ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿ ಹಾಗೂ ಸಿಬ್ಬಂದಿ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಪರ ಜಿಲ್ಲಾಧಿಕಾರಿ ಶಿವಾನಂದಮೂರ್ತಿ ಸೂಚಿಸಿದರು.
ಕನ್ನಡಪ್ರಭ ವಾರ್ತೆ ರಾಮನಗರ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿ ಹಾಗೂ ಸಿಬ್ಬಂದಿ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಪರ ಜಿಲ್ಲಾಧಿಕಾರಿ ಶಿವಾನಂದಮೂರ್ತಿ ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಚುನಾವಣಾ ಕರ್ತವ್ಯದಲ್ಲಿ ನಿರತರಾಗುವ ವಿವಿಧ ಹಂತದ ಅಧಿಕಾರಿಗಳಿಗೆ ಕರ್ತವ್ಯಗಳು ಹಾಗೂ ಜವಾಬ್ದಾರಿಗಳ ಕುರಿತು ಮಾತನಾಡಿದರು.
ಎಫ್‌ಎಸ್‌ಟಿ, ಎಸ್‌ಎಸ್‌ಟಿ, ವಿಎಸ್‌ಟಿ, ವಿವಿಟಿ ತಂಡಗಳು ಹಾಗೂ ಪೊಲೀಸ್ ಸೆಕ್ಟರ್‌ಗಳಿಗೆ ನಿಯೋಜನೆಗೊಳ್ಳುವ ಅಧಿಕಾರಿಗಳು ಚುನಾವಣಾ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಚುನಾವಣಾ ಆಯೋಗದ ನಿರ್ದೇಶನಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದರು.ಮುಂಬರುವ ಲೋಕಸಭೆ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಯಲು ನಿಗದಿಪಡಿಸಿರುವ ವೆಚ್ಚದಂತೆ ಅಭ್ಯರ್ಥಿಗಳು ಹಣ ವೆಚ್ಚ ಮಾಡುತ್ತಿರುವ ಬಗ್ಗೆ ತೀವ್ರ ನಿಗಾ ಇಡಬೇಕು ಎಂದ ಅವರು, ಚುನಾವಣೆ ಕರ್ತವ್ಯವನ್ನು ನಿಷ್ಪಕ್ಷ ಹಾಗೂ ನ್ಯಾಯ ಸಮ್ಮತವಾಗಿ ನಡೆಸುವ ಹಿನ್ನೆಲೆಯಲ್ಲಿ ನಿಯೋಜನೆಗೊಂಡ ಎಲ್ಲ ತಂಡಗಳೂ ಹೆಚ್ಚು ಗಮನ ವಹಿಸಬೇಕು. ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಪ್ರತಿದಿನ ಸಲ್ಲಿಸಬೇಕಾದ ವರದಿಗಳನ್ನು ಕಳುಹಿಸಬೇಕು ಎಂದು ತಿಳಿಸಿದರು.
ಚುನಾವಣೆ ಘೋಷಣೆಯಾಗಿ ಮಾದರಿ ನೀತಿ ಸಂಹಿತೆ ಜಾರಿಯಾದರೆ, ಎಂಸಿಸಿ ತಂಡಗಳು ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಎಚ್ಚರ ವಹಿಸಬೇಕು. ಸಹಾಯಕ ವೆಚ್ಚ ವೀಕ್ಷಕರು, ಫ್ಲೆಂಯಿಂಗ್ ಸ್ಕ್ವಾಡ್ ಗಳು, ವೀಡಿಯೋ ಸರ್ವೆಲನ್ಸ್, ವೀಡಿಯೋ ವಿವ್ಹಿಂಗ್ ತಂಡಗಳು, ಸ್ಟ್ಯಾಂಟಿಸ್ಟಿಲ್ ಸರ್ವೆಲನ್ಸ್ ತಂಡಗಳು ಇನ್ನೂ ಜಾಗೃತರಾಗಿ ಕಾರ್ಯನಿರ್ವಹಿಸಬೇಕು. ಒಟ್ಟಾರೆ ಮುಕ್ತ, ನ್ಯಾಯಸಮ್ಮತ ಚುನಾವಣೆ ನಡೆಸಲು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯನ್ವಯ ತಮ್ಮ ತಮ್ಮ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕಿದೆ. ಸಹಾಯಕ ಚುನಾವಣಾಧಿಕಾರಿಗಳು ತಮ್ಮ ವ್ಯಾಪ್ತಿಗೆ ಬರುವ ತಂಡಗಳ ಅಧಿಕಾರಿಗಳಿಗೆ ಸೂಕ್ತ ತರಬೇತಿ ಮತ್ತು ಮಾರ್ಗದರ್ಶನ ನೀಡಬೇಕು. ಈ ಹಿನ್ನೆಲೆಯಲ್ಲಿ ಅಭ್ಯರ್ಥಿ ಹಾಗೂ ರಾಜಕೀಯ ಪಕ್ಷಗಳಿಗೆ ನಿಗದಿಯಾಗುವ ಚುನಾವಣಾ ವೆಚ್ಚದ ಕುರಿತು ಸರಿಯಾದ ಲೆಕ್ಕಪತ್ರಗಳು ಇರಬೇಕು. ಈ ಸಂಬಂಧ ಯಾವುದೇ ಗೊಂದಲಕ್ಕೆ ಒಳಗಾಗದೇ ಎಲ್ಲ ದಾಖಲೆಗಳನ್ನು ಸರಿಯಾಗಿ ನಿರ್ವಹಿಸಬೇಕು ಎಂದು ಹೇಳಿದರು.
ಚುನಾವಣೆ ಘೋಷಣೆಯಾದ ತಕ್ಷಣ ಜಿಲ್ಲೆಯಲ್ಲಿ ರಾಜಕೀಯ ಪಕ್ಷಗಳ ಬ್ಯಾನರ್, ಫ್ಲೆಕ್ಸ್ ಹಾಗೂ ವಿವಿಧ ಇಲಾಖೆಗಳ ವೆಬ್‌ಸೈಟ್‌ಗಳನ್ನು ಪಟ್ಟಿ ಮಾಡಿಕೊಂಡು ವೆಬ್‌ಸೈಟ್‌ಗಳಲ್ಲಿರುವ ಸಚಿವರು ಹಾಗೂ ಜನಪ್ರತಿನಿಧಿಗಳ ಭಾವಚಿತ್ರ ತೆರವುಗೊಳಿಸುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.