ಸಾರಾಂಶ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದ ಒಳನಾಡಿನಲ್ಲಿ ಮಳೆ ಆರಂಭವಾಗಿದೆ
ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದ ಒಳನಾಡಿನಲ್ಲಿ ಮಳೆ ಆರಂಭವಾಗಿದೆ. ಇನ್ನೂ ಮೂರು ದಿನಗಳ ಕಾಲ ರಾಜ್ಯದಲ್ಲಿ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಿಗೆ ಮುಂದಿನ 24 ಗಂಟೆಗೆ ಯೆಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಲಾಹಿದೆ. ಅದೇ ರೀತಿ ತುಮಕೂರು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಅ.17 ರಿಂದ ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ಜತೆಗೆ, ಉತ್ತರ ಒಳನಾಡಿನ ಜಿಲ್ಲೆಗಳಿಗೂ ಮಳೆ ವ್ಯಾಪಿಸಲಿದೆ. ಒಟ್ಟಾರೆ, ಅ.19ರ ವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಮಧ್ಯೆ, ರಾಜಧಾನಿ ಬೆಂಗಳೂರಿನಲ್ಲಿ ಸತತ 18 ಗಂಟೆ ಮಳೆ ಸುರಿದಿದೆ. ಇದೇ ವೇಳೆ, ರಾಜ್ಯದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಿದೆ.