ಜನರಿಗೆ ನಂಬಿಕೆ ಬರುವಂತೆ ನಡೆದುಕೊಳ್ಳಿ: ಡೀಸಿ

| Published : Jul 06 2024, 12:53 AM IST

ಸಾರಾಂಶ

ನಮ್ಮ ಹಂತದಲ್ಲಿ ಬಗೆಹರಿಯುವ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ಕಲ್ಪಿಸಲಾಗುವುದು. ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಹಸ್ತಕ್ಷೇಪ ಮಾಡಲು ಬರಲ್ಲ ಎಂದು ಜೇವರ್ಗಿ, ಯಡ್ರಾಮಿ ಜನಸ್ಪಂದನಾ ಕಾರ‍್ಯಕ್ರಮದಲ್ಲಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಫೌಜಿಯಾ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಜೇವರ್ಗಿ

ನಮ್ಮ ಕೆಲಸದ ಮೇಲೆ ಜನರಿಗೆ ನಂಬಿಕೆ ಬರುವಂತೆ ನಾವು ನಡೆದುಕೊಳ್ಳಬೇಕು. ಆಗ ನಮ್ಮ ಅಧಿಕಾರಿಗಳ ಮೇಲೆ ಸರ್ಕಾರದ ಮೇಲೆ ಜನರಿಗೆ ನಂಬಿಕೆ ಬರುತ್ತದೆ. ಆ ನಿಟ್ಟಿನಲ್ಲಿ ನಾವೆಲ್ಲರು ಸರಿಯಾಗಿ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಫೌಜಿಯಾ ತರನ್ನುಮ್ ಅಧಿಕಾರಿಗಳಿಗೆ ಹೇಳಿದರು.

ಪಟ್ಟಣದ ಮಿನಿ ವಿಧಾನಸೌಧದ ತಹಸೀಲ್ದಾರ್‌ ಕಚೇರಿ ಸಭಾಗಂಣದಲ್ಲಿ ಶುಕ್ರವಾರ ತಾಲೂಕು ಆಡಳಿತದಿಂದ ಆಯೋಜಿಸಿದ್ದ ಜೇವರ್ಗಿ ಹಾಗೂ ಯಡ್ರಾಮಿ ತಾಲೂಕು ಮಟ್ಟದ ಜನಸ್ಪಂದನ ಕಾರ‍್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು.

ನಮ್ಮ ಹಂತದಲ್ಲಿ ಬಗೆಹರಿಯುವ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ಕಲ್ಪಿಸಲಾಗುವುದು. ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಹಸ್ತಕ್ಷೇಪ ಮಾಡಲು ಬರಲ್ಲ. ಸರ್ಕಾರ ಹಂತದಲ್ಲಿ ಬಗೆ ಹರಿಯುವ ಸಮಸ್ಯೆಗಳಿಗೆ ಸರ್ಕಾರಕ್ಕೆ ಪತ್ರ ಬರೆದು ಗಮನಕ್ಕೆ ತರಲಾಗುವುದು. ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ನಿಗದಿತ ಅವಧಿಯಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ತಲುಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ತಾಲೂಕಿನಲ್ಲಿರುವ ಶಾಲಾ ಕೋಣೆಗಳ ಸ್ಥಿತಿಗತಿ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಗಮನ ಹರಿಸಬೇಕು. ಶಾಲಾ ಕೋಣೆಗಳ ಕೊರತೆ ಇದ್ದರೆ ಕೂಡಲೇ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ವರದಿ ಸಲ್ಲಿಸಿ ಕೆಕೆಆರ್‌ಡಿಬಿಯಿಂದ ಅನುದಾನ ಬಿಡುಗಡೆ ಮಾಡಿಸಲಾಗುವುದು. ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಕರ್ತವ್ಯ ನಿರ್ವಹಿಸಬೇಕು ಎಂದರು.

ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿ: ಜೇವರ್ಗಿ ಮತ್ತು ಯಡ್ರಾಮಿ ತಾಲೂಕಿನ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಆ ನಿಟ್ಟಿನಲ್ಲಿ ಶಿಕ್ಷಕರ ಪಾತ್ರ ಮಹತ್ತರವಾಗಿದೆ. ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೀರಣ್ಣ ಬೊಮ್ಮನಳ್ಳಿ ಅವರಿಗೆ ಜಿಲ್ಲಾಧಿಕಾರಿಗಳು ತಾಕೀತು ಮಾಡಿದರು.

ತಾಲೂಕ ಮಟ್ಟದ ಅಧಿಕಾರಿಗಳು ಸರಿಯಾಗಿ ಕೆಲಸದ ಸಮಯಕ್ಕೆ ಕಚೇರಿಗೆ ಆಗಮಿಸಿ ಜನರಿಗೆ ಉತ್ತಮ ಸೇವೆ ಒದಗಿಸಬೇಕು. ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ಜನರಿಗೆ ಕಚೇರಿಯಲ್ಲಿ ಸಿಗುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ತಾಲೂಕಿನಲ್ಲಿ ಶಿಕ್ಷಕರು ಸರಿಯಾಗಿ ಕೆಲಸ ಮಾಡದೆ ಇರುವ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದ ಸಾರ್ವಜನಿಕರ ಮನವಿಗೆ ಸ್ಪಂದಿಸಿ ಬಿಇಒಗೆ ನಾಳೆಯಿಂದ ಎಲ್ಲಾ ಶಿಕ್ಷಕರು ಸರಿಯಾಗಿ ಕೆಲಸ ಮಾಡಬೇಕು. ಕೆಲಸ ಮಾಡದೆ ಇರುವ ಶಿಕ್ಷಕರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಿಇಒಗೆ ಜಿಲ್ಲಾಧಿಕಾರಿ ಆದೇಶಿಸಿದರು.

ಡೆಂಘೀ ತಡೆಗಟ್ಟುವ ನಿಟ್ಟಿನಲ್ಲಿ ಪುರಸಭೆ ಮುಖ್ಯಾಧಿಕಾರಿ ಶಂಭುಲಿಂಗ ದೇಸಾಯಿ ಹಾಗೂ ತಾಲೂಕು ಆರೋಗ್ಯಾಧಿಕಾರಿ ಡಾ. ಸಿದ್ದು ಪಾಟೀಲಗೆ ಮುಂಜಾಗೃತೆ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಆಶಪ್ಪ, ತಹಸೀಲ್ದಾರ್‌ ಮಲ್ಲಣ್ಣ ಯಲಗೋಡ, ಯಡ್ರಾಮಿ ತಹಸೀಲ್ದಾರ ಶಶಿಕಲಾ ಪಾದಗಟ್ಟಿ, ಕೃಷಿ ಇಲಾಖೆಯ ಉಪ ನಿದೇರ್ಶಕ ಸೋಮಶೇಖರ ಬಿರೆದಾರ ಇದ್ದರು.

ಜನ ಸ್ಪಂದನ ಕಾರ್ಯಕ್ರಮದಲ್ಲಿ 110 ಅರ್ಜಿಗಳು ಬಂದಿದ್ದು 15 ಅರ್ಜಿಗಳನ್ನು ಸ್ಥಳದಲ್ಲಿಯೇ ಇತ್ಯರ್ಥಪಡಿಸಲಾಗಿದೆ ಎಂದು ತಹಸೀಲ್ದಾರ್ ಮಲ್ಲಣ್ಣ ಯಲಗೋಡ ತಿಳಿಸಿದ್ದಾರೆ.