ಸಾರಾಂಶ
ಕನ್ನಡಪ್ರಭ ವಾರ್ತೆ ಬೆಳಗಾವಿ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಲಿಂಗಾಯತ ಪ್ರಾಬಲ್ಯವಿರುವ ಗೋಕಾಕ ಮತ್ತು ಅರಭಾಂವಿ ಮತಕ್ಷೇತ್ರಗಳ ಲಿಂಗಾಯತ ಸಮುದಾಯದ ಮುಖಂಡರಿಗೆ ಕಾಂಗ್ರೆಸ್ ಪಕ್ಷದಿಂದ ಬೆಳಗಾವಿ ಲೋಕಸಭಾ ಟಿಕೆಟ್ ನೀಡಬೇಕೆಂದು ಕಾಂಗ್ರೆಸ್ ಮುಖಂಡ ಅಶೋಕ ಪೂಜಾರಿ ಪಕ್ಷದ ವರಿಷ್ಠರನ್ನು ಆಗ್ರಹಿಸಿದರು.ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಪ್ರಸಕ್ತ ಸನ್ನಿವೇಶದಲ್ಲಿ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯ ರಕ್ಷಣೆಗೆ ಪೂರಕವಾಗಿ ಮೌಲ್ಯಯುತ ರಾಜಕೀಯ ವ್ಯವಸ್ಥೆಯ ನಿರ್ಮಾಣಕ್ಕೆ ಸಂಕಲ್ಪ ಮಾಡಿದೆ. ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಹೆಚ್ಚಿನ ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಬೇಕಾದ ಅನಿವಾರ್ಯತೆಯಿದೆ. ಕಾಂಗ್ರೆಸ್ ಸರ್ಕಾರ ಲೋಕಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ ಎಂದರು.
ರಾಜ್ಯದ 8-10 ಸಚಿವರನ್ನು ಲೋಕಸಭಾ ಚುನಾವಣೆಗೆ ಕಣಕ್ಕಿಳಿಸುವ ಸಾಧ್ಯತೆಯಿದೆ. ಸಚಿವರಾದ ಸತೀಶ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳಕರ ಅವರನ್ನಾಗಲಿ ಇಲ್ಲವೇ ಅವರ ಕುಟುಂಬದ ಸದಸ್ಯರಿಗೆ ಸ್ಪರ್ಧಿಸಲು ಟಿಕೆಟ್ ನೀಡಿದರೆ ಸ್ವಾಗತಿಸುತ್ತೇವೆ. ಒಂದು ವೇಳೆ ಅವರ ಹೊರತಾಗಿ ಬೇರೆಯವರಿಗೆ ಟಿಕೆಟ್ ನೀಡುವ ಸಂದರ್ಭದಲ್ಲಿ ಅವಿಭಜಿತ ಗೋಕಾಕ ತಾಲೂಕಿನ ವೀರಶೈವ ಲಿಂಗಾಯತ ಸಮುದಾಯದ ಅಭ್ಯರ್ಥಿಗೆ ಪ್ರಾತಿನಿಧ್ಯ ನೀಡಬೇಕು ಎಂದು ಆಗ್ರಹಿಸಿದರು.ಗೋಕಾಕ ವಿಧಾನಸಭಾ ಕ್ಷೇತ್ರದಿಂದ ಪ್ರಥಮ ಚುನಾವಣೆಯಲ್ಲಿ ಒಂದು ಸಲ ಮಾತ್ರ ಲಿಂಗಾಯತ ಸಮುದಾಯದ ವ್ಯಕ್ತಿ ಶಾಸಕರಾಗಿರುವುದನ್ನು ಹೊರತುಪಡಿಸಿ ಇಲ್ಲಿಯವರೆಗೆ ನಿರಂತರವಾಗಿ ಪರಿಶಿಷ್ಟ ಪಂಗಡದ ವ್ಯಕ್ತಿಗಳೇ ಶಾಸಕರಾಗುತ್ತ ಬಂದಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಈ ಕ್ಷೇತ್ರ ಸುಮಾರು ವರ್ಷಗಳವರೆಗೆ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿಟ್ಟ ಕ್ಷೇತ್ರವಾಗಿತ್ತು. ಕ್ಷೇತ್ರ ಪುನರ್ ವಿಂಗಡನೆಯಾದ ನಂತರ ಕಳೆದ ನಾಲ್ಕು ಅವಧಿ ಸಾಮಾನ್ಯ ಕ್ಷೇತ್ರವಾಗಿದ್ದರೂ ಸಹ ಈ ಕ್ಷೇತ್ರದಿಂದ ಲಿಂಗಾಯತ ಸಮುದಾಯದ ಅಭ್ಯರ್ಥಿ ಆಯ್ಕೆಯಾಗದಂತಹ ರಾಜಕೀಯ ವ್ಯವಸ್ಥೆ ಇಲ್ಲಿಯದಾಗಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವರು ಬೆಳಗಾವಿ ಲೋಕಸಭಾ ಟಿಕೆಟ್ ಅನ್ನು ಲಿಂಗಾಯತ ಸಮುದಾಯಕ್ಕೆ ನೀಡುವ ಇಂಗಿತ ಪಕ್ಷದ್ದಾಗಿದೆ ಎಂದು ಈಗಾಗಲೇ ಹೇಳಿದ್ದಾರೆ. ಅದಕ್ಕೆ ಪೂರಕವಾಗಿ ಅವಿಭಜಿತ ಗೋಕಾಕ ತಾಲೂಕಿನ ಲಿಂಗಾಯತ ಸಮುದಾಯಕ್ಕೆ ಪ್ರಾತಿನಿಧ್ಯ ನೀಡುವ ಮೂಲಕ ಇಲ್ಲಿಯ ಲಿಂಗಾಯತ ಸಮುದಾಯದಲ್ಲಿ ರಾಜಕೀಯ ಮನೋಸ್ಥೈರ್ಯ ತುಂಬಬೇಕಾಗಿದೆ ಎಂದರು.ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಪುಟ್ಟು ಖಾನಾಪೂರೆ, ಶಿವಯ್ಯ ಹಿರೇಮಠ, ಬಸವರಾಜ ಸಂಗನ್ನವರ, ಮಾರುತಿ ಕಂಬಾರ, ಪ್ರವೀಣ ತುಕ್ಕಾನಟ್ಟಿ ಉಪಸ್ಥಿತರಿದ್ದರು.