ಸಾರಾಂಶ
ಮುಡಾ ಹಗರಣ ಸಂಬಂಧ ಒಂದು ದಿನ ಮೊದಲೇ ಮೊಟಕಾದ ಮುಂಗಾರು ಅಧಿವೇಶನವು ಎಂಟು ದಿನಗಳ ಕಾಲ 37 ಗಂಟೆ ನಡೆದಿದ್ದು, 12 ವಿಧೇಯಕಗಳು ಅಂಗೀಕಾರವಾಗಿವೆ.
ವಿಧಾನಸಭೆ : ಮುಡಾ ಹಗರಣ ಸಂಬಂಧ ಒಂದು ದಿನ ಮೊದಲೇ ಮೊಟಕಾದ ಮುಂಗಾರು ಅಧಿವೇಶನವು ಎಂಟು ದಿನಗಳ ಕಾಲ 37 ಗಂಟೆ ನಡೆದಿದ್ದು, 12 ವಿಧೇಯಕಗಳು ಅಂಗೀಕಾರವಾಗಿವೆ.
ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಧರಣಿ ನಡುವೆಯೇ ಎಂಟು ದಿನಗಳ ಕಾರ್ಯಕಲಾಪ ಕುರಿತು ಸಭಾಧ್ಯಕ್ಷ ಯು.ಟಿ.ಖಾದರ್ ಮಾಹಿತಿ ನೀಡಿದರು.
ಧನವಿನಿಯೋಗ ವಿಧೇಯಕ ಸೇರಿ ಒಟ್ಟು 13 ವಿಧೇಯಕಗಳನ್ನು ಮಂಡಿಸಲಾಗಿದ್ದು, 12 ವಿಧೇಯಕಗಳನ್ನ ಅಂಗೀಕರಿಸಲಾಗಿದೆ. ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕವನ್ನು ಜಂಟಿ ಪರಿಶೀಲನಾ ಸಮಿತಿಗೆ ಪರಿಶೀಲನೆಗಾಗಿ ಒಪ್ಪಿಸಲಾಯಿತು ಎಂದು ಹೇಳಿದರು.
ನಿಯಮ 60 ರಡಿಯಲ್ಲಿ ನೀಡಿದ್ದ 9 ಸೂಚನೆಗಳ ಪೈಕಿ 8ನ್ನು ನಿಯಮ 69ಕ್ಕೆ ಪರಿವರ್ತಿಸಲಾಗಿದ್ದು, 1 ಸೂಚನೆಯನ್ನು ತಿರಸ್ಕರಿಸಲಾಗಿದೆ, ಎರಡು ಸೂಚನೆಗಳನ್ನು ಚರ್ಚಿಸಲಾಗಿದೆ. ನಿಯಮ 69 ರಡಿಯಲ್ಲಿ ಒಟ್ಟು 14 ಸೂಚನೆಗಳನ್ನು ಸ್ವೀಕರಿಸಲಾಗಿದೆ. ಈ ಅವಧಿಯಲ್ಲಿ ಒಟ್ಟು 16 ಅರ್ಜಿಗಳನ್ನು ಸದನಕ್ಕೆ ಒಪ್ಪಿಸಲಾಗಿದೆ. ಒಟ್ಟು 2370 ಪ್ರಶ್ನೆಗಳನ್ನು ಸ್ವೀಕರಿಸಲಾಗಿದ್ದು, ಸದನದಲ್ಲಿ ಉತ್ತರಿಸಬೇಕಾಗಿದ್ದ 135 ಪ್ರಶ್ನೆಗಳ ಪೈಕಿ 117 ಪ್ರಶ್ನೆಗಳಿಗೆ ಉತ್ತರಿಸಲಾಗಿದೆ. ಲಿಖಿತ ಮೂಲಕ ಉತ್ತರಿಸುವ 1902 ಪ್ರಶ್ನೆಗಳ ಪೈಕಿ 1438 ಪ್ರಶ್ನೆಗಳಿಗೆ ಉತ್ತರಗಳನ್ನು ಸ್ವೀಕರಿಸಲಾಗಿದೆ ಎಂದು ಮಾಹಿತಿ ನೀಡಿದರು.
