕಾರ್ಯಕ್ರಗಳನ್ನು ಆಯೋಜಿಸಬೇಕು. ಎಲ್ಲ ಸಾಂಕ್ರಾಮಿಕ ರೋಗಗಳಿಗೆ ಅಗತ್ಯವಿರುವ ಚುಚ್ಚುಮದ್ದು ಮತ್ತು ಔಷಧಿಗಳನ್ನು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಇಟ್ಟುಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಇದು ವರೆಗೆ 1 ಮಲೇರಿಯಾ, 1 ಚಿಕೂನ್‌ಗುನ್ಯಾ, 46 ಡೆಂಘೀ ಪ್ರಕರಣಗಳು ವರದಿಯಾಗಿರುವ ಬಗ್ಗೆ ಪರಿಶೀಲಿಸಿದ ಡಿಸಿ, ಡೆಂಘೀ ಪ್ರಕರಣಗಳು ಹೆಚ್ಚಾಗದಂತೆ ಸೂಕ್ತ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಸೋಂಕಿತರನ್ನು ಶೀಘ್ರದಲ್ಲಿ ಪತ್ತೆ ಹಚ್ಚಿ, ತಕ್ಷಣ ಚಿಕಿತ್ಸೆ ನೀಡುವ ಮೂಲಕ ರೋಗ ಹರಡದಂತೆ ನೋಡಿಕೊಳ್ಳಬೇಕು. ಸೊಳ್ಳೆಗಳ ಉತ್ಪತ್ತಿ ಪ್ರದೇಶಗಳನ್ನು ಗುರುತಿಸಿ ಅಲ್ಲಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಈ ಬಾರಿ ಮಂಗನ ಕಾಯಿಲೆಯ 106 ಪ್ರಕರಣಗಳು ಕಂಡು ಬಂದಿದ್ದು, 9 ಜನರು ಮೃತಪಟ್ಟಿದ್ದಾರೆ. ಮಂಗನ ಕಾಯಿಲೆಯ ಬಗ್ಗೆ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಬೇಕು. ಜಿಲ್ಲೆಯ ಎಲ್ಲ ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಚರಂಡಿಗಳಲ್ಲಿ ಮಳೆ ನೀರು ನಿಲ್ಲದೇ ಸರಾಗವಾಗಿ ಹರಿದು ಹೋಗುವಂತೆ ಮಾಡಲು ತಕ್ಷಣದಿಂದಲೇ ಸ್ವಚ್ಛತಾ ಕ್ರಮಗಳನ್ನು ಕೈಗೊಂಡು, ಚರಂಡಿಯಲ್ಲಿ ತುಂಬಿರುವ ತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವಂತೆ ಎಲ್ಲ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನೀರಜ್ ಬಿ.ವಿ., ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಅರ್ಚನಾ ನಾಯಕ, ಆರ್.ಸಿ.ಎಚ್.ಒ. ಡಾ. ನಟರಾಜ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಕ್ಯಾ. ರಮೇಶ ರಾವ್, ನಗರಸಭೆ ಪ್ರಭಾರ ಪೌರಾಯುಕ್ತ ರವಿಕುಮಾರ ಕೆ.ಎಂ., ಹಾಗೂ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಇದ್ದರು.ಎಲ್ಲ ತಾಲೂಕುಗಳಲ್ಲಿ 108 ಸೇರಿದಂತೆ ಎಲ್ಲ ಆ್ಯಂಬುಲೆನ್ಸ್‌ ಸುಸ್ಥಿತಿಯಲ್ಲಿರಬೇಕು. ತುರ್ತು ಸಂದರ್ಭದಲ್ಲಿ ತಕ್ಷಣವೇ ಸಾರ್ವಜನಿಕರ ಸೇವೆಗೆ ಲಭ್ಯವಿರಬೇಕು. ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಕುಡಿಯಲು ಕುದಿಸಿ ಆರಿಸಿದ ನೀರು ಬಳಕೆ, ಮನೆ ಸುತ್ತಮುತ್ತ ಸ್ವಚ್ಛತೆ ಕಾಪಾಡುವುದು ಸೇರಿದಂತೆ ತೆಗೆದುಕೊಳ್ಳಬೇಕಾದ ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಕುರಿತ ಮಾಹಿತಿಯನ್ನು ಜಿಲ್ಲೆಯ ಎಲ್ಲ ಮನೆ ಮನೆಗಳಿಗೆ ತಲುಪಿಸಬೇಕು. ಸಾಮಾಜಿಕ ಜಾಲತಾಣಗಳ ಮೂಲಕ ಕೂಡಾ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು.