ಸಾರಾಂಶ
ಕನ್ನಡಪ್ರಭ ವಾರ್ತೆ ಮಳವಳ್ಳಿಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಜಿಲ್ಲಾಡಳಿತದಿಂದ ನಡೆದ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶಗಳ ಯಶಸ್ವಿಗೆ ಸಹಕಾರ ನೀಡಿದ ಪ್ರತಿಯೊಬ್ಬರಿಗೂ ಅಭಿನಂದನೆ ಸಲ್ಲಿಸುವುದಾಗಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.
ಪಟ್ಟಣದ ತಾಲೂಕು ಪಂಚಾಯ್ತಿಯಲ್ಲಿನ ಶಾಸಕರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮಳವಳ್ಳಿಯ ಭವಿಷತ್‌ಗಾಗಿ ಹತ್ತಾರು ಬೇಡಿಕೆಗಳನ್ನಿಟ್ಟು, ಅಭಿವೃದ್ಧಿಗಾಗಿ ಹೆಚ್ಚು ಅನುದಾನ ಪಡೆಯಲು ಹಾಗೂ ಜನರ ಮುಂದೆಯೇ ಮುಖ್ಯಮಂತ್ರಿಗಳು ಹಾಗೂ ಸಂಬಂಧಿಸಿದ ಸಚಿವರು ನೀಡುತ್ತಿರುವ ಸೌಲಭ್ಯ ಪ್ರಕಟ ಮಾಡಬೇಕೆಂಬ ಉದ್ದೇಶದಿಂದಲೇ ಕಾರ್ಯಕ್ರಮದ ರೂಪರೇಷಗಳನ್ನು ಸಿದ್ಧಪಡಿಸಲಾಗಿತ್ತು ಎಂದರು.ಅದರಂತೆ ತಾಲೂಕಿಗೆ ಕೊಟ್ಟಿರುವ ಅನುದಾನವನ್ನು ಸಮಾವೇಶದಲ್ಲಿ ಸಚಿವರು ಘೋಷಣೆ ಮಾಡಿದ್ದಾರೆ. ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವುದೇ ನಮ್ಮ ಮುಖ್ಯ ಉದ್ದೇಶವಾಗಿದೆ ಎಂದರು.
ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್‌ನಿಂದ ಗ್ಯಾರಂಟಿ ಕಾರ್ಡ್‌ಗಳನ್ನು ವಿತರಣೆ ಮಾಡುತ್ತಿರುವ ಸಂದರ್ಭದಲ್ಲಿ ಇಷ್ಟ ಬಂದ ರೀತಿಯಲ್ಲಿ ಕೆಲವರು ಮಾತನಾಡುತ್ತಿದ್ದರು. ಸರ್ಕಾರ ಗ್ಯಾರಂಟಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದರ ಮೂಲಕ ನುಡಿದಂತೆ ನಡೆದ ಸರ್ಕಾರವಾಗಿದೆ ಎಂದರು.ಗ್ಯಾರಂಟಿ ಯೋಜನೆಗಳಿಗೆ ಸರ್ಕಾರದ ಹಣ ನೀಡುತ್ತಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಇತರರು ಟೀಕೆ ಮಾಡುತ್ತಿದ್ದಾರೆ. ಆದರೆ, ಕೇಂದ್ರ ಸರ್ಕಾರ 1.20 ಸಾವಿರ ಕೋಟಿ ರು. ಸಾಲದ ಹಣ ಮನ್ನಾ ಮಾಡುವುದರ ಬಗ್ಗೆ ಒಂದು ಮಾತನ್ನು ತಿಳಿಸುತ್ತಿಲ್ಲ ಎಂದು ದೂರಿದರು.
ಬಡವರ ಮನೆಗೆ, ಗ್ರಾಮೀಣ ರಸ್ತೆ ಸೇರಿದಂತೆ ಆಧುನಿಕವಾಗಿ ದೇಶವನ್ನು ಅಭಿವೃದ್ಧಿ ಪಡಿಸುವ ಯೋಜನೆ ತರದೇ ಶ್ರೀಮಂತರ ಸಾಲ ಮನ್ನಾ ಮಾಡುವ ಪಕ್ಷದವರು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು.ಜನರನ್ನು ಬಡತನ ರೇಖೆಗಿಂತ ಕೆಳಗಿರುವವನ್ನು ಮೇಲೆತ್ತುವುದು ತಪ್ಪು ಎನ್ನುವುದಾದರೇ ದೇಶದಲ್ಲಿ ಪ್ರಜಾಪ್ರಭುತ್ವದ ವ್ಯವಸ್ಥೆ ಅರ್ಥವನ್ನೇ ಕಳೆದುಕೊಳ್ಳುತ್ತದೆ ಎನ್ನುವುದನ್ನು ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಜ್ಞಾಪಿಸಿಕೊಡುತ್ತೇನೆಂದು ತಿಳಿಸಿದರು.
ಪ್ರಧಾನಿಗಳು, ಮುಖ್ಯಮಂತ್ರಿಗಳು ಸೇರಿದಂತೆ ಸಚಿವರು ಒಂದು ಪ್ರದೇಶಕ್ಕೆ ಭೇಟಿಕೊಟ್ಟ ವೇಳೆ ಆ ಭಾಗದ ಮಹಾ ಪುರುಷರನ್ನು ಗೌರವಿಸುವುದು ವಾಡಿಕೆ. ಜೊತೆಗೆ ಜಯಂತಿಗಳಲ್ಲಿ ಸಾಧಕರ ಭಾವಚಿತ್ರಗಳಿಗೆ ಗೌರವಿಸುವುದು ಸಂಪ್ರದಾಯವಾಗಿದೆ. ಆದರೆ, ಸಾಮಾಜಿಕ ಜಾಲತಾಣದಲ್ಲಿ ಕೆಲವರು ಉದ್ದೇಶ ಪೂರ್ವಕವಾಗಿಯೇ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪನೆ ಮಾಡಿಲ್ಲ ಎಂದು ಗೊಂದಲ ಸೃಷ್ಟಿಸುತ್ತಿದ್ದಾರೆ. ಬಾಬಾ ಸಾಹೇಬರಿಗೆ ಗೌರವ ಸಲ್ಲಿಸುವ ಉದ್ದೇಶದಿಂದಲೇ ಸಮಾವೇಶದಲ್ಲಿ ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು ಸೇರಿದಂತೆ ಹಲವು ಸಚಿವರು ಪುಷ್ಪರ್ಚನೆ ನರೆವೇರಿಸಿ ಗೌರವ ಸಲ್ಲಿಸಲಾಗಿದೆ ಎಂದು ಸ್ವಷ್ಟಪಡಿಸಿದರು.