ಸಾರಾಂಶ
ಬಿಬಿಎಂಪಿಯ ವ್ಯಾಪ್ತಿಯಲ್ಲಿ ಇನ್ನೂ 52 ಇಂದಿರಾ ಕ್ಯಾಂಟೀನ್ ನಿರ್ಮಾಣ ಸಂಬಂಧ ಬಿಬಿಎಂಪಿ ಸುಮಾರು 20 ಕೋಟಿ ರು. ವೆಚ್ಚದ ಯೋಜನೆ ಸಿದ್ಧಪಡಿಸಿದೆ.
ಬೆಂಗಳೂರು : ಬಿಬಿಎಂಪಿಯ ವ್ಯಾಪ್ತಿಯಲ್ಲಿ ಇನ್ನೂ 52 ಇಂದಿರಾ ಕ್ಯಾಂಟೀನ್ ನಿರ್ಮಾಣ ಸಂಬಂಧ ಬಿಬಿಎಂಪಿ ಸುಮಾರು 20 ಕೋಟಿ ರು. ವೆಚ್ಚದ ಯೋಜನೆ ಸಿದ್ಧಪಡಿಸಿದೆ.
ನಗರದಲ್ಲಿ 2017ರಲ್ಲಿ ವಾರ್ಡ್‌ಗೆ ಒಂದರಂತೆ 198 ಇಂದಿರಾ ಕ್ಯಾಂಟೀನ್ ಆರಂಭಿಸಲು ಯೋಜನೆ ರೂಪಿಸಲಾಗಿತ್ತು. ಆದರೆ, ಸೂಕ್ತ ಜಾಗ ಸಿಗದ ಹಿನ್ನೆಲೆಯಲ್ಲಿ 174 ಸ್ಥಿರ ಹಾಗೂ 24 ಮೊಬೈಲ್ ಇಂದಿರಾ ಕ್ಯಾಂಟೀನ್ ಆರಂಭಿಸಲಾಗಿತ್ತು. ಈ ಪೈಕಿ ಸದ್ಯ ಸುಮಾರು 160 ಇಂದಿರಾ ಕ್ಯಾಂಟೀನ್ ಮಾತ್ರ ಕಾರ್ಯ ನಿರ್ವಹಿಸುತ್ತಿದ್ದು, ವಿವಿಧ ಕಾರಣದಿಂದ ಕೆಲವನ್ನು ಸ್ಥಗಿತಗೊಳಿಸಲಾಗಿದೆ.
ಬಿಬಿಎಂಪಿಯ ವಾರ್ಡ್ ಸಂಖ್ಯೆ 198 ರಿಂದ 225ಕ್ಕೆ ಹೆಚ್ಚಾದ ಹಿನ್ನೆಲೆಯಲ್ಲಿ ಹೊಸ ವಾರ್ಡ್‌ನಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡುವಂತೆ ಸರ್ಕಾರ ಸೂಚನೆ ನೀಡಿದ ಹಿನ್ನೆಲೆಯಲ್ಲಿ 52 ಹೊಸ ಇಂದಿರಾ ಕ್ಯಾಂಟೀನ್ ಕಟ್ಟಡ ನಿರ್ಮಾಣಕ್ಕೆ ಬಿಬಿಎಂಪಿ ಮುಂದಾಗಿದೆ.
ಸದ್ಯ ಟೆಂಡರ್ ಪ್ರಕ್ರಿಯೆ ನಡೆಯುತ್ತಿದ್ದು, ಗುತ್ತಿಗೆದಾರರ ತಾಂತ್ರಿಕ ಅರ್ಹತೆ ಪರಿಶೀಲನೆ ಪೂರ್ಣಗೊಂಡಿದ್ದು, ಮುಂದಿನ ವಾರದಲ್ಲಿ ಟೆಂಡರ್ ಬಿಡ್ ಪರಿಶೀಲನೆ ಮಾಡಿ ಗುತ್ತಿಗೆದಾರರಿಗೆ ಕಾಮಗಾರಿ ಆರಂಭಿಸಲು ಸೂಚನೆ ನೀಡಲಾಗಿದೆ ಎಂದು ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ಮಾಹಿತಿ ನೀಡಿದ್ದಾರೆ.
ಈಗಾಗಲೇ ಹೊಸ ಇಂದಿರಾ ಕ್ಯಾಂಟೀನ್ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬಹುತೇಕ ಕಡೆ ಜಾಗ ಸಹ ಗುರುತಿಸುವ ಕೆಲಸ ಮಾಡಲಾಗಿದೆ. ಸುಮಾರು 10 ರಿಂದ 12 ಕಡೆ ಸ್ಥಳ ಗುರುತಿಸುವುದು ಬಾಕಿ ಇದೆ ಎಂದು ಅವರು ತಿಳಿಸಿದ್ದಾರೆ.