ಸಾರಾಂಶ
ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಮುಂದುವರೆದಿದ್ದು, ಸಾವಿನ ಸಂಖ್ಯೆ ಏರುತ್ತಲೇ ಇವೆ. ಶುಕ್ರವಾರ ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ತಲಾ ಒಬ್ಬರು ಹಾರ್ಟ್ ಅಟ್ಯಾಕ್‌ಗೆ ಮೃತಪಟ್ಟಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಮುಂದುವರೆದಿದ್ದು, ಸಾವಿನ ಸಂಖ್ಯೆ ಏರುತ್ತಲೇ ಇವೆ. ಶುಕ್ರವಾರ ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ತಲಾ ಒಬ್ಬರು ಹಾರ್ಟ್ ಅಟ್ಯಾಕ್‌ಗೆ ಮೃತಪಟ್ಟಿದ್ದಾರೆ.
ಬೆಳಗಾವಿಯ ಅನಗೋಳದ ಬಜಾರ್ ನಿವಾಸಿ ಯೋಧ ಇಬ್ರಾಹಿಂ ದೇವಲಾಪುರ (37) ಅವರು ರಜೆಗೆಂದು ಊರಿಗೆ ಬಂದಿದ್ದರು. ಶುಕ್ರವಾರ ಬಜಾರ್‌ಗೆ ತೆರಳಿದ್ದಾಗ ಏಕಾಏಕಿ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗಿವ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.
ಧಾರವಾಡ ತಾಲೂಕಿನ ಮರೇವಾಡ ಗ್ರಾಮ ಪಂಚಾಯಿತಿ ಸಿಬ್ಬಂದಿ ರವಿ ಮಲ್ನಾಡ (35) ಶುಕ್ರವಾರ ಗ್ರಾಮ ಪಂಚಾಯಿತಿಯಲ್ಲಿ ಕೆಲಸ ಮುಗಿಸಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಗದಗ ನಗರ ನಿವಾಸಿಯಾಗಿರುವ ತಾಲೂಕಿನ ಸೊರಟೂರು ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಪ್ರಭಾ ಕಲ್ಮಠ (49) ಅವರು ಶುಕ್ರವಾರ ಬೆಳಗ್ಗೆ ಕಾಲೇಜಿಗೆ ತೆರಳಲು ಸಿದ್ಧತೆ ನಡೆಸುತ್ತಿದ್ದಾಗ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಮನೆಯಲ್ಲಿ ಕುಸಿದು ಬಿದ್ದಿದ್ದು, ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಇನ್ನೂ ಹಾವೇರಿ ಜಿಲ್ಲೆ ರಾಣಿಬೆನ್ನೂರು ತಾಲೂಕಿನ ಕುಮಾರಪಟ್ಟಣ ಬಳಿಯ ಬಿರ್ಲಾ ಕಂಪನಿಯ ನೌಕರ ಚಳಗೇರಿ ಗ್ರಾಮದ ರಮೇಶ ಗೋದಮ್ಮನವರ (38) ಕರ್ತವ್ಯದ ವೇಳೆ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.