ಕ್ರೀಡಾ ಜ್ಯೋತಿ ಸ್ವೀಕರಿಸಿದ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ಸೋಲು- ಗೆಲುವು ಏನೇ ಇರಲಿ, ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಂಡು ಸಂಭ್ರಮಿಸುವುದು ಮುಖ್ಯ. ಅದು ಜೀವನದಲ್ಲಿ ನೆನಪಾಗಿ ಉಳಿಯುತ್ತದೆ. ಇಂದಿಲ್ಲದಿದ್ದರೆ ನಾಳೆ ಗೆಲ್ಲಬಹುದು. ಆ ರೀತಿಯ ಕ್ರೀಡಾ ಮನೋಭಾವನೆ ಇಂತಹ ಕ್ರೀಡಾಕೂಟಗಳು ಬೆಳೆಸುತ್ತವೆ ಎಂದು ಹೇಳಿದರು.
ಕನ್ನಡಪ್ರಭ ವಾರ್ತೆ ರಾಮನಗರ
ಕ್ರೀಡೆಯಲ್ಲಿ ಸಾಧನೆ ಮಾಡಿದವರು ಜೀವನದಲ್ಲಿಯೂ ಸವಾಲುಗಳನ್ನು ಧೈರ್ಯದಿಂದ ಎದುರಿಸುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳುತ್ತಾರೆ. ಆದ್ದರಿಂದ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಯಾದ ಕ್ರೀಡೆಗೂ ಹೆಚ್ಚಿನ ಒತ್ತು ನೀಡಬೇಕು ಎಂದು ಶಾಸಕ ಇಕ್ಬಾಲ್ ಹುಸೇನ್ ಕಿವಿಮಾತು ಹೇಳಿದರು.ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಯೂನಿವರ್ಸಲ್ ಪದವಿ ಪೂರ್ವ ಕಾಲೇಜು ಹಾಗೂ ರೋಟರಿ ಸಿಲ್ಕ್ ಸಿಟಿ ವತಿಯಿಂದ ಆಯೋಜಿಸಿದ್ದ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿ /ವಿದ್ಯಾರ್ಥಿನಿಯರ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ವಿದ್ಯಾರ್ಥಿ ಜೀವನ ಮಹತ್ತರವಾದ ಘಟ್ಟ. ಈ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ವಿದ್ಯಾರ್ಥಿಗಳಿಗೆ ಅಟ ಮತ್ತು ಪಾಠ ಮನುಷ್ಯನ ಎರಡು ಕಣ್ಣುಗಳಿದ್ದಂತೆ. ಜೀವನಕ್ಕೆ ಶಿಕ್ಷಣ ಅವಶ್ಯ, ಆರೋಗ್ಯಕ್ಕೆ ಸದೃಢವಾದ ದೇಹ ಅವಶ್ಯಕ. ಆದ್ದರಿಂದ ವಿದ್ಯಾರ್ಥಿಗಳು ಮೊಬೈಲ್ ಗಳತ್ತ ಆಕರ್ಷಿತರಾಗದೆ ಕ್ರೀಡೆಗಳಲ್ಲಿ ಸಕ್ರಿಯರಾಗಬೇಕು ಎಂದು ಹೇಳಿದರು.ವಿದ್ಯಾರ್ಥಿಗಳು ಸದೃಢ ಮನಸ್ಸಿನ ಜೊತೆಗೆ ಸದೃಢ ದೇಹವನ್ನು ಹೊಂದಬೇಕಾದರೆ ನಿಯಮಿತ ರೂಪದಲ್ಲಿ ವ್ಯಾಯಾಮ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ಹವ್ಯಾಸವಾಗಿ ರೂಢಿಸಿಕೊಳ್ಳಬೇಕು. ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು.
ಕ್ರೀಡೆಯಿಂದ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ದೃಢತೆ, ಶಿಸ್ತು, ಆತ್ಮವಿಶ್ವಾಸ ಹಾಗೂ ನಾಯಕತ್ವದ ಗುಣಗಳು ಬೆಳೆಯುತ್ತವೆ. ಗೆಲುವು - ಸೋಲುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದರು.ವಿದ್ಯಾರ್ಥಿ ಜೀವನದಲ್ಲಿ ಜಾತಿ, ಧರ್ಮ ಇಲ್ಲ. ಎಲ್ಲರೂ ಒಂದೇ ತಾಯಿಯ ಮಕ್ಕಳು. ಆ ಮುಗ್ದ ಮನಸ್ಸುಗಳಲ್ಲಿ ವಿಷ ಬೀಜ ಬಿತ್ತುವ ಕೆಲಸವನ್ನು ಯಾರೂ ಮಾಡಬಾರದು. ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಬೆಳೆಸಲು ಕ್ರೀಡಾಕೂಟಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯೂ ಸೋಲಿಗೆ ಹೆದರದೆ ಉತ್ತಮ ಪ್ರದರ್ಶನ ನೀಡುವ ಗುರಿಯೊಂದಿಗೆ ಸ್ಪರ್ಧಿಸಬೇಕು ಎಂದು ಇಕ್ಬಾಲ್ ಹುಸೇನ್ ಹೇಳಿದರು.
ತೀರ್ಪಿನ ಗೌರವ ಕ್ರೀಡೆಯ ನಿಜವಾದ ಮೌಲ್ಯ:ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ (ಶಶಿ) ಮಾತನಾಡಿ, ಕ್ರೀಡಾಕೂಟದಲ್ಲಿ ನಿರ್ಣಾಯಕರ ತೀರ್ಪು ನ್ಯಾಯಯುತವಾಗಿರುವುದು ಹಾಗೂ ಆ ತೀರ್ಪನ್ನು ಆಟಗಾರರು ಗೌರವಿಸುವುದು ಕ್ರೀಡೆಯ ನಿಜವಾದ ಮೌಲ್ಯವಾಗಿದೆ. ಕ್ರೀಡೆಗಳಲ್ಲಿ ಸೋಲು - ಗೆಲುವು ಸಾಮಾನ್ಯ. ಸೋಲಿನಿಂದ ನಿರಾಶರಾಗದೆ ಅದನ್ನು ಯಶಸ್ಸಿನ ಮೆಟ್ಟಿಲನ್ನಾಗಿ ಮಾಡಿಕೊಂಡು ಮುಂದೆ ಸಾಗಬೇಕು ಎಂದು ಸಲಹೆ ನೀಡಿದರು.
ಆರೋಗ್ಯಕರ ಜೀವನಕ್ಕೆ ಕ್ರೀಡೆಗಳು ಸಹಕಾರಿ ಆಗಿರುವುದರಿಂದ ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಸೋಲು ಗೆಲುವಿಗಿಂತ ಕ್ರೀಡಾ ಮನೋಭಾವಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಜೀವನದಲ್ಲಿ ಸೋಲು - ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಕ್ರೀಡಾ ಸ್ಫೂರ್ತಿಯ ಗುಣವನ್ನು ಕ್ರೀಡೆಗಳು ಕಲಿಸುತ್ತವೆ ಎಂದು ತಿಳಿಸಿದರು.ಕ್ರೀಡಾ ಜ್ಯೋತಿ ಸ್ವೀಕರಿಸಿದ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ಸೋಲು- ಗೆಲುವು ಏನೇ ಇರಲಿ, ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಂಡು ಸಂಭ್ರಮಿಸುವುದು ಮುಖ್ಯ. ಅದು ಜೀವನದಲ್ಲಿ ನೆನಪಾಗಿ ಉಳಿಯುತ್ತದೆ. ಇಂದಿಲ್ಲದಿದ್ದರೆ ನಾಳೆ ಗೆಲ್ಲಬಹುದು. ಆ ರೀತಿಯ ಕ್ರೀಡಾ ಮನೋಭಾವನೆ ಇಂತಹ ಕ್ರೀಡಾಕೂಟಗಳು ಬೆಳೆಸುತ್ತವೆ ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಜಿಲ್ಲಾಧ್ಯಕ್ಷ ಕೆ. ರಾಜು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕ ಎಂ.ಮರಿಸ್ವಾಮಿ, ಪಟೇಲ್ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷ ಎ.ಜೆ.ಸುರೇಶ್ , ಪ್ರಾಂಶುಪಾಲರ ಸಂಘದ ಜಿಲ್ಲಾಧ್ಯಕ್ಷ ಜಿ.ಶಿವಣ್ಣ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಸತೀಶ್ ಮತ್ತಿತರರು ಉಪಸ್ಥಿತರಿದ್ದರು.