ಡಿ.10ಕ್ಕೆ ಅಂಗನವಾಡಿ ಕಾರ್ಯಕರ್ತೆಯರಿಂದ ಬೆಳಗಾವಿ ಚಲೋ

| Published : Nov 24 2024, 01:45 AM IST

ಡಿ.10ಕ್ಕೆ ಅಂಗನವಾಡಿ ಕಾರ್ಯಕರ್ತೆಯರಿಂದ ಬೆಳಗಾವಿ ಚಲೋ
Share this Article
  • FB
  • TW
  • Linkdin
  • Email

ಸಾರಾಂಶ

ಡಿ. 10ರಂದು ಬೆಳಗಾವಿಯಲ್ಲಿ ನಡೆಯುವ ಅವಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿಮುಟ್ಟಿಸಲು ಬೆಳಗಾವಿ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದೆ.

ಕನ್ನಡಪ್ರಭ ವಾರ್ತೆ ಚಳ್ಳಕೆರೆ

ಕಳೆದ ಹಲವಾರು ವರ್ಷಗಳಿಂದ ರಾಜ್ಯದ ಅಂಗನವಾಡಿ, ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವೇತನವೂ ಸೇರಿದಂತೆ ಹಲವಾರು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಡಿ. 10ರಂದು ಬೆಳಗಾವಿಯಲ್ಲಿ ನಡೆಯುವ ಅವಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿಮುಟ್ಟಿಸಲು ಬೆಳಗಾವಿ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ರಾಜ್ಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಎಂ.ಜಯಮ್ಮ ತಿಳಿಸಿದರು.

ಅವರು ಶನಿವಾರ ನಗರದ ಕಂಬಳಿ ಮಾರುಕಟ್ಟೆ ಆವರಣದಲ್ಲಿ ಎಐಟಿಯುಸಿ ಸಂಘಟನೆ ಆಯೋಜಿಸಿದ್ದ ಬೆಳಗಾವಿ ಚಲೋ ಕಾರ್ಯಕ್ರಮದ ಸಮಾಲೋಚನಾ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ದಕ್ಷತೆಯಿಂದ ಕಾರ್ಯ ನಿರ್ವಹಿಸುತ್ತಿದ್ಧಾರೆ. ಪೌಷ್ಟಿಕಾಂಶದ ಆಹಾರದಿಂದ ಹಿಡಿದು ಗ್ರಾಮೀಣ ಭಾಗದ ರೋಗಿಗಳ ಬಗ್ಗೆ ಹೆಚ್ಚು ಜಾಗೃತಿ ವಹಿಸುತ್ತಾ ಬಂದಿದ್ದಾರೆ. ಕೆಲವೊಂದು ಸಂದರ್ಭದಲ್ಲಿ ಸಲಹೆ ಸೂಚನೆ ನೀಡುತ್ತಾರೆ. ಸರ್ಕಾರದ ಜಾಗೃತೆ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆ. ಆದ್ದರಿಂದ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸೇವೆಯನ್ನು ಖಾಯಂಗೊಳಿಸಬೇಕು, ಡಿ.10ರ ಬೆಳಗಾವಿ ಚಲೋ ಕಾರ್ಯಕ್ರಮ ಯಶಸ್ವಿಗೆ ಎಲ್ಲರೂ ಕೈಜೋಡಿಸಬೇಕೆಂದರು.

ಜಿಲ್ಲಾಧ್ಯಕ್ಷೆ ಜಯಮ್ಮ ಮಾತನಾಡಿ, ನಿರಂತರ ಹೋರಾಟದಿಂದ ಮಾತ್ರ ಸರ್ಕಾರದಿಂದ ಸೌಲಭ್ಯ ಪಡೆಯಲು ಸಾಧ್ಯ. ಇತ್ತೀಚಿನ ದಿನಗಳಲ್ಲಿ ಸರ್ಕಾರ ನಿಯಮಾವಳಿಗಳಲ್ಲಿ ಪಾರದರ್ಶಕತೆಯನ್ನು ತಂದಿದೆ. ಯಾರೂ ಸಹ ಹೆದರುವ ಅಗತ್ಯವಿಲ್ಲ. ನಮ್ಮ ಪಾಲಿನ ಕೆಲಸವನ್ನು ನಾವು ಅಚ್ಚುಕಟ್ಟಾಗಿ ಮಾಡಿದರೆ ನಮ್ಮ ಮೇಲೆ ಯಾವುದೇ ಆರೋಪ ಬರುವುದಿಲ್ಲ. ದಕ್ಷತೆಯಿಂದ ಕಾರ್ಯನಿರ್ವಹಿಸಿ ಸಂಘಟನೆಯ ಕೆಲಸ ಕಾರ್ಯಗಳಲ್ಲಿ ಸಹಕರಿಸಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಫೆಡರೇಷನ್ ರಾಜ್ಯ ಸಂಚಾಲಕ ಸಿ.ವೈ. ಶಿವರುದ್ರಪ್ಪ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಬೇಡಿಕೆಗಳನ್ನು ನಿರ್ಲಕ್ಷಿಸುವ ಮೂಲಕ ಆತಂಕ ಉಂಟು ಮಾಡಿದ್ದಾರೆ. ಕೇವಲ ಕಡಿಮೆ ಗೌರವ ಧನದಲ್ಲಿ ಕಾರ್ಯನಿರ್ವಹಿಸುವ ಅನಿವಾರ್ಯತೆ ಉಂಟಾಗಿದೆ. ಪ್ರತಿಯೊಂದು ಹಂತದಲ್ಲೂ ಇವರ ಸಹಾಯ, ಸಹಕಾರ ಸರ್ಕಾರಕ್ಕೆ ಅಗತ್ಯವಾಗಿದೆ. ವಿಶೇಷವಾಗಿ ಕೊರೋನಾ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಜನರ ಆರೋಗ್ಯ ಸುಧಾರಣೆಗಾಗಿ ತಮ್ಮ ಆರೋಗ್ಯವನ್ನು ಲೆಕ್ಕಸದೆ ಮುನ್ನುಗ್ಗಿದ್ದಾರೆ. ಆದರೂ ಸಹ ಸರ್ಕಾರ ಬೇಡಿಕೆಗಳ ಈಡೇರಿಕೆಗೆ ಮೀನಾಮೇಷ ಏಳಿಸುತ್ತಿದೆ. ಬೆಳಗಾವಿ ಚಲೋ ಕಾರ್ಯಕ್ರಮ ಯಶಸ್ವಿಗೆ ಎಲ್ಲರೂ ಸಂಕಲ್ಪ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಫೆಡರೇಷನ್ ಜಿಲ್ಲಾ ಸಂಚಾಲಕ ದೊಡ್ಡ ಉಳ್ಳಾರ್ತಿ ಕರಿಯಣ್ಣ, ಜಾಫರ್‌ ಶರೀಪ್, ಜಿಲ್ಲಾ ಖಜಾಂಚಿ ವಿನೋದಮ್ಮ, ತಾಲೂಕು ಪದಾಧಿಕಾರಿಗಳಾದ ಆರ್.ವೇದಾವತಿ, ಪದ್ದಕ್ಕ, ಪದ್ಮಮ್ಮ, ತಿಪ್ಪೇಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.

ಪೋಟೋ೨೩ಸಿಎಲ್‌ಕೆ೩ ಚಳ್ಳಕೆರೆ ನಗರದ ಕಂಬಳಿ ಮಾರುಕಟ್ಟೆ ಆವರಣದಲ್ಲಿ ಎಐಟಿಯುಸಿ ಸಂಘಟನೆ ಆಯೋಜಿಸಿದ್ದ ಬೆಳಗಾವಿ ಚಲೋ ಕಾರ್ಯಕ್ರಮದ ಸಮಾಲೋಚನಾ ಸಭೆಯನ್ನು ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಎಂ.ಜಯಮ್ಮ ಉದ್ಘಾಟಿಸಿದರು.