ಸಾರಾಂಶ
ಬಳ್ಳಾರಿ: ಬೇಸಿಗೆಯಲ್ಲಿ ಸಾರ್ವಜನಿಕರಿಗೆ ಕುಡಿವ ನೀರಿಗೆ ವ್ಯತ್ಯವಾಗಬಾರದು. ಯಾವುದೇ ಕಾರಣಕ್ಕೂ ಕಲುಷಿತ ನೀರು ಪೂರೈಕೆಯಾಗಬಾರದು. ಇದರ ಬಗ್ಗೆ ಎಚ್ಚರ ವಹಿಸಬೇಕು. ನಿರಂತರವಾಗಿ ನೀರಿನ ಮೂಲ ಪರಿಶೀಲನೆ ನಡೆಸುತ್ತಿರಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಕೆ.ವಿ.ತ್ರಿಲೋಕಚಂದ್ರ ಅಧಿಕಾರಿಗಳಿಗೆ ಸೂಚಿಸಿದರು.ನಗರದ ಜಿಪಂನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಜರುಗಿದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮದ (20 ಅಂಶ ಸೇರಿದಂತೆ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನೀರಿನ ಸಂಗ್ರಹಾಗಾರಗಳನ್ನು ಶುಚಿಗೊಳಿಸುತ್ತಿರಬೇಕು. ನೀರಿನ ಮಾದರಿ ಪರೀಕ್ಷೆಗೆ ಒಳಪಡಿಸಿದ ನಂತರವೇ ಸರಬರಾಜು ಮಾಡಬೇಕು. ಓವರ್ ಹೆಡ್ ಟ್ಯಾಂಕ್ ಮುಚ್ಚಳ ಮುಚ್ಚಲಾಗುತ್ತಿದೆಯೇ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಬೇಕು. ಜಿಲ್ಲೆಯ ಎಲ್ಲ ಗ್ರಾಪಂ ವ್ಯಾಪ್ತಿಯ ಹಳ್ಳಿಗಳಲ್ಲಿ ಸಮರ್ಪಕವಾಗಿ ಕ್ಲೋರಿನೇಷನ್‌ನೊಂದಿಗೆ ಶುದ್ಧೀಕರಣಗೊಳಿಸಿದ ನೀರು ಪೂರೈಕೆಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಬಹುದಾದಂತಹ 82 ಹಳ್ಳಿಗಳನ್ನು ಗುರುತಿಸಿದ್ದು, ಈಗಾಗಲೇ ಕುಡಿಯುವ ನೀರು ಪೂರೈಕೆಗೆ ಟ್ಯಾಂಕರ್ ಸಿದ್ಧತೆಯಲ್ಲಿಟ್ಟುಕೊಳ್ಳಲಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಇಂದುಧರ್ ಸಭೆಗೆ ತಿಳಿಸಿದರು.
ಶುದ್ಧ ಕುಡಿಯುವ ನೀರು ಸೇವನೆ ಕುರಿತು ಸಾರ್ವಜನಿಕರಿಗೆ ಜನಸಂದಣಿ ಇರುವ ಸ್ಥಳ, ಜಾತ್ರಾ ಸಂದರ್ಭಗಳಲ್ಲಿ ಅರಿವು ಮೂಡಿಸುವ ಕಾರ್ಯ ಕೈಗೊಳ್ಳಬೇಕು, ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದ ಅವರು, ಗ್ರಾಮಗಳಲ್ಲಿ ತುರ್ತು ಆರೋಗ್ಯ ಸೇವೆಗಳಿಗಾಗಿ ಬರುವ ರೋಗಿಗಳನ್ನು ಪ್ರತಿ ಬಾರಿಯೂ ಜಿಲ್ಲಾ ಕೇಂದ್ರಗಳಿಗೆ ತೆರಳುವಂತೆ ಶಿಫಾರಸ್ಸು ಮಾಡುವುದು ಸಮಂಜಸವಲ್ಲ, ತಪಾಸಣೆ ಕೈಗೊಳ್ಳಬೇಕು. ಸಾರ್ವಜನಿಕರಿಗೆ ತಾವಿರುವಲ್ಲಿಯೇ ಆರೋಗ್ಯ ಸೇವೆ ನೀಡಬೇಕು. ಇದಕ್ಕೆ ಸಾಕಷ್ಟು ಮಾನವ ಸಂಪನ್ಮೂಲ ಒದಗಿಸಲಾಗುತ್ತಿದೆ ಎಂದು ಹೇಳಿದರು.ಜಿಲ್ಲೆಯಲ್ಲಿ ಗರ್ಭಿಣಿ ಮಹಿಳೆಯರಲ್ಲಿ ಅಧಿಕ ರಕ್ತದೊತ್ತಡ, ಅನೀಮಿಯಾ ತಡೆಗಟ್ಟಲು ಸೂಕ್ತ ಕಾರ್ಯಯೋಜನೆ ರೂಪಿಸಬೇಕು. ಗರ್ಭಿಣಿ ಮಹಿಳೆಯರಿಗೆ ಸೇವಿಸಲು ಆರೋಗ್ಯ ಇಲಾಖೆಯಿಂದ ನೀಡಲಾಗುವ ಕಬ್ಬಿಣಾಂಶ ಮಾತ್ರೆಗಳ ಸೇವನೆ ಕುರಿತು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮನೆ ಭೇಟಿ ನಡೆಸಿ ಖಚಿತಪಡಿಸಿಕೊಳ್ಳಬೇಕು. ಇದರಿಂದ ಸುಲಭ ಮತ್ತು ಸಾಮಾನ್ಯ ಹೆರಿಗೆಗೆ ಸಹಾಯಕವಾಗಲಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಕಳಪೆ ಗುಣಮಟ್ಟದ ಬಿತ್ತನೆ ಬೀಜ ವಿತರಣೆಯಾಗಿರುವ ಬಗ್ಗೆ ಹಾಗೂ ರೈತರ ಫಸಲಿನಲ್ಲಿ ಇಳುವರಿ ಬಾರದೇ ಇರುವ ಬಗ್ಗೆ ದೂರುಗಳು ಕೇಳಿಬರುತ್ತಿದೆ. ಈ ಕುರಿತು ಕೃಷಿ ಅಧಿಕಾರಿಗಳು ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಮತ್ತು ಕೀಟನಾಶಕಗಳ ಪೂರೈಕೆ ಮಾಡುತ್ತಿರುವ ಅನಧಿಕೃತ ರಸಗೊಬ್ಬರದ ಅಂಗಡಿಗಳ ಮೇಲೆ ದಾಳಿ ನಡೆಸಿ ಕಾನೂನಿನ್ವಯ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ಕುರಿತು ರೈತರಿಗೆ ಗುಣಮಟ್ಟದ ಬೀಜ ಮತ್ತು ರಸಗೊಬ್ಬರಗಳ ಕುರಿತು ಅರಿವು ಮೂಡಿಸಬೇಕು ಎಂದು ತಿಳಿಸಿದರು.ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗಬಾರದು. ಈಗಾಗಲೇ ಇರುವ ಮೇವಿನ ಬ್ಯಾಂಕ್ ಗಳಲ್ಲಿ ಮೇವು ದಾಸ್ತಾನು ಇಟ್ಟುಕೊಳ್ಳಬೇಕು ಎಂದು ಸೂಚಿಸಿದ ಅವರು, ಪಶು ವೈದ್ಯಾಧಿಕಾರಿಗಳಿಂದ ಜಿಲ್ಲೆಯಲ್ಲಿ ಮೇವಿನ ಲಭ್ಯತೆ ಕುರಿತು ಮಾಹಿತಿ ಪಡೆದುಕೊಂಡರು.
ಸಂಡೂರು ತಾಲೂಕು ವ್ಯಾಪ್ತಿಯಲ್ಲಿ ಕಳೆದ ವಾರ ಅಕಾಲಿಕ ಗಾಳಿ-ಮಳೆಯಿಂದ ಬಾಳೆ ಬೆಳೆಯು ನೆಲಕ್ಕುರುಳಿರುವ ಕುರಿತು ವರದಿಯಾಗಿದೆ. ಈ ಕುರಿತು ತೋಟಗಾರಿಕೆ ಅಧಿಕಾರಿಗಳಿಗೆ ಪ್ರಶ್ನಿಸಿದರು,ಈ ಕುರಿತು ನಿಯಮಾನುಸಾರ ಬೆಳೆ ಪರಿಹಾರ ಒದಗಿಸಲು ಕ್ರಮ ವಹಿಸುವಂತೆ ತಾಲೂಕು ತಹಸೀಲ್ದಾರರಿಗೆ ನಿರ್ದೇಶನ ನೀಡಲಾಗಿದೆ ಎಂದು ತೋಟಗಾರಿಕೆ ಉಪನಿರ್ದೇಶಕರು ಸಭೆಗೆ ತಿಳಿಸಿದರು.
ಜಿಲ್ಲೆಯಲ್ಲಿ ಹೈನುಗಾರಿಕೆಗೆ ಉತ್ತೇಜನ ನೀಡಬೇಕು. ಸಾಮಾಜಿಕ ಅರಣ್ಯ ಬೆಳವಣಿಗೆಗೆ ಆದ್ಯತೆ ನೀಡಬೇಕು. ಜಿಲ್ಲೆಯಲ್ಲಿ ರಸ್ತೆಗಳು ನಿರ್ಮಾಣ ಕಾಮಗಾರಿಗಳು ಗುಣಮಟ್ಟದ್ದಾಗಿರಬೇಕು. ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿಗಳಿಗೆ ಚುರುಕು ನೀಡಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲೆಯಲ್ಲಿನ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಬರುವ ವಸತಿ ನಿಲಯಗಳ ಕಟ್ಟಡ, ನಿರ್ವಹಣೆ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಮತ್ತು ಇತರೆ ವ್ಯವಸ್ಥೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು, ಸೂಕ್ತ ಸಲಹೆ-ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್, ಸಹಾಯಕ ಆಯುಕ್ತ ಪಿ. ಪ್ರಮೋದ್, ಜಿಲ್ಲಾ ಖನಿಜ ಪ್ರತಿಷ್ಠಾನದ ವಿಶೇಷ ಅಧಿಕಾರಿ ಪಿ.ಎಸ್. ಮಂಜುನಾಥ, ಜಿಪಂ ಉಪಕಾರ್ಯದರ್ಶಿ ಗಿರಿಜಾ ಶಂಕರ್ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.