5 ಗ್ಯಾರಂಟಿ ಯೋಜನೆಗಳ ಲಾಭ ಎಲ್ಲಾ ಅರ್ಹರಿಗೆ ತಲುಪಲಿ: ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮೂಡ್ಲಿಗೌಡ ತಾಕೀತು

| Published : Jan 18 2025, 12:47 AM IST

5 ಗ್ಯಾರಂಟಿ ಯೋಜನೆಗಳ ಲಾಭ ಎಲ್ಲಾ ಅರ್ಹರಿಗೆ ತಲುಪಲಿ: ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮೂಡ್ಲಿಗೌಡ ತಾಕೀತು
Share this Article
  • FB
  • TW
  • Linkdin
  • Email

ಸಾರಾಂಶ

ಗೃಹ ಜ್ಯೋತಿ ಯೋಜನೆಯಡಿ 53 ಸಾವಿರಕ್ಕೂ ಹೆಚ್ಚು ಗ್ರಾಹಕರು ನೋಂದಾಯಿಸಿಕೊಂಡು ಯೋಜನೆ ಲಾಭ ಪಡೆಯುತ್ತಿದ್ದಾರೆ. ಒಂದು ತಿಂಗಳಲ್ಲಿ 19 ಲಕ್ಷ ಯುನಿಟ್ ವಿದ್ಯುತ್ ಉಚಿತವಾಗಿ ತಾಲೂಕಿನ ಗ್ರಾಹಕರಿಗೆ ಲಭ್ಯವಾಗುತ್ತಿದೆ ಎಂದು ಸೆಸ್ಕಾಂ ನಾಗಮಂಗಲ ಉಪ ವಿಭಾಗದ ಎಇಇ ತಿಲಕ್ ಸಭೆಗೆ ಮಾಹಿತಿ ನೀಡಿದರು.

ಕನ್ನಡಪ್ರಭ ವಾರ್ತೆ ನಾಗಮಂಗಲ

ನಾಡಿನ ಎಲ್ಲ ವರ್ಗಗಳ ಬಡಜನರ ಆರ್ಥಿಕ ಪರಿಸ್ಥಿತಿ ಸುಧಾರಿಸಲು ರಾಜ್ಯ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳ ಲಾಭ ಎಲ್ಲಾ ಅರ್ಹ ಫಲಾನುಭವಿಗಳಿಗೂ ತಲುಪಿಸಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮೂಡ್ಲಿಗೌಡ ತಾಕೀತು ಮಾಡಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ಶುಕ್ರವಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಬಹುತೇಕ ಬಡ ಕುಟುಂಬಗಳಿಗೆ ಅನುಕೂಲವಾಗಿದೆ. ಈ ಯೋಜನೆ ಲಾಭ ಅರ್ಹ ಫಲಾನುಭವಿಗಳಿಗೆ ಪ್ರಾಮಾಣಿಕವಾಗಿ ತಲುಪಬೇಕು ಎಂದರು.

ಪಟ್ಟಣದ ಕೆಎಸ್‌ಆರ್‌ಟಿಸಿ ಡಿಪೋ ವ್ಯವಸ್ಥಾಪಕ ಮಹೇಶ್ ಮಾತನಾಡಿ, ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾದಾಗಿನಿಂದ ನಾಗಮಂಗಲ ಘಟಕದಿಂದ ಸಂಚರಿಸುವ ಸಾರಿಗೆ ಬಸ್‌ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣದಲ್ಲಿ ಉತ್ತಮ ಅಭಿಪ್ರಾಯ ವ್ಯಕ್ತವಾಗುತ್ತಿದೆ ಎಂದು ತಿಳಿಸಿದರು.

ಪ್ರಯಾಣಿಕರ ಹಿತದೃಷ್ಟಿಯಿಂದ ಉತ್ತಮ ಸೇವೆ ನೀಡಲಾಗುತ್ತಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ನಾಗಮಂಗಲ ಘಟಕಕ್ಕೆ ಹಲವು ಹೊಸ ಬಸ್‌ಗಳನ್ನು ಕೊಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಹೊಸ ಬಸ್‌ಗಳು ಬರಲಿವೆ ಎಂದು ಸಭೆಗೆ ಮಾಹಿತಿ ನೀಡಿದರು.

ಗೃಹ ಜ್ಯೋತಿ ಯೋಜನೆಯಡಿ 53 ಸಾವಿರಕ್ಕೂ ಹೆಚ್ಚು ಗ್ರಾಹಕರು ನೋಂದಾಯಿಸಿಕೊಂಡು ಯೋಜನೆ ಲಾಭ ಪಡೆಯುತ್ತಿದ್ದಾರೆ. ಒಂದು ತಿಂಗಳಲ್ಲಿ 19 ಲಕ್ಷ ಯುನಿಟ್ ವಿದ್ಯುತ್ ಉಚಿತವಾಗಿ ತಾಲೂಕಿನ ಗ್ರಾಹಕರಿಗೆ ಲಭ್ಯವಾಗುತ್ತಿದೆ ಎಂದು ಸೆಸ್ಕಾಂ ನಾಗಮಂಗಲ ಉಪ ವಿಭಾಗದ ಎಇಇ ತಿಲಕ್ ಸಭೆಗೆ ಮಾಹಿತಿ ನೀಡಿದರು.

ಯುವನಿಧಿ ಯೋಜನೆಗೆ ತಾಲೂಕಿನಿಂದ 2024ರ ನವೆಂಬರ್ ಅಂತ್ಯಕ್ಕೆ 538 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಈ ಪೈಕಿ 449 ಮಂದಿ ಪದವಿ ಅಭ್ಯರ್ಥಿಗಳು, ಹಾಗೂ 6 ಮಂದಿ ಡಿಪ್ಲೊಮೋ ಅಭ್ಯರ್ಥಿಗಳು ಸೇರಿ ಒಟ್ಟು 455 ಮಂದಿ ಅರ್ಹ ಫಲಾನುಭವಿಗಳಿಗೆ ಒಟ್ಟು 13.56 ಲಕ್ಷ ರು. ಹಣ ಡಿಬಿಟಿ ಮೂಲಕ ಸಂದಾಯವಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದರು.

ತಾಪಂ ಇಒ ಸತೀಶ್ ಮಾತನಾಡಿದರು.

ಸಭೆಯಲ್ಲಿ ಸಮಿತಿ ಸದಸ್ಯರಾದ ನೀಲಾ ಶಿವಮೂರ್ತಿ, ಶ್ರೀಧರ್, ಬಾಲಕೃಷ್ಣ, ಪಿ.ಗೀತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಕೃಷ್ಣಮೂರ್ತಿ, ಆಹಾರ ನಿರೀಕ್ಷಕ ಅನಿಲ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.