ಸಾರಾಂಶ
ಲಕ್ಷ್ಮೇಶ್ವರ: ಮಳೆ ಕೊರತೆ ಹಿನ್ನೆಲೆ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಜಿಪಂ ಯೋಜನಾ ನಿರ್ದೇಶಕರು ಮತ್ತು ತಾಪಂ ಆಡಳಿತಾಧಿಕಾರಿ ಬಿ.ಜಗದೇವ ಹೇಳಿದರು.
ತಾಪಂ ಸಾಮರ್ಥ್ಯ ಸೌಧದಲ್ಲಿ ಗುರುವಾರ ನಡೆದ ಬರನಿರ್ವಹಣೆ ಸಭೆಯಲ್ಲಿ ಮಾತನಾಡಿದ ಅವರು, ಬರ ನಿರ್ವಹಣೆ ಬಗ್ಗೆ ನಿಷ್ಕಾಳಜಿ ವಹಿಸದೆ ಎಲ್ಲ ಇಲಾಖೆ ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ನಿಗದಿತ ಸಮಯದಲ್ಲಿ ನಿರ್ವಹಿಸಬೇಕೆಂದು ತಾಕೀತು ಮಾಡಿದರು.ಮೇ ಮತ್ತು ಜೂನ ತಿಂಗಳಲ್ಲಿ ನೀರಿಗೆ ಸಮಸ್ಯೆ ಎದುರಾಗದಂತೆ ಪೂರ್ವ ನಿಯೋಜಿತ ರೂಪುರೇಷೆ ತಯಾರಿಸುವಂತೆ ಸೂಚನೆ ನೀಡಲಾಗಿದೆ. ಬಾಡಿಗೆ ಬೋರ್ ವೆಲ್ ಮೂಲಕ ನೀರು ಒದಗಿಸಲು ಬೋರ್‌ವೆಲ್ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಳ್ಳಲು ತಿಳಿಸಿದರು. ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು. ಶುದ್ಧ ಕುಡಿಯುವ ನೀರಿನ ಘಟಕ ಚಾಲನೆಯಲ್ಲಿರುವಂತೆ ನೋಡಿಕೊಳ್ಳಲು ಸೂಚಿಸಿದರು.
ಮತಗಟ್ಟೆಗೆ ಮೂಲಸೌಕರ್ಯ: ಮೇ 7ರಂದು ನಡೆಯುವ ಲೋಕಸಭಾ ಚುನಾವಣಾ ಸಾರ್ವತ್ರಿಕ ಚುನಾವಣೆಗೆ ಮತದಾನ ದಿನಾಂಕ ನಿಗದಿಪಡಿಸಲಾಗಿದೆ. ಆದ್ದರಿಂದ ಮತಗಟ್ಟೆಗಳಲ್ಲಿ ನೀರಿನ ಸಂಪರ್ಕ, ವಿದ್ಯುತ್, ಶೌಚಾಲಯ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಒದಗಿಸುವಂತೆ ತಿಳಿಸಿದರು.ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮರ ಮಾತನಾಡಿ, ಮುಂದಿನ ಕೆಲ ದಿನಗಳಲ್ಲಿ ಕುಡಿಯುವ ನೀರಿನ ತೊಂದರೆ ಉಂಟಾಗುವ ಸಾಧ್ಯತೆ ಹೆಚ್ಚಿದೆ. ಎಲ್ಲ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಖಾಸಗಿ ಬೊರ್‌ವೆಲ್ ಮಾಲಿಕರೊಂದಿಗೆ ಸಭೆ ಮಾಡಿ ಒಪ್ಪಂದ ಪತ್ರ ಮಾಡಿಕೊಳ್ಳಬೇಕು. ಮುಂದಿನ ಸಭೆಗೆ ಆಗಮಿಸುವಾಗ ಅದರ ಪ್ರತಿ ತರಬೇಕು ಎಂದು ಸೂಚಿಸಿದರು.
ತಹಸೀಲ್ದಾರ್ ವಾಸುದೇವ ಸ್ವಾಮಿ ಮಾತನಾಡಿ, ಮಳೆ,ಗಾಳಿ,ಗುಡುಗು,ಸಿಡಿಲು ಹಾಗೂ ಪ್ರಕೃತಿ ವಿಕೋಪದಿಂದ ಉಂಟಾಗುವ ಪ್ರಾಣಹಾನಿ ತಪ್ಪಿಸಲು ಮುನ್ನೆಚ್ಚರಿಕೆಯಾಗಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವಂತೆ ತಿಳಿಸಿದರು.ಮನೆಗಳಲ್ಲಿ ಮತದಾನ ಪ್ರಕ್ರಿಯೆ ಶುಕ್ರವಾರದಿಂದ ಆರಂಭವಾಗಲಿದೆ. ಸಂಬಂಧಿಸಿದ ಸಿಬ್ಬಂದಿಗೆ ಅಗತ್ಯ ಸಹಕಾರ ನೀಡುವಂತೆ ತಿಳಿಸಿದರು.ಪುರಸಭೆ ಮುಖ್ಯಧಿಕಾರಿ ಮಹೇಶ ಹಡಪದ, ತಾಲೂಕು ವ್ಯಾಪ್ತಿಯ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಆಡಳಿತಾಧಿಕಾರಿಗಳು, ತೋಟಗಾರಿಕೆ, ಪಶುಪಾಲನೆ, ಅರಣ್ಯ ಮತ್ತು ಕುಡಿಯುವ ನೀರು ಪೂರೈಕೆ ತಾಲೂಕು ಮಟ್ಟದ ಅಧಿಕಾರಿಗಳು, ತಾಪಂ ಸಿಬ್ಬಂದಿ ಸೇರಿದಂತೆ ಇತರರಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))