ಗಮನ ಸೆಳೆಯುವ 323 ಸೂಚನೆಗಳ ಪೈಕಿ 170 ಸೂಚನೆಗಳಿಗೆ ಉತ್ತರಗಳನ್ನು ಸ್ವೀಕರಿಸಲಾಗಿದೆ. ಶೂನ್ಯ ವೇಳೆಯಲ್ಲಿ 3 ಸೂಚನೆಗಳನ್ನು ಚರ್ಚಿಸಲಾಗಿದೆ. ರಾಜ್ಯಕ್ಕೆ ಹಂಚಿಕೆ ಮಾಡಬೇಕಾದ ಲೋಕಸಭೆ ಸ್ಥಾನಗಳು ಮತ್ತು ಪ್ರತಿ ರಾಜ್ಯದ ವಿಧಾನಸಭೆಗೆ ನಿಗದಿಪಡಿಸಬೇಕಾದ ಸ್ಥಾನಗಳ ಸಂಖ್ಯೆಯನ್ನು 1971ರ ಜನಗಣತಿಯನ್ನಾಧರಿಸಿ ನಿರ್ಧರಿಸಬೇಕೆಂದು ಒತ್ತಾಯಿಸಿ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ ಮಾಡಲಾಯಿತು ಎಂದರು.
ಅಲ್ಲದೇ, ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವ ಭಾರತದ ಪ್ರಜಾಸತ್ತಾತ್ಮಕ ಮತ್ತು ಒಕ್ಕೂಟ ವ್ಯವಸ್ಥೆಗೆ ಅಪಾಯವನ್ನುಂಟು ಮಾಡುವುದರಿಂದ ಈ ಪ್ರಸ್ತಾವವನ್ನು ಅನುಷ್ಠಾನಗೊಳಿಸಬಾರದೆಂಬ ನಿರ್ಣಯವನ್ನು ಅಂಗೀಕರಿಸಲಾಯಿತು. ನೀಟ್ ಪರೀಕ್ಷಾ ವ್ಯವಸ್ಥೆಯಲ್ಲಿ ಆಗುತ್ತಿರುವ ಅಕ್ರಮಗಳನ್ನು ಪರಿಗಣಿಸಿ ರಾಷ್ಟ್ರೀಯ ಮಟ್ಟದಲ್ಲಿ ನೀಟ್ ಪರೀಕ್ಷೆಯನ್ನು ರದ್ದುಪಡಿಸುವಂತೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಲಾಯಿತು ಎಂದು ಹೇಳಿದರು.
ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚನಾ ನಿರ್ಣಯವನ್ನು ಮಂಡಿಸಿ ಅಂಗೀಕರಿಸಲಾಗಿದೆ. 2024-25ನೇ ಸಾಲಿನ ಪೂರಕ ಅಂದಾಜುಗಳ ಮೊದಲನೇ ಕಂತನ್ನು ಮಂಡಿಸಿ ಮತಕ್ಕೆ ಹಾಕಿ ಅಂಗೀಕರಿಸಲಾಗಿದೆ. ವಿಧಾನಸಭೆಯ ವಿವಿಧ ಸ್ಥಾಯಿ ಸಮಿತಿಗಳಿಗೆ ಸದಸ್ಯರುಗಳನ್ನು ನಾಮ ನಿರ್ದೇಶನ ಮಾಡಲು ಸದನವು ಸಭಾಧ್ಯಕ್ಷರಿಗೆ ಅಧಿಕಾರ ನೀಡಿದೆ ಎಂದು ಖಾದರ್ ತಿಳಿಸಿದರು.