ಆತ್ಮಹತ್ಯೆ ತಡೆಯಲು ಮಾನಸಿಕವಾಗಿ ಸದೃಢರಾಗಲಿ: ದಿವ್ಯಶ್ರೀ

| Published : Sep 19 2025, 01:01 AM IST

ಆತ್ಮಹತ್ಯೆ ತಡೆಯಲು ಮಾನಸಿಕವಾಗಿ ಸದೃಢರಾಗಲಿ: ದಿವ್ಯಶ್ರೀ
Share this Article
  • FB
  • TW
  • Linkdin
  • Email

ಸಾರಾಂಶ

ಕಾರವಾರದ ದಿವೇಕರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ 2025ನ್ನು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಉದ್ಘಾಟಿಸಿದರು.

ಕಾರವಾರ: ಆತ್ಮಹತ್ಯೆ ತಡೆಯಲು ಮಾನಸಿಕವಾಗಿ ಸದೃಢರಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಹೇಳಿದರು.

ಇಲ್ಲಿಯ ದಿವೇಕರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ 2025ನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹೆಚ್ಚಿನ ಒತ್ತಡ, ಮಾದಕ ವಸ್ತುಗಳ ಅತಿಯಾದ ಬಳಕೆ, ಹೆಚ್ಚಿನ ನಿರೀಕ್ಷೆ, ಪ್ರೀತಿ-ಪ್ರೇಮದ ಅಗಲಿಕೆ, ತಮಗಿರುವ ಕೆಲವು ಸಮಸ್ಯೆಗಳಿಗೆ ಪರಿಹಾರ ಇಲ್ಲ ಎಂದು ಭಾವಿಸಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆತ್ಮಹತ್ಯೆಗೆ ಪ್ರಯತ್ನಿಸುತ್ತಾರೆ. ಮಾನಸಿಕವಾಗಿ ಸದೃಢರಾಗಿ ಸಮಸ್ಯೆಗಳನ್ನು ಪರಿಹಾರ ಕಂಡುಕೊಳ್ಳುವ ಜತೆಗೆ ಇತರರೂ ಆತ್ಮಹತ್ಯೆ ಮಾಡಿಕೊಳ್ಳದಂತೆ ಜಾಗೃತಿ, ಸಲಹೆ ನೀಡಿ ಆತ್ಮಹತ್ಯೆ ತಡೆದು ಸ್ವಸ್ಥ ಸಮಾಜ ನಿರ್ಮಿಸಬೇಕು ಎಂದರು.

ಆಧುನಿಕ ಯುಗದಲ್ಲಿ ಮಕ್ಕಳು, ಪೋಷಕರೊಂದಿಗಿನ ಆತ್ಮೀಯತೆಗಿಂತ ಮೊಬೈಲ್, ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ವಾಟ್ಸ್‌ಆ್ಯಪ್‌, ಇನ್‌ಸ್ಟಾಗ್ರಾಂಗಳೊಂದಿಗೆ ಹೆಚ್ಚಿನ ಆತ್ಮೀಯತೆ ಹೊಂದಿರುವುದರಿಂದ ಆತ್ಮಹತ್ಯೆಯ ಯೋಚನೆಗಳು ಬರುತ್ತವೆ. ಮಕ್ಕಳು ಜನರಲ್ಲಿ ಆತ್ಮೀಯತೆ, ವಿಶ್ವಾಸ ಬೆಳೆಸಿಕೊಳ್ಳಬೇಕು. ಅತಿಯಾದ ನಿರೀಕ್ಷೆ ಇಟ್ಟುಕೊಳ್ಳದೇ ದೈಹಿಕ ಕಾಯಿಲೆಗಳಿಗೆ ಚಿಕಿತ್ಸೆ ಪಡೆದಂತೆ ಮಾನಸಿಕ ಕಾಯಿಲೆಗಳಿಗೆ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದರು.

ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ. ಶಂಕರ ರಾವ್, ಆತ್ಮಹತ್ಯೆಯು ವಿಶ್ವದಲ್ಲಿ ಸಾಮಾಜಿಕ ಪಿಡುಗಾಗಿ ಉಳಿದುಕೊಂಡಿದೆ. ಅನೇಕ ಕಾರಣಗಳಿಂದ ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವರಿಗಿಂತ ಪ್ರಯತ್ನಿಸುವರ ಸಂಖ್ಯೆ ಹೆಚ್ಚಿಗಿದೆ. ಅದರಲ್ಲೂ 14ರಿಂದ 24 ವರ್ಷದ ವಯೋಮಾನದವರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ಪೋಷಕರು ಮಕ್ಕಳ ಮೇಲೆ ಹೆಚ್ಚಿನ ಜಾಗೃತಿ ವಹಿಸಬೇಕು ಎಂದರು.

ಶಿಕ್ಷಣ ಇಲಾಖೆಯ ಯೋಜನಾ ಉಪ ಸಮನ್ವಯಾಧಿಕಾರಿ ಕಲ್ಪನಾ ನಾಯ್ಕ ಮಾತನಾಡಿದರು. ಮನೋರೋಗ ತಜ್ಞ ವೈದ್ಯ ಡಾ. ಸುಹಾಸ್, ದಿವೇಕರ್ ವಾಣಿಜ್ಯ ಮಹಾವಿದ್ಯಾಲಯದ ಪ್ರಾಂಶುಪಾಲೆ ವೀಣಾ ತೊರ್ಕೆ ಆತ್ಮಹತ್ಯೆ ತಡೆಗಟ್ಟುವ ಕುರಿತು ಮಾಹಿತಿ ನೀಡಿದರು.

ಆತ್ಮಹತ್ಯೆ ತಡೆಗಟ್ಟುವ ಪೋಸ್ಟರ್ ಬಿಡುಗಡೆ ಮಾಡಲಾಯಿತು. ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಪ್ರಯುಕ್ತ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಪ್ರಶಸ್ತಿ ವಿತರಿಸಲಾಯಿತು.

ಶಾಲಾ ಶಿಕ್ಷಣ ಇಲಾಖೆಯ ಸವಿತಾ ನಾಯ್ಕ ಇದ್ದರು. ಸ್ವಾತಿ ಭಟ್ ಪ್ರಾರ್ಥಿಸಿದರು. ಉಪನ್ಯಾಸಕ ಶುಭಂ ತಳೇಕರ್ ಸ್ವಾಗತಿಸಿದರು. ಸ್ನೇಹಾ ವಂದಿಸಿದರು.