ಸಾರಾಂಶ
ಕೊಪ್ಪಳ:
ನೈಸರ್ಗಿಕವಾಗಿ ಬೆಳೆದ ಬೆಳೆಗಳಿಗೆ ಬಹಳಷ್ಟು ಬೇಡಿಕೆಯಿದ್ದು, ಸಾವಯವ ಪದ್ಧತಿಯು ಕೃಷಿಯನ್ನು ಲಾಭದಾಯಕವಾಗಿಸಲು ರೈತರಿಗೆ ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.ಜಿಲ್ಲಾ ಪಂಚಾಯಿತಿಯಲ್ಲಿ ಶುಕ್ರವಾರ ನಡೆದ ಜಿಲ್ಲಾಮಟ್ಟದ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನದಡಿ ಸಿಆರ್‌ಪಿ ಮತ್ತು ಬಿಆರ್‌ಪಿಗಳಿಗೆ ತರಬೇತಿ ಹಾಗೂ ಕಾರ್ಯಾಗಾರ ಮತ್ತು ರೈತ-ವಿಜ್ಞಾನಿ ಚರ್ಚಾಗೋಷ್ಠಿ ಉದ್ಘಾಟಿಸಿ ಮಾತನಾಡಿದರು.
ದುಬಾರಿಯಾದ ರಸಗೊಬ್ಬರಗಳ ಬಳಕೆಯಿಂದ ಕೃಷಿ ಭೂಮಿ ಫಲವತ್ತತೆ ಕಳೆದುಕೊಳ್ಳುವ ಜತೆಗೆ ರೋಗ ಮತ್ತು ಕೀಟಬಾಧೆ ಹೆಚ್ಚಾಗಿ ಕಾಡಲಿದೆ. ಕೃಷಿಯಲ್ಲಿ ರಾಸಾಯನಿಕ ಹೆಚ್ಚಿನ ಪ್ರಮಾಣದಲ್ಲಿ ಬಳಕೆ ಮಾಡಿದ ಕೃಷಿ ಪದಾರ್ಥಗಳಿಗೆ ಹೊರ ದೇಶಗಳಲ್ಲಿ ಬೇಡಿಕೆಯಿಲ್ಲ. ರಸಾಯನಿಕ ಕೃಷಿಯಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಜತೆಗೆ ಭೂಮಿಯ ಫಲವತ್ತತೆಯೂ ಸಹ ಹಾಳಾಗುತ್ತದೆ. ಕೃಷಿಯ ಪದ್ಧತಿಯಲ್ಲಿ ರಸಾಯನಿಕ ಗೊಬ್ಬರಗಳಿಗೆ ಕಡಿವಾಣ ಹಾಕುವ ಮೂಲಕ ಸಾವಯವ ಕೃಷಿಗೆ ಹೆಚ್ಚಿನ ಅದ್ಯತೆ ನೀಡಬೇಕು. ಜಿಲ್ಲೆಯಲ್ಲಿ ರೇಷ್ಮೆ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆಗೆ ಉತ್ತೇಜನ ನೀಡುವ ಜತೆಗೆ ಜಿಲ್ಲೆಯಲ್ಲಿ ಸಮಗ್ರ ಸಾವಯವ ಕೃಷಿ ಪದ್ಧತಿ ಜಾರಿಗೆ ಸಹಕರಿಸಬೇಕು ಎಂದರು.ಮುಂಬರುವ ದಿನಗಳಲ್ಲಿ ಜಿಲ್ಲೆಯ 1.50 ಲಕ್ಷ ಹೆಕ್ಟೇರ್ ತೋಟಗಾರಿಕೆ ಪ್ರದೇಶದ ಅವೃದ್ಧಿಗಾಗಿ ಯೋಜನೆ ರೂಪಿಸಲಾಗಿದ್ದು, ಇದರಿಂದ ರೈತರ ಆದಾಯ ಹೆಚ್ಚಾಗಲಿದೆ. ತೋಟಗಾರಿಕೆ ಟೆಕ್ ಪಾರ್ಕ್ ಹಾಗೂ ರೈಸ್ ಪಾರ್ಕ್ ಸ್ಥಾಪನೆಯಿಂದಾಗಿಯೂ ಜಿಲ್ಲೆಯ ಕೃಷಿ ಮತ್ತು ತೋಟಗಾರಿಕೆ ಕ್ಷೇತ್ರಗಳಲ್ಲಿ ಹೆಚ್ಚಿನ ಅಭಿವೃದ್ಧಿಯಾಗಲಿದೆ. ಇದರೊಂದಿಗೆ ಇಲ್ಲಿನ ತೋಟಗಾರಿಕೆ ಬೆಳೆಗಳನ್ನು ಒಂದು ಬ್ರ್ಯಾಂಡ್ ಮೂಲಕ ರಫ್ತು ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.
ಜಿಪಂ ಸಿಇಒ ರಾಹುಲ್ ರತ್ನಂ ಮಾತನಾಡಿ, ಜಿಲ್ಲೆಯಲ್ಲಿ 4.60 ಲಕ್ಷ ಹೆಕ್ಟೇರ್ ಕೃಷಿ ಭೂಮಿ ಇದ್ದು 4000 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಸಾವಯವ ಪದ್ಧತಿಯಲ್ಲಿ ಕೃಷಿ ಮಾಡಲಾಗುತ್ತಿದೆ. ಈ ಕೃಷಿಗೆ ಹೆಚ್ಚಿನ ಹಣ ಬೇಕಾಗಿಲ್ಲ ಹಾಗೂ ಅತಿಯಾದ ಶ್ರಮದ ಅವಶ್ಯವಕತೆಯು ಇರುವುದಿಲ್ಲ. ರೈತರಿಗೆ ತಾಳ್ಮೆ ಒಂದಿದ್ದರೆ ಸಾಕು, ನೈಸರ್ಗಿಕ ಪದ್ಧತಿಯಲ್ಲಿ ಆರೋಗ್ಯಕರ ಬೆಳೆಗಳನ್ನು ಸುಲಭವಾಗಿ ಬೆಳೆಯಬಹುದು. ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನದಡಿ ಸಿಆರ್‌ಪಿ ಮತ್ತು ಬಿಆರ್‌ಪಿಗಳು ಸಾವಯವ ಕೃಷಿಯ ಅಳವಡಿಕೆಗೆ ರೈತರ ಮನವೊಲಿಸಿ ಜಿಲ್ಲೆಯಲ್ಲಿ ಸಾವಯವ ಕೃಷಿ ವಲಯ ಹೆಚ್ಚಿಸಲು ಕ್ರಮ ವಹಿಸಬೇಕು ಎಂದರು.ರಾಯಚೂರಿನ ಕೃಷಿ ವಿಶ್ವವಿದ್ಯಾಲಯದಿಂದ ಇತ್ತೀಚೆಗೆ ಗೌರವ ಡಾಕ್ಟರೇಟ್ ಪಡೆದ ಪ್ರಗತಿಪರ ರೈತ ಕುಷ್ಟಗಿ ತಾಲೂಕಿನ ಮದಲಗಟ್ಟಿಯ ದೇವೇಂದ್ರಪ್ಪ ಬಳೂಟಗಿ ಅವರನ್ನು ಸನ್ಮಾನಿಸಲಾಯಿತು. ಕಾರ್ಯಾಗಾರದಲ್ಲಿ 2025-26ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆವಿಮೆ ಯೋಜನೆಗೆ ಸಂಬಂಧಿಸಿದ ಪೋಸ್ಟರ್ ಬಿಡುಗಡೆ ಮಾಡಲಾಯಿತು.
ಈ ವೇಳೆ ಜಂಟಿ ಕೃಷಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ, ರಾಯಚೂರು ಕೃಷಿ ವಿವಿ ಉಪನ್ಯಾಸಕರು, ವಿಜ್ಞಾನಿಗಳು, ಗಂಗಾವತಿಯ ಕೃಷಿ ವಿಜ್ಞಾನ ಕೇಂದ್ರ ಮತ್ತು ಕೊಪ್ಪಳದ ಕೃಷಿ ತಂತ್ರಜ್ಞರ ಸಂಸ್ಥೆಯ ಮುಖ್ಯಸ್ಥರು ಹಾಗೂ ವಿಜ್ಞಾನಿಗಳು, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು ಸೇರಿದಂತೆ ಇತರರು ಇದ್ದರು.;Resize=(128,128))
;Resize=(128,128))
;Resize=(128,128))