ಸೊರಬ: ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಸರ್ಕಾರವು ಸಾಕಷ್ಟು ಸೌಲಭ್ಯಗಳನ್ನು ನೀಡುತ್ತಿದ್ದು, ವಿದ್ಯಾರ್ಥಿಗಳು ಇವುಗಳ ಸದುಪಯೋಗ ಪಡಿಸಿಕೊಳ್ಳುವ ಮೂಲಕ ಗುಣಮಟ್ಟದ ಶಿಕ್ಷಣವನ್ನು ಪಡೆಯಬೇಕು ಎಂದು ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಸುನೀಲ್‌ಗೌಡ ಕರೆ ನೀಡಿದರು.

ತಾಲೂಕಿನ ಹರೀಶಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ೨೦೨೬-೨೭ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಕ್ಕಳಿಗೆ ಉಚಿತ ಪಠ್ಯಪುಸ್ತಕಗಳನ್ನು ವಿತರಿಸಿ ಅವರು ಮಾತನಾಡಿದರು.

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣ ಅತ್ಯಂತ ಪ್ರಮುಖವಾಗಿದೆ. ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಯಾವುದೇ ರೀತಿಯ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಸರ್ಕಾರ ಉಚಿತ ಪುಸ್ತಕ, ಸಮವಸ್ತ್ರ ಸೇರಿದಂತೆ ಹತ್ತು ಹಲವು ಸೌಲಭ್ಯಗಳನ್ನು ಒದಗಿಸುತ್ತಿದೆ. ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸಬೇಕು ಮತ್ತು ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ವ್ಯಾಸಂಗ ಮಾಡಿ ಉತ್ತಮ ಪ್ರಜೆಗಳಾಗಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಹೊಸದಾಗಿ ಶಾಲೆಗೆ ದಾಖಲಾದ ಮಕ್ಕಳನ್ನು ಸಿಹಿ ಹಂಚಿ ಬರಮಾಡಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕ ಶಿವಕುಮಾರ್, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಗಣೇಶ್ ಆಚಾರ್, ಉಪಾಧ್ಯಕ್ಷೆ ಮೀನಾಕ್ಷಿ ಹೆಗಡೆ, ಅನಂತ್ ಹೆಗಡೆ ಸೇರಿದಂತೆ ಗ್ರಾಮಸ್ಥರು ಮತ್ತು ಪೋಷಕರು ಉಪಸ್ಥಿತರಿದ್ದರು.