ನೆಲ, ಜಲ, ಭಾಷೆಯ ಕುರಿತು ಅಭಿಮಾನವಿರಲಿ: ಸುರೇಶ್ ಲಂಬಾಣಿ

| Published : Jul 15 2024, 01:59 AM IST

ಸಾರಾಂಶ

ಶಿಕಾರಿಪುರದ ಸರ್ಕಾರಿ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ತಾ.ಕನ್ನಡ ಸಾಹಿತ್ಯ ಪರಿಷತ್ ಆಯೋಜಿಸಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕನ್ನಡಪ್ರಭ ವಾರ್ತೆ ಶಿಕಾರಿಪುರ

ರಾಷ್ಟ್ರಾಭಿಮಾನದ ಜೊತೆ ಪ್ರಾಂತೀಯ ಅಭಿಮಾನವನ್ನು ಬೆಳೆಸಿಕೊಳ್ಳಬೇಕು ಎಂದು ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಸುರೇಶ್ ಲಂಬಾಣಿ ಸಲಹೆ ನೀಡಿದರು.

ಪಟ್ಟಣದ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗೂ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ಎಚ್.ಮೃತ್ಯುಂಜಯಪ್ಪ / ಈಶ್ವರಪ್ಪ ದತ್ತಿ, ವಿದ್ವಾನ್ ಚಂದ್ರಶೇಖರ್ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ನೆಲ, ಜಲ, ಭಾಷೆ ಬಗ್ಗೆ ಪ್ರತಿಯೊಬ್ಬರೂ ಅಭಿಮಾನ ಬೆಳೆಸಿಕೊಳ್ಳಬೇಕು. ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ ಎಂದರು.

ಕನ್ನಡ ನಾಡು ನುಡಿ ವಿಷಯ ಕುರಿತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ವಿಭಾಗ ಮುಖ್ಯಸ್ಥ ಆರ್.ಕೆ.ವಿನಯ್ ಮಾತನಾಡಿ, ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಕಾವೇರಿಯಿಂದ ಗೋದಾವರಿವರೆಗೆ ಕನ್ನಡ ಭಾಷೆ ಇತ್ತು.ಕನ್ನಡ ಸಾಹಿತ್ಯಕ್ಕೆ ಕನ್ನಡಿಗರಷ್ಟೇ ಪಾಶ್ಚಾತ್ಯರು ಕೊಡುಗೆ ನೀಡಿದ್ದಾರೆ. ಆರ್.ಎಫ್.ಕಿಟೆಲ್‌ರಂಥ ಮಹನೀಯ ಕನ್ನಡ ಭಾಷೆ ಡಿಕ್ಷ್‌ನರಿ ಬರೆದಿದ್ದಾರೆ ಎಂದು ಮಾಹಿತಿ ನೀಡಿದರು.

ಕನ್ನಡ ಉಪನ್ಯಾಸಕ ಕೋಟೋಜಿರಾವ್, ವಚನಕಾರರು ಧ್ವನಿ ಇಲ್ಲದವರಿಗೆ ಧ್ವನಿಯಾಗಿದ್ದರು. ಬದುಕಿನ ಪಾಠ ವಚನ ಸಾಹಿತ್ಯ ಕಲಿಸುತ್ತದೆ. ಶಿಕಾರಿಪುರ ತಾಲೂಕಿನಲ್ಲಿ ಜನ್ಮ ತಾಳಿದ ಅಕ್ಕಮಹಾದೇವಿ, ಅಲ್ಲಮಪ್ರಭು, ಸತ್ಯಕ್ಕ ಸೇರಿದಂತೆ ಹಲವು ವಚನಕಾರರು ವಚನ ಸಾಹಿತ್ಯಕ್ಕೆ ಕೊಡುಗೆ ನೀಡಿದ್ದಾರೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್.ಎಸ್.ರಘು ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ ಕನ್ನಡ ನಾಡು ನುಡಿ ಬೆಳವಣಿಗಾಗಿ ಶ್ರಮಿಸುತ್ತಿದೆ. ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಅಭಿರುಚಿ ಮೂಡಿಸಲು ಶಾಲಾ- ಕಾಲೇಜುಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ ಉಪನ್ಯಾಸ ಕಾರ್ಯಕ್ರಮ ಗಳನ್ನು ಆಯೋಜಿಸುತ್ತಿದ್ದು, ವಿದ್ಯಾರ್ಥಿಗಳು ಸಾಹಿತ್ಯದ ಅಭಿರುಚಿ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸರ್ಕಾರಿ ಸ್ವತಂತ್ರ ಪದವಿಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸುಭಾಷ್ ಚಂದ್ರ ಸ್ಥಾನಿಕ್, ಉಪನ್ಯಾಸಕರಾದ ಬಂಗಾರಪ್ಪ, ಸುರೇಶ್, ನಾಗರಾಜ್, ಸಿಬ್ಬಂದಿ ಸೀತಾರಾಮ್, ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಮೋಹನ್ ರಾಜ್ ಮತ್ತಿತರರು ಉಪಸ್ಥಿತರಿದ್ದರು